ತಾಜಾ ಸುದ್ದಿ ರಾಜಕೀಯ ಕ್ರೈಂ ನ್ಯೂಸ್ ರಾಜ್ಯ-ಜಿಲ್ಲೆ ದೇಶ-ವಿದೇಶ ಸೋಷಿಯಲ್ ಮೀಡಿಯಾ ಮನರಂಜನೆ ಕಾನೂನು ಜೀವನಶೈಲಿ ಕ್ರೀಡೆ ಗುರುಪರಂಪರೆ ವಿಡೀಯೋ English News

ಕಾಂಗ್ರೆಸ್ಸಿಗೆ ನಡುಕ ಶುರುವಾಗಿದೆ, ಮೋದಿಯವರು ನಾಲ್ಕನೇ ಬಾರಿಗೆ ಪ್ರಧಾನಿಯಾಗುವುದು ಖಚಿತ ಎಂಬ ಆತಂಕ: ಬಿ.ವೈ. ವಿಜಯೇಂದ್ರ

On: November 6, 2026 6:27 PM
Follow Us:

ಮೈಸೂರು, ನ.6: ದೇಶದ ರಾಜಕೀಯದಲ್ಲಿ ಮತ್ತೊಮ್ಮೆ ಅಧಿಕಾರದ ಕನಸು ಕಾಣುತ್ತಿರುವ ಕಾಂಗ್ರೆಸ್ ನಾಯಕರಿಗೆ ನರೇಂದ್ರ ಮೋದಿ ಅವರ ಜನಪ್ರಿಯತೆ ಮತ್ತು ನಾಯಕತ್ವವೇ ದೊಡ್ಡ ಸವಾಲಾಗಿ ಪರಿಣಮಿಸಿದೆ. ಒಂದು ಕಡೆ ಪ್ರಧಾನಿ ಪಟ್ಟದ ಕನಸು ಕಾಣುತ್ತಿರುವ ರಾಹುಲ್ ಗಾಂಧಿ, ಮತ್ತೊಂದೆಡೆ ದೇಶದ ಅಭಿವೃದ್ಧಿಯ ವೇಗಕ್ಕೆ ಅಡ್ಡಿಯಾಗಲು ಪ್ರಯತ್ನಿಸುತ್ತಿರುವ ಕಾಂಗ್ರೆಸ್ ನಾಯಕರು. ಅಧಿಕಾರದ ಹಪಾಹಪಿಯಲ್ಲಿ ದೇಶದಲ್ಲಿ ಗೊಂದಲ ಮತ್ತು ಅರಾಜಕತೆ ಸೃಷ್ಟಿಸುವ ಪ್ರಯತ್ನ ನಡೆಯುತ್ತಿದೆ. ಆದರೆ, ದೇಶದ ಜನರ ವಿಶ್ವಾಸ ಗಳಿಸಿರುವ ನರೇಂದ್ರ ಮೋದಿ ಅವರನ್ನು ಅಧಿಕಾರದಿಂದ ಕೆಳಗಿಳಿಸುವುದು ಕಾಂಗ್ರೆಸ್‌ನಿಂದ ಸಾಧ್ಯವಿಲ್ಲ. ಮೋದಿ ಅವರು ನಾಲ್ಕನೇ ಬಾರಿಗೆ ಪ್ರಧಾನಿಯಾಗುವ ಆತಂಕವೇ ಕಾಂಗ್ರೆಸ್ಸಿಗರನ್ನು ಕಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವಾಗ್ದಾಳಿ ನಡೆಸಿದರು.

ಮೈಸೂರಿನಲ್ಲಿ ಇಂದು ಬಿಜೆಪಿ ವತಿಯಿಂದ ಹಮ್ಮಿಕೊಂಡಿದ್ದ ‘ಪ್ರಜಾಪ್ರಭುತ್ವ ಉಳಿಸಿ, ಅರಾಜಕತೆ ಅಳಿಸಿ – ಪಾದಯಾತ್ರೆ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದ ರಾಜಕೀಯ ನಿಲುವು, ರಾಹುಲ್ ಗಾಂಧಿ ಅವರ ನಾಯಕತ್ವ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ನಡೆಯುತ್ತಿರುವ ಪ್ರತಿಭಟನೆಗಳನ್ನು ಖಂಡಿಸಿದರು.

