ಬೆಂಗಳೂರು, ಆ.2: ಕಾವೇರಿ ನದಿ ನೀರಿನ ಹಂಚಿಕೆ ಕುರಿತಾಗಿ ಗೃಹ ಕಚೇರಿ ‘ಕೃಷ್ಣಾ’ದಲ್ಲಿ ನಡೆದ ಮಹತ್ವದ ಸರ್ವಪಕ್ಷ ಸಭೆಯ ಬಳಿಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ರಾಜ್ಯದ ಪ್ರಸ್ತುತ ಜಲ ಪರಿಸ್ಥಿತಿ, ಕಾನೂನು ಹೋರಾಟ, ರೈತರ ಹಿತಾಸಕ್ತಿ ಹಾಗೂ ಮುಂದಿನ ಕ್ರಮಗಳ ಕುರಿತು ವಿಸ್ತೃತ ಮಾಹಿತಿ ನೀಡಿದರು. ಕಾವೇರಿ ವಿಚಾರದಲ್ಲಿ ಯಾವುದೇ ರಾಜಕೀಯ ಭೇದಭಾವವಿಲ್ಲದೆ ರಾಜ್ಯದ ಹಿತಾಸಕ್ತಿ ಕಾಪಾಡುವ ನಿಟ್ಟಿನಲ್ಲಿ ಎಲ್ಲ ಪಕ್ಷಗಳೂ ಒಂದೇ ವೇದಿಕೆಯಲ್ಲಿ ನಿಂತಿರುವುದು ಕರ್ನಾಟಕದ ಶಕ್ತಿಯಾಗಿದೆ ಎಂದು ಅವರು ಹೇಳಿದರು.
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಾತನಾಡುತ್ತಾ, “ನಾನು ಕಾವೇರಿ ಕಣಿವೆಯಲ್ಲಿ ಹುಟ್ಟಿದ ಒಬ್ಬ ರೈತನ ಮಗ. ರಾಜ್ಯದ ರೈತರ ಹಿತಾಸಕ್ತಿ ಹಾಗೂ ಕರ್ನಾಟಕದ ಹಕ್ಕುಗಳನ್ನು ಯಾವುದೇ ಕಾರಣಕ್ಕೂ ಬಲಿಕೊಡುವ ಪ್ರಶ್ನೆಯೇ ಇಲ್ಲ. ಕಾವೇರಿ ವಿವಾದ ನಮಗೂ ಹೊಸದಲ್ಲ, ಜನರಿಗೂ ಹೊಸದಲ್ಲ. ಹಲವು ದಶಕಗಳಿಂದ ಈ ಸಮಸ್ಯೆಯನ್ನು ಎದುರಿಸುತ್ತಾ ಬಂದಿದ್ದೇವೆ. ಬಂಗಾರಪ್ಪ ಅವರ ಕಾಲದಿಂದಲೂ ರಾಜ್ಯದ ಹಿತ ಕಾಪಾಡುವ ಪ್ರಯತ್ನಗಳು ನಡೆದಿವೆ. ಬಿಜೆಪಿ, ಜೆಡಿಎಸ್ ಸೇರಿದಂತೆ ವಿವಿಧ ಸರ್ಕಾರಗಳ ಅವಧಿಯಲ್ಲಿಯೂ ರಾಜ್ಯದ ಪರವಾಗಿ ಕ್ರಮಗಳನ್ನು ಕೈಗೊಳ್ಳಲಾಗಿದೆ. ಅದೇ ಪರಂಪರೆಯನ್ನು ನಮ್ಮ ಸರ್ಕಾರವೂ ಮುಂದುವರಿಸುತ್ತಿದೆ” ಎಂದರು.

ರಾಜ್ಯದಲ್ಲಿ ಬರದ ಛಾಯೆ – ಜಲಾಶಯಗಳಿಗೆ ಒಳಹರಿವು ಹೆಚ್ಚಳ
ರಾಜ್ಯದಲ್ಲಿ ನಿರೀಕ್ಷಿತ ಮಳೆಯ ಬದಲು ಕೇವಲ ಶೇ.30ರಿಂದ 35ರಷ್ಟು ಮಾತ್ರ ಮಳೆಯಾಗಿದ್ದು, ಹಲವೆಡೆ ಬರದ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ತಮಿಳುನಾಡು 9 ಟಿಎಂಸಿ ನೀರು ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದರೂ, ಕಾವೇರಿ ಜಲ ನಿಯಂತ್ರಣ ಸಮಿತಿ (CWRC) ಹಾಗೂ ಕಾವೇರಿ ಜಲ ನಿರ್ವಹಣಾ ಪ್ರಾಧಿಕಾರ (CWMA) 15 ದಿನಗಳ ಕಾಲ ಪ್ರತಿದಿನ 3,500 ಕ್ಯೂಸೆಕ್ಸ್ ನೀರು ಹರಿಸುವಂತೆ ಸೂಚನೆ ನೀಡಿದ್ದವು ಎಂದು ಮುಖ್ಯಮಂತ್ರಿ ತಿಳಿಸಿದರು.
