ಬೆಂಗಳೂರು: ರಾಜ್ಯ ಸರ್ಕಾರ ಬಸ್ ಪ್ರಯಾಣ ದರ ಏರಿಕೆ ಮಾಡಿರುವುದನ್ನು ಖಂಡಿಸಿ ಬಿಜೆಪಿ ವತಿಯಿಂದ ನಗರದ ಮೆಜೆಸ್ಟಿಕ್ನಲ್ಲಿ ಭಿಕ್ಷಾಪಾತ್ರೆ ಹಿಡಿದು ಪ್ರತಿಭಟನೆ ನಡೆಸಲಾಯಿತು. ಈ ವೇಳೆ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಇದು ಜನಸಾಮಾನ್ಯರನ್ನು ಸುಲಿಗೆ ಮಾಡುತ್ತಿರುವ ದುಷ್ಟ ಹಾಗೂ ಲೂಟಿ ಸರ್ಕಾರ ಎಂದು ಟೀಕಿಸಿದರು.
ಪ್ರತಿಭಟನೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಸಾಧ್ಯವಾಗದೆ ಜನರ ಮೇಲೆ ಒಂದರ ಹಿಂದೆ ಒಂದರಂತೆ ತೆರಿಗೆ ಹಾಗೂ ಬೆಲೆ ಏರಿಕೆಯ ಹೊರೆ ಹಾಕಲಾಗುತ್ತಿದೆ. ಗ್ಯಾರಂಟಿ ಯೋಜನೆಗಳಿಗಾಗಿ ಸರ್ಕಾರಕ್ಕೆ ಸುಮಾರು ಐದರಿಂದ ಆರು ಸಾವಿರ ಕೋಟಿ ರೂ.ಗಳ ಅಗತ್ಯವಿದೆ. ಆದರೆ, ಆ ಹಣವನ್ನು ಕ್ರೋಡೀಕರಿಸುವ ಸಾಮರ್ಥ್ಯ ಸರ್ಕಾರಕ್ಕಿಲ್ಲ. ಹೀಗಾಗಿ ಜನರ ಜೇಬಿಗೆ ಕತ್ತರಿ ಹಾಕುವ ಮೂಲಕ ಹಣ ಸಂಗ್ರಹಿಸಲು ಮುಂದಾಗಿದೆ ಎಂದು ಆರೋಪಿಸಿದರು.

ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆಯಿಂದಲೇ ಐದರಿಂದ ಆರು ಸಾವಿರ ಕೋಟಿ ರೂ. ಆದಾಯ ಸಂಗ್ರಹಿಸಿದೆ. ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮೂಲಕ ಜನರಿಂದ ಪಡೆದ ಹಣವನ್ನು ವಾಪಸ್ ನೀಡಲಿ. ಜನರ ಮೇಲೆ ಬೆಲೆ ಏರಿಕೆಯ ಹೊರೆ ಹಾಕುವುದನ್ನು ನಿಲ್ಲಿಸಲಿ. ಸರ್ಕಾರಕ್ಕೆ ನೌಕರರಿಗೆ ಸಂಬಳ ನೀಡಲೂ ಹಣವಿಲ್ಲದಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ವಾಗ್ದಾಳಿ ನಡೆಸಿದರು.

ಸಾರಿಗೆ ಇಲಾಖೆಯನ್ನು ಮುಚ್ಚುವ ಸ್ಥಿತಿಗೆ ತಂದಿದ್ದಾರೆ
ಹಾಲು, ಮೊಸರು, ತುಪ್ಪ ಸೇರಿದಂತೆ ಅಗತ್ಯ ವಸ್ತುಗಳ ಬೆಲೆಯನ್ನೂ ಏರಿಕೆ ಮಾಡಲಾಗಿದೆ. ಜನಸಾಮಾನ್ಯರು ಜೀವನ ನಡೆಸುವುದಾದರೂ ಹೇಗೆ ಎಂದು ಪ್ರಶ್ನಿಸಿದ ಅವರು, ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಸಾರಿಗೆ ಇಲಾಖೆಯನ್ನು ಮುಚ್ಚುವ ಹಂತಕ್ಕೆ ತಂದಿದ್ದಾರೆ ಎಂದು ಆರೋಪಿಸಿದರು.
ರಾಜ್ಯದ ಸಾರಿಗೆ ಬಸ್ಗಳ ಸ್ಥಿತಿ ಶೋಚನೀಯವಾಗಿದೆ. ಬಸ್ಗಳಿಗೆ ಟೈರ್ ಇಲ್ಲ, ಟ್ಯೂಬ್ ಇಲ್ಲ, ಬ್ಯಾಟರಿ ಇಲ್ಲ, ಹ್ಯಾಂಡಲ್ ಮತ್ತು ಸ್ಟೇರಿಂಗ್ಗಳೂ ಸಮರ್ಪಕವಾಗಿಲ್ಲ. ರಸ್ತೆಯಲ್ಲಿ ಸಂಚರಿಸಬೇಕಾದ ಬಸ್ಗಳು ಸಂಚಾರಕ್ಕೆ ಯೋಗ್ಯವಾಗಿಲ್ಲದ ಸ್ಥಿತಿಯಲ್ಲಿವೆ. ಓಡಾಡುವ ಬಸ್ಗಳಿಗಿಂತ ತಳ್ಳಿಕೊಂಡು ಹೋಗುವ ಬಸ್ಗಳೇ ಹೆಚ್ಚಾಗಿವೆ ಎಂಬಂತಾಗಿದೆ ಎಂದು ವ್ಯಂಗ್ಯವಾಡಿದರು.

ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರ ನೀತಿಗೆಟ್ಟ ಸರ್ಕಾರವಾಗಿದೆ. ಕಾಂಗ್ರೆಸ್ ಪಕ್ಷ ಭ್ರಷ್ಟಾಚಾರದಲ್ಲಿ ಮುಳುಗಿದ್ದು, ಜನಸಾಮಾನ್ಯರನ್ನು ವಿವಿಧ ರೀತಿಯಲ್ಲಿ ಸುಲಿಗೆ ಮಾಡುತ್ತಿದೆ. ಜನವಿರೋಧಿ ನೀತಿಗಳನ್ನು ಅನುಸರಿಸುತ್ತಿರುವ ಈ ಸರ್ಕಾರ ಅಧಿಕಾರದಲ್ಲಿ ಮುಂದುವರಿಯಲು ಯಾವುದೇ ನೈತಿಕ ಹಕ್ಕಿಲ್ಲ. ರಾಜ್ಯ ಸರ್ಕಾರ ತೊಲಗಬೇಕು ಎಂದು ಒತ್ತಾಯಿಸಿದರು.

ಬಸ್ ಪ್ರಯಾಣ ದರ ಏರಿಕೆ ಸೇರಿದಂತೆ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ಬಿಜೆಪಿ ರಾಜ್ಯಾದ್ಯಂತ ತೀವ್ರ ಸ್ವರೂಪದ ಪ್ರತಿಭಟನೆಗಳನ್ನು ಹಮ್ಮಿಕೊಳ್ಳಲಿದೆ ಎಂದು ಎಚ್ಚರಿಕೆ ನೀಡಿದರು.