ಕಾರ್ಯಕ್ರಮದ ಆರಂಭದಲ್ಲಿ ಸಂವಿಧಾನ ಶಿಲ್ಪಿ ಬಾಬಾಸಾಹೇಬ್ ಡಾ. ಬಿ.ಆರ್. ಅಂಬೇಡ್ಕರ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಪಾದಯಾತ್ರೆಗೆ ಚಾಲನೆ ನೀಡಲಾಯಿತು.

ಕೇಂದ್ರದಲ್ಲಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಭಾರತ ಜಾಗತಿಕ ಮಟ್ಟದಲ್ಲಿ ಪ್ರಬಲ ರಾಷ್ಟ್ರವಾಗಿ ಹೊರಹೊಮ್ಮುತ್ತಿದೆ. ದೇಶದ ಅಭಿವೃದ್ಧಿ, ಭದ್ರತೆ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರತದ ಗೌರವ ಹೆಚ್ಚುತ್ತಿರುವುದನ್ನು ಕಾಂಗ್ರೆಸ್ ನಾಯಕರಿಗೆ ಸಹಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಈ ಕಾರಣದಿಂದಲೇ ಕೇಂದ್ರ ಸರ್ಕಾರದ ವಿರುದ್ಧ ನಿರಂತರವಾಗಿ ಅಪಪ್ರಚಾರ ಮತ್ತು ರಾಜಕೀಯ ಷಡ್ಯಂತ್ರ ನಡೆಸುತ್ತಿದ್ದಾರೆ ಎಂದು ಆರೋಪಿಸಿದರು.

ರಾಹುಲ್ ಗಾಂಧಿ ಅವರು ವಿರೋಧ ಪಕ್ಷದ ನಾಯಕರಾಗಿ ಜವಾಬ್ದಾರಿಯುತವಾಗಿ ನಡೆದುಕೊಳ್ಳುವ ಬದಲು, ದೇಶದಲ್ಲಿ ಗೊಂದಲ ಸೃಷ್ಟಿಸುವ ರಾಜಕಾರಣಕ್ಕೆ ಮುಂದಾಗಿದ್ದಾರೆ. ಅವರ ನಾಯಕತ್ವದಲ್ಲಿ ಕಾಂಗ್ರೆಸ್ ಪಕ್ಷ ಮತ್ತೆ ಅಧಿಕಾರಕ್ಕೆ ಬರುವುದು ಸಾಧ್ಯವಿಲ್ಲ. ಕೆಲವರಿಗೆ ಹೇಗಾದರೂ ಮಾಡಿ ಒಂದೇ ಒಂದು ಬಾರಿಯಾದರೂ ಪ್ರಧಾನಿಯಾಗಬೇಕೆಂಬ ಕನಸಿದೆ. ರಾಹುಲ್ ಗಾಂಧಿ ಅವರಿಗೆ ಮದುವೆಯೂ ಆಗಿಲ್ಲ, ಪ್ರಧಾನಿ ಆಗಬೇಕೆಂಬ ಹುಚ್ಚು ಮಾತ್ರ ಬಿಡುತ್ತಿಲ್ಲ ಎಂಬ ರೀತಿಯಲ್ಲಿ ವಿಜಯೇಂದ್ರ ವ್ಯಂಗ್ಯವಾಡಿದರು.