ಆದರೆ ಆ ಸಮಯದಲ್ಲಿ ರಾಜ್ಯದಲ್ಲಿ ಮಳೆಯ ಕೊರತೆಯಿದ್ದ ಕಾರಣ ಸರ್ಕಾರ ರಾಜ್ಯದ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಕಾನೂನು ಕ್ರಮಗಳನ್ನು ಕೈಗೊಂಡಿದೆ ಎಂದರು.
ಇತ್ತೀಚಿನ ಮಳೆಯಿಂದಾಗಿ ಜಲಾಶಯಗಳಿಗೆ ಒಳಹರಿವು ಹೆಚ್ಚಾಗಿದ್ದು, ಪ್ರಸ್ತುತ ಕಬಿನಿಗೆ 24,000 ಕ್ಯೂಸೆಕ್ಸ್, ಕೆಆರ್‌ಎಸ್‌ಗೆ 22,000 ಕ್ಯೂಸೆಕ್ಸ್, ಹೇಮಾವತಿಗೆ 11,884 ಕ್ಯೂಸೆಕ್ಸ್ ಹಾಗೂ ಹಾರಂಗಿಗೆ 10,430 ಕ್ಯೂಸೆಕ್ಸ್ ಸೇರಿದಂತೆ ಒಟ್ಟು 68,314 ಕ್ಯೂಸೆಕ್ಸ್ ನೀರು ಹರಿದುಬರುತ್ತಿದೆ ಎಂದು ಮಾಹಿತಿ ನೀಡಿದರು.

ನಿಯಮದ ಪ್ರಕಾರ 40 ಟಿಎಂಸಿ ನೀರು ಹರಿಸಬೇಕಿತ್ತು
ನಿಯಮಾನುಸಾರ ಈ ವೇಳೆಗೆ ತಮಿಳುನಾಡಿಗೆ ಸುಮಾರು 40 ಟಿಎಂಸಿ ನೀರು ಹರಿಯಬೇಕಾಗಿದ್ದರೂ, ರಾಜ್ಯದ ಪರಿಸ್ಥಿತಿ ಗಮನಿಸಿ ಜೂನ್ ತಿಂಗಳಲ್ಲಿ 2.9 ಟಿಎಂಸಿ ಹಾಗೂ ಜುಲೈನಲ್ಲಿ 0.7 ಟಿಎಂಸಿ ಸೇರಿ ಒಟ್ಟು 3.6 ಟಿಎಂಸಿ ನೀರು ಮಾತ್ರ ಹರಿಸಲಾಗಿದೆ ಎಂದು ಮುಖ್ಯಮಂತ್ರಿ ಸ್ಪಷ್ಟಪಡಿಸಿದರು. ಕಬಿನಿ ಜಲಾಶಯ ಸುರಕ್ಷತೆ ದೃಷ್ಟಿಯಿಂದ ಹೆಚ್ಚುವರಿ ನೀರು ಸಹಜವಾಗಿ ಹರಿದಿರುವುದನ್ನು ಅವರು ವಿವರಿಸಿದರು.
ಕುಡಿಯುವ ನೀರಿಗೆ ಮೊದಲ ಆದ್ಯತೆ
ರಾಜ್ಯದ ಜನರ ಕುಡಿಯುವ ನೀರಿನ ಭದ್ರತೆ ಸರ್ಕಾರದ ಮೊದಲ ಆದ್ಯತೆಯಾಗಿದ್ದು, ಯಾವುದೇ ಸಂಕಷ್ಟ ಎದುರಾದರೂ ಜಲಾಶಯಗಳಲ್ಲಿ ಕನಿಷ್ಠ 40 ಟಿಎಂಸಿ ನೀರನ್ನು ಕಾಯ್ದಿರಿಸಲಾಗುವುದು ಎಂದು ಮುಖ್ಯಮಂತ್ರಿ ಭರವಸೆ ನೀಡಿದರು.