ಎನ್‌ಡಿಎ ಸರ್ಕಾರವನ್ನು ಹೇಗಾದರೂ ಮಾಡಿ ಅಧಿಕಾರದಿಂದ ಕೆಳಗಿಳಿಸಬೇಕೆಂಬ ಉದ್ದೇಶದಿಂದ ಕಾಂಗ್ರೆಸ್ ನಾಯಕರು ಸಂಚು ಮತ್ತು ಷಡ್ಯಂತ್ರಗಳನ್ನು ರೂಪಿಸುತ್ತಿದ್ದಾರೆ. ನಾಲ್ಕನೇ ಬಾರಿಗೆ ನರೇಂದ್ರ ಮೋದಿ ಅವರು ಪ್ರಧಾನಿಯಾಗುವ ಸಾಧ್ಯತೆಯೇ ಕಾಂಗ್ರೆಸ್ಸಿನ ಆತಂಕಕ್ಕೆ ಕಾರಣವಾಗಿದೆ. ಇದರಿಂದಾಗಿ ದೆಹಲಿ ಸೇರಿದಂತೆ ದೇಶದ ವಿವಿಧೆಡೆ ಪ್ರತಿಭಟನೆಗಳನ್ನು ನಡೆಸಿ, ಜನರಲ್ಲಿ ಗೊಂದಲ ಮೂಡಿಸುವ ಪ್ರಯತ್ನ ಮಾಡುತ್ತಿದ್ದಾರೆ. ಯುವಜನರನ್ನು ಬೀದಿಗೆ ತಂದು ಅರಾಜಕತೆ ಸೃಷ್ಟಿಸುವ ಮೂಲಕ ಕೇಂದ್ರ ಸರ್ಕಾರವನ್ನು ಅಸ್ಥಿರಗೊಳಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ದೂರಿದರು.

ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಭಾರತ ಅಭಿವೃದ್ಧಿಯ ಪಥದಲ್ಲಿ ಮುನ್ನಡೆಯುತ್ತಿದೆ. ಭಯೋತ್ಪಾದನೆ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗಿದೆ. ನಕ್ಸಲಿಸಂ ನಿರ್ಮೂಲನೆಗೆ ಪರಿಣಾಮಕಾರಿ ಕಾರ್ಯಾಚರಣೆಗಳು ನಡೆಯುತ್ತಿವೆ. ದೇಶದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡಲು ಕೇಂದ್ರ ಸರ್ಕಾರ ಆದ್ಯತೆ ನೀಡಿದೆ. ಭಾರತದ ಪ್ರಗತಿ ಮತ್ತು ಬಲಿಷ್ಠ ನಾಯಕತ್ವವನ್ನು ಸಹಿಸದ ಕೆಲವು ಶಕ್ತಿಗಳು ದೇಶದಲ್ಲಿ ಅಶಾಂತಿ ಮೂಡಿಸಲು ಪ್ರಯತ್ನಿಸುತ್ತಿವೆ ಎಂದು ಆರೋಪಿಸಿದರು.

ಜಾರ್ಖಂಡ್‌ನ ಸಚಿವ ಅನ್ಸಾರಿ ಅವರು, ರಾಹುಲ್ ಗಾಂಧಿ ಮನಸ್ಸು ಮಾಡಿದರೆ 40 ಲಕ್ಷ ಜನರನ್ನು ಬೀದಿಗಿಳಿಸಿ ದೇಶಕ್ಕೆ ಬೆಂಕಿ ಹಚ್ಚುವ ಕೆಲಸ ಮಾಡಬಹುದು ಎಂಬ ಹೇಳಿಕೆ ನೀಡಿದ್ದಾರೆ. ಇಂತಹ ಹೇಳಿಕೆಗಳು ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕವಾಗಿವೆ. ದೇಶದಲ್ಲಿ ಅರಾಜಕತೆ ಸೃಷ್ಟಿಸುವ ಮನಸ್ಥಿತಿಯ ವಿರುದ್ಧ ಜನಜಾಗೃತಿ ಮೂಡಿಸುವ ಉದ್ದೇಶದಿಂದಲೇ ಬಿಜೆಪಿ ವತಿಯಿಂದ ‘ಪ್ರಜಾಪ್ರಭುತ್ವ ಉಳಿಸಿ, ಅರಾಜಕತೆ ಅಳಿಸಿ’ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.