ಪ್ರಸ್ತುತ ಕುಡಿಯುವ ನೀರಿನ ಉದ್ದೇಶಕ್ಕೆ ಹಾಗೂ ಕೆರೆಗಳನ್ನು ತುಂಬಿಸುವ ಕಾರ್ಯಕ್ಕೆ ನಾಲೆಗಳ ಮೂಲಕ ನೀರು ಹರಿಸಲಾಗುತ್ತಿದೆ. ಸರ್ಕಾರದ ಮುಂದಿನ ಸೂಚನೆ ಬರುವವರೆಗೆ ರೈತರು ಹೊಸ ಬೆಳೆಗಳನ್ನು ಬಿತ್ತದಂತೆ ಮನವಿ ಮಾಡಲಾಗಿದೆ ಎಂದರು.
ಕಾನೂನು ಹೋರಾಟ ಮುಂದುವರಿಕೆ
ಕಾವೇರಿ ವಿಚಾರದಲ್ಲಿ ರಾಜ್ಯ ಸರ್ಕಾರ ಕಾನೂನು ಹೋರಾಟವನ್ನು ಮುಂದುವರಿಸಲಿದೆ ಎಂದು ಮುಖ್ಯಮಂತ್ರಿ ತಿಳಿಸಿದರು. ಸರ್ವಪಕ್ಷ ಸಭೆಯಲ್ಲಿ ಮಾಜಿ ಮುಖ್ಯಮಂತ್ರಿಗಳು, ಕೇಂದ್ರ ಸಚಿವರು, ಸಂಸದರು ಹಾಗೂ ಬಿಜೆಪಿ-ಜೆಡಿಎಸ್ ನಾಯಕರಿಂದ ಬಂದಿರುವ ಸಲಹೆಗಳನ್ನು ಸರ್ಕಾರ ಸಕಾರಾತ್ಮಕವಾಗಿ ಸ್ವೀಕರಿಸಿದೆ ಎಂದರು.
ಸಂಕಷ್ಟದ ನೀರು ಹಂಚಿಕೆ ಸೂತ್ರ (Distress Formula) ಜಾರಿಗೆ ಸಂಬಂಧಿಸಿದಂತೆ ಹಾಗೂ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸುವ ವಿಚಾರವಾಗಿ ಕಾನೂನು ತಜ್ಞರೊಂದಿಗೆ ಸಮಾಲೋಚನೆ ನಡೆಸಿ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದರು.
ರಾಜ್ಯದ ನೈಜ ಪರಿಸ್ಥಿತಿಯನ್ನು ಪ್ರಧಾನಿ ಅವರ ಗಮನಕ್ಕೆ ತರಲು ಸರ್ವಪಕ್ಷ ನಿಯೋಗವನ್ನು ಕರೆದೊಯ್ಯುವ ತೀರ್ಮಾನವೂ ಸಭೆಯಲ್ಲಿ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಮೇಕೆದಾಟು ಯೋಜನೆಗೆ ಸರ್ವಪಕ್ಷ ಬೆಂಬಲ
ಮೇಕೆದಾಟು ಯೋಜನೆಯು ಕಾವೇರಿ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸುವ ಮಹತ್ವದ ಯೋಜನೆಯಾಗಿದೆ. ಯೋಜನೆಯಲ್ಲಿ ಯಾವುದೇ ತಾಂತ್ರಿಕ ದೋಷಗಳಿಲ್ಲ. ಈ ಯೋಜನೆಗೆ ಸರ್ವಪಕ್ಷ ನಾಯಕರು ಬೆಂಬಲ ಸೂಚಿಸಿದ್ದು, ಕೇಂದ್ರ ಸರ್ಕಾರಕ್ಕೆ ಅಗತ್ಯ ತಾಂತ್ರಿಕ ವಿವರಗಳನ್ನು ಶೀಘ್ರವೇ ಸಲ್ಲಿಸಲಾಗುವುದು ಎಂದು ಮುಖ್ಯಮಂತ್ರಿ ಹೇಳಿದರು.