ಕರ್ನಾಟಕದ ಕಾಂಗ್ರೆಸ್ ಸರ್ಕಾರದ ವಿರುದ್ಧವೂ ತೀವ್ರ ವಾಗ್ದಾಳಿ ನಡೆಸಿದ ವಿಜಯೇಂದ್ರ, ರಾಜ್ಯದಲ್ಲಿ ಹಬ್ಬಗಳ ಆಚರಣೆಗೂ ಜನರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಟೀಕಿಸಿದರು.

ಗಣೇಶ ಹಬ್ಬ ಆಚರಿಸಲೂ ರಾಜ್ಯದಲ್ಲಿ ಸಮಸ್ಯೆಗಳು ಎದುರಾಗುತ್ತಿವೆ. ದಸರಾ ಮತ್ತು ದೀಪಾವಳಿ ಹಬ್ಬಗಳ ಸಂದರ್ಭದಲ್ಲಿ ಹಾಲು, ಮೊಸರು ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಲಾಗಿದೆ. ಬೆಲೆ ಏರಿಕೆಯ ಹೊರೆ ಈಗಾಗಲೇ ಸಂಕಷ್ಟದಲ್ಲಿರುವ ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳ ಮೇಲೆ ಬೀಳುತ್ತಿದೆ. ಜನಸಾಮಾನ್ಯರ ಬದುಕಿನ ಬಗ್ಗೆ ಕಾಳಜಿ ಇಲ್ಲದ ಈ ಸರ್ಕಾರ ಬಡವರ ವಿರೋಧಿ ಮತ್ತು ಜನವಿರೋಧಿ ಸರ್ಕಾರವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯದ ರೈತರು ಸಂಕಷ್ಟದಲ್ಲಿದ್ದಾರೆ. ಯುವಜನರಿಗೆ ಉದ್ಯೋಗಾವಕಾಶ ಕಲ್ಪಿಸುವಲ್ಲಿ ಸರ್ಕಾರ ವಿಫಲವಾಗಿದೆ. ಜನರ ನಿರೀಕ್ಷೆಗಳನ್ನು ಈಡೇರಿಸುವ ಬದಲು ಬೆಲೆ ಏರಿಕೆಯ ಮೂಲಕ ಜನರ ಮೇಲೆ ಮತ್ತಷ್ಟು ಆರ್ಥಿಕ ಹೊರೆ ಹೊರಿಸಲಾಗುತ್ತಿದೆ. ಇಂತಹ ರೈತವಿರೋಧಿ, ಯುವಜನವಿರೋಧಿ ಮತ್ತು ಹಿಂದೂ ವಿರೋಧಿ ಸರ್ಕಾರವನ್ನು ಅಧಿಕಾರದಿಂದ ಕೆಳಗಿಳಿಸಲು ಬಿಜೆಪಿ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಒಗ್ಗಟ್ಟಿನಿಂದ ಸಜ್ಜಾಗಬೇಕು ಎಂದು ಕರೆ ನೀಡಿದರು.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಆಡಳಿತದಿಂದ ಜನರು ಬೇಸತ್ತಿದ್ದಾರೆ. ಜನರ ಸಮಸ್ಯೆಗಳಿಗೆ ಸ್ಪಂದಿಸದ ಸರ್ಕಾರವನ್ನು ಮನೆಗೆ ಕಳುಹಿಸುವ ಸಂಕಲ್ಪವನ್ನು ನಾವೆಲ್ಲರೂ ಮಾಡಬೇಕು. ಜನರ ಪರವಾಗಿ ಹೋರಾಟ ನಡೆಸುವ ಮೂಲಕ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿಹಿಡಿಯಬೇಕು ಎಂದು ವಿಜಯೇಂದ್ರ ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ಮಾಜಿ ಸಚಿವ ಸಿ.ಟಿ. ರವಿ, ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಮ್ ಗೌಡ, ವಿಧಾನಪರಿಷತ್ತಿನ ವಿಪಕ್ಷ ಮುಖ್ಯ ಸಚೇತಕ ಎನ್. ರವಿಕುಮಾರ್, ಶಾಸಕ ಶ್ರೀವತ್ಸ ಸೇರಿದಂತೆ ಪಕ್ಷದ ಚುನಾಯಿತ ಪ್ರತಿನಿಧಿಗಳು, ಮಾಜಿ ಸಂಸದರು, ಮಾಜಿ ಶಾಸಕರು, ವಿಧಾನಪರಿಷತ್ತಿನ ಮಾಜಿ ಸದಸ್ಯರು, ರಾಜ್ಯ ಪದಾಧಿಕಾರಿಗಳು, ಜಿಲ್ಲಾಧ್ಯಕ್ಷರು, ಪಕ್ಷದ ಮುಖಂಡರು ಹಾಗೂ ಅಪಾರ ಸಂಖ್ಯೆಯ ಕಾರ್ಯಕರ್ತರು ಭಾಗವಹಿಸಿದ್ದರು.

K.M.Sathish Gowda

Join WhatsApp

Join Now

Facebook

Join Now

Read more

ಮಗನ ಎಂಬಿಬಿಎಸ್ ಫೀಸ್‌ಗೆ ಗೃಹಲಕ್ಷ್ಮಿ ಹಣ; ಮಗಳ ವಿದೇಶಿ ಕನಸಿಗೂ ಆಸರೆ: ಮಹಿಳೆಯರ ಬದುಕಿನಲ್ಲಿ ಹೊಸ ಬೆಳಕು ಮೂಡಿಸಿದ 2 ಸಾವಿರ ರೂ.!

ಹಾಲು, ಮೊಸರು, ಬಸ್ ಪ್ರಯಾಣ ದರ ಏರಿಕೆಯಿಂದ ಜನಜೀವನ ದುಸ್ತರ: ಕಾಂಗ್ರೆಸ್ ಸರ್ಕಾರದ ವಿರುದ್ಧ ಜೆಡಿಎಸ್ ಆಕ್ರೋಶ! ಬೆಲೆ ಏರಿಕೆಯ ಬರೆ ಜನಸಾಮಾನ್ಯರ ಮೇಲೆ, ಅಭಿವೃದ್ಧಿ ಮಾತ್ರ ಶೂನ್ಯ: ಕೆ.ಬಿ. ಪ್ರಸನ್ನ ಕುಮಾರ್ ವಾಗ್ದಾಳಿ

ನ್ಯಾಯ, ನೀತಿ, ಧರ್ಮ ಹಾಗೂ ಸೇವಾ ಮನೋಭಾವ ಉಳಿಸುವಲ್ಲಿ ಅಮೃತಾನಂದಮಯಿ ಮಾತೆಯ ಪಾತ್ರ ಮಹತ್ವದ್ದು: ಸಿಎಂ ಡಿ.ಕೆ. ಶಿವಕುಮಾರ್

ರಾಜ್ಯದ ಅಭಿವೃದ್ಧಿಗೆ ಸಚಿವ ಸಂಪುಟದ ಮಹತ್ವದ ನಿರ್ಧಾರ: 20 ಸಾವಿರ ಕೋಟಿ ರೂ. ವೆಚ್ಚದಲ್ಲಿ ರಸ್ತೆ, ಸೇತುವೆ ಅಭಿವೃದ್ಧಿಗೆ ಅಸ್ತು

ಶಿವಮೊಗ್ಗ ತುಂಗಾ ಸೇತುವೆ, ಭದ್ರಾವತಿ ಸೇತುವೆ ಮರುನಿರ್ಮಾಣಕ್ಕೆ 82 ಕೋಟಿ ರೂ. ಅನುದಾನ: ಸಚಿವ ಸಂಪುಟ ಅಸ್ತು

ಪ್ರತಿ ರೈತನಿಗೆ ₹5,000 ಬರ ಪರಿಹಾರ: ಮೊದಲ ಕಂತಿನಲ್ಲಿ ₹2,500 ಬಿಡುಗಡೆಗೆ ಸಿಎಂ ಡಿ.ಕೆ. ಶಿವಕುಮಾರ್ ನಿರ್ಧಾರ

Leave a Comment