ತಮಿಳುನಾಡು ಮುಖ್ಯಮಂತ್ರಿ ವಿಜಯ್ ಜೊತೆ ಸೌಹಾರ್ದಯುತ ಮಾತುಕತೆ
ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರು ರಾಜಕೀಯದಲ್ಲಿ ಹೊಸಬರಾದರೂ ಪ್ರಬುದ್ಧ ನಾಯಕರು. ಕಾವೇರಿ ಪ್ರದೇಶದಲ್ಲಿ ಉದ್ವಿಗ್ನ ಪರಿಸ್ಥಿತಿ ಇರುವ ಹಿನ್ನೆಲೆಯಲ್ಲಿ ಕರ್ನಾಟಕದ ಮನವಿಯನ್ನು ಗೌರವಿಸಿ ತಮ್ಮ ಭೇಟಿಯನ್ನು ಮುಂದೂಡಿದ್ದಾರೆ. ಪರಿಸ್ಥಿತಿ ತಿಳಿಯಾದ ಬಳಿಕ ಅವರೊಂದಿಗೆ ಸೌಹಾರ್ದಯುತವಾಗಿ ಚರ್ಚಿಸಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಪ್ರಯತ್ನಿಸಲಾಗುವುದು ಎಂದು ತಿಳಿಸಿದರು.
ಬರ ಪ್ರದೇಶ ಘೋಷಣೆಗೆ ಸಿದ್ಧತೆ
ಆಗಸ್ಟ್ ಅಂತ್ಯದೊಳಗೆ ರಾಜ್ಯದ ಎಲ್ಲಾ ತಾಲೂಕುಗಳಿಂದ ಮಳೆ ಹಾಗೂ ಬೆಳೆ ಹಾನಿ ಕುರಿತ ವರದಿಗಳನ್ನು ಪಡೆದುಕೊಳ್ಳಲಾಗುವುದು. ಕೇಂದ್ರ ಸರ್ಕಾರದ ಮಾರ್ಗಸೂಚಿಗಳಂತೆ ಕಂದಾಯ ಇಲಾಖೆ ಪರಿಶೀಲನೆ ನಡೆಸಿ ಸಚಿವ ಸಂಪುಟ ಸಭೆಯ ಅನುಮೋದನೆಯ ನಂತರ ಬರಪೀಡಿತ ತಾಲೂಕುಗಳನ್ನು ಅಧಿಕೃತವಾಗಿ ಘೋಷಿಸಲಾಗುವುದು ಎಂದು ಮುಖ್ಯಮಂತ್ರಿ ಹೇಳಿದರು.
ಕರ್ನಾಟಕ ಬಂದ್ ಕೈಬಿಡುವಂತೆ ಮನವಿ
ರಾಜ್ಯ ಸರ್ಕಾರವೇ ರೈತರ ಹಾಗೂ ಕರ್ನಾಟಕದ ಹಕ್ಕುಗಳ ಪರವಾಗಿ ಕಾನೂನು ಹೋರಾಟ ನಡೆಸುತ್ತಿರುವ ಸಂದರ್ಭದಲ್ಲಿ ಪ್ರತಿಭಟನೆ ಅಥವಾ ಬಂದ್ ನಡೆಸುವ ಅಗತ್ಯವಿಲ್ಲ. ಆದ್ದರಿಂದ ಆಗಸ್ಟ್ 13ರಂದು ಕರೆ ನೀಡಲಾಗಿರುವ ಕರ್ನಾಟಕ ಬಂದ್ ಅನ್ನು ಕೈಬಿಡುವಂತೆ ಕನ್ನಡಪರ ಸಂಘಟನೆಗಳು, ರೈತ ಸಂಘಟನೆಗಳು ಹಾಗೂ ವಿರೋಧ ಪಕ್ಷದ ಮುಖಂಡರಲ್ಲಿ ಮುಖ್ಯಮಂತ್ರಿ ಮನವಿ ಮಾಡಿದರು.
ರಾಜ್ಯದ ಪರವಾಗಿ ಎಲ್ಲರಿಗೂ ಕೃತಜ್ಞತೆ
ಕಾವೇರಿ ಜಲ ನಿಯಂತ್ರಣ ಸಮಿತಿ ಹಾಗೂ ಕಾವೇರಿ ಜಲ ನಿರ್ವಹಣಾ ಪ್ರಾಧಿಕಾರದ ಸಭೆಗೂ ಮುನ್ನ ಕೇಂದ್ರ ಜಲಶಕ್ತಿ ಸಚಿವ ಸಿ.ಆರ್. ಪಾಟೀಲ್, ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಶಿ, ವಿ. ಸೋಮಣ್ಣ, ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಹಾಗೂ ಜಗದೀಶ್ ಶೆಟ್ಟರ್ ಸೇರಿದಂತೆ ಹಲವು ನಾಯಕರನ್ನು ಭೇಟಿ ಮಾಡಿ ರಾಜ್ಯದ ನಿಲುವು ಮನವರಿಕೆ ಮಾಡಿಕೊಟ್ಟಿದ್ದಾಗಿ ಮುಖ್ಯಮಂತ್ರಿ ತಿಳಿಸಿದರು.
ಪಕ್ಷಭೇದ ಮರೆತು ರಾಜ್ಯದ ಪರವಾಗಿ ಕೇಂದ್ರ ಮಟ್ಟದಲ್ಲಿ ಧ್ವನಿ ಎತ್ತಿದ ಎಲ್ಲ ರಾಜಕೀಯ ಪಕ್ಷಗಳ ನಾಯಕರು, ಸಂಸದರು ಹಾಗೂ ಜನಪ್ರತಿನಿಧಿಗಳಿಗೆ ಅವರು ಕೃತಜ್ಞತೆ ಸಲ್ಲಿಸಿದರು.

ಸರ್ವಪಕ್ಷ ಸಭೆಯಲ್ಲಿ ಪ್ರಮುಖರ ಉಪಸ್ಥಿತಿ
ಸಭೆಯಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಬಿ.ಎಸ್. ಯಡಿಯೂರಪ್ಪ, ಡಿ.ವಿ. ಸದಾನಂದಗೌಡ, ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ, ವಿ. ಸೋಮಣ್ಣ, ಶೋಭಾ ಕರಂದ್ಲಾಜೆ, ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ, ಸಚಿವರಾದ ರಾಮಲಿಂಗಾ ರೆಡ್ಡಿ, ಕೃಷ್ಣ ಬೈರೇಗೌಡ, ಎಂ.ಬಿ. ಪಾಟೀಲ್, ಕೆ.ಜೆ. ಜಾರ್ಜ್, ನವದೆಹಲಿಯ ಕರ್ನಾಟಕದ ವಿಶೇಷ ಪ್ರತಿನಿಧಿ ಟಿ.ಬಿ. ಜಯಚಂದ್ರ, ಸಂಸದ ಗೋವಿಂದ ಕಾರಜೋಳ, ವಿರೋಧ ಪಕ್ಷದ ನಾಯಕ ಆರ್. ಅಶೋಕ್, ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ಮಾಜಿ ಸಚಿವ ಹೆಚ್.ಕೆ. ಪಾಟೀಲ್, ಬಿ.ಕೆ. ಹರಿಪ್ರಸಾದ್, ನಿವೃತ್ತ ನ್ಯಾಯಮೂರ್ತಿ ನಾಗಮೋಹನದಾಸ್, ಅಡ್ವೋಕೇಟ್ ಜನರಲ್ ಶಶಿಕಿರಣ್ ಶೆಟ್ಟಿ, ಆರ್ಥಿಕ ಸಲಹೆಗಾರ ಎಲ್.ಕೆ. ಅತೀಕ್, ಅಪರ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್ ಸೇರಿದಂತೆ ಹಿರಿಯ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.
ಸಭೆಯಲ್ಲಿ ರಾಜ್ಯದ ಹಿತಾಸಕ್ತಿಯನ್ನು ಕಾಪಾಡುವ ನಿಟ್ಟಿನಲ್ಲಿ ರಾಜಕೀಯ ಭಿನ್ನಾಭಿಪ್ರಾಯಗಳನ್ನು ಬದಿಗೊತ್ತಿ ಒಗ್ಗಟ್ಟಿನಿಂದ ಮುಂದುವರಿಯುವ ಸಂಕಲ್ಪ ವ್ಯಕ್ತವಾಗಿದ್ದು, ಕಾವೇರಿ ನೀರಿನ ಸಮಸ್ಯೆಯನ್ನು ಕಾನೂನು ಹಾಗೂ ಸೌಹಾರ್ದಯುತ ಮಾತುಕತೆಯ ಮೂಲಕ ಪರಿಹರಿಸಲು ಎಲ್ಲ ಪಕ್ಷಗಳು ಒಮ್ಮತ ವ್ಯಕ್ತಪಡಿಸಿದವು.






