ಸಾಮಾಜಿಕ ಸಾಮರಸ್ಯ ಕಾಪಾಡಲು ಸಚಿವ ಸಂಪುಟದ ಒಮ್ಮತದ ತೀರ್ಮಾನ; ಜಾತಿ-ಜಾತಿಗಳ ನಡುವೆ ವೈಷಮ್ಯ ಸೃಷ್ಟಿಸುವ ಪ್ರಯತ್ನಗಳಿಗೆ ಅವಕಾಶವಿಲ್ಲ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಬೆಂಗಳೂರು: ಜಗಜ್ಯೋತಿ ಬಸವಣ್ಣನವರು ಕರ್ನಾಟಕದ ಸಾಂಸ್ಕೃತಿಕ ನಾಯಕರು. ಅವರ ತತ್ವ, ಆದರ್ಶ ಹಾಗೂ ಸಾಮಾಜಿಕ ಚಿಂತನೆಗಳು ಇಡೀ ದೇಶಕ್ಕೆ ಮಾದರಿಯಾಗಿವೆ. ಬಸವಣ್ಣನವರ ಗೌರವಕ್ಕೆ ಧಕ್ಕೆ ತರುವ ಆರೋಪ ಎದುರಿಸುತ್ತಿರುವ ‘ಬಸವ ಮಂಟಪ’ ಕೃತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಈ ಸಂಬಂಧ ಕಾನೂನು ಪ್ರಕಾರ ಅಗತ್ಯ ಕ್ರಮ ಕೈಗೊಳ್ಳಲು ಸಚಿವ ಸಂಪುಟ ಒಮ್ಮತದ ತೀರ್ಮಾನ ಕೈಗೊಂಡಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.
ಶುಕ್ರವಾರ ವಿಧಾನಸೌಧದ ಬಳಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬಸವಣ್ಣನವರ ವಿಚಾರಧಾರೆ ಮತ್ತು ಆದರ್ಶಗಳನ್ನು ಸರ್ಕಾರಗಳು ಗೌರವದಿಂದ ಸ್ವೀಕರಿಸಿ, ಅವುಗಳನ್ನು ವಿವಿಧ ಕಾರ್ಯಕ್ರಮಗಳ ಮೂಲಕ ಅನುಷ್ಠಾನಗೊಳಿಸುತ್ತಿವೆ. ಅವರ ಹೆಜ್ಜೆಗುರುತುಗಳು ಇಡೀ ದೇಶಕ್ಕೆ ಮಾದರಿಯಾಗಿದ್ದು, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿಯೂ ಅವರ ಪ್ರತಿಮೆ ಸ್ಥಾಪಿಸಿರುವುದು ಕರ್ನಾಟಕಕ್ಕೆ ಹೆಮ್ಮೆಯ ಸಂಗತಿಯಾಗಿದೆ ಎಂದರು.
ಬಸವಣ್ಣನವರ ಆಚಾರ-ವಿಚಾರಗಳನ್ನು ಪ್ರತಿಯೊಂದು ಗ್ರಾಮ, ಮನೆ, ಶಾಲೆ ಮತ್ತು ಸರ್ಕಾರಿ ಕಚೇರಿಗಳಲ್ಲಿಯೂ ಜನರಿಗೆ ಪರಿಚಯಿಸುವ ಕೆಲಸ ನಡೆಯುತ್ತಿದೆ. ಅವರ ಭಾವಚಿತ್ರ, ಸಾಮಾಜಿಕ ಚಿಂತನೆ ಹಾಗೂ ಸಮಾನತೆಯ ಸಂದೇಶಗಳನ್ನು ಸ್ಮರಿಸಿಕೊಳ್ಳುವ ಮೂಲಕ ಅವರ ಮಾರ್ಗದರ್ಶನದಲ್ಲಿ ಮುನ್ನಡೆಯುತ್ತಿದ್ದೇವೆ ಎಂದು ಹೇಳಿದರು.
ಜಾತಿ-ಜಾತಿಗಳ ನಡುವೆ ವೈಷಮ್ಯ ಸೃಷ್ಟಿಸುವ ಪ್ರಯತ್ನ ಸರಿಯಲ್ಲ
ಸಮಾಜದಲ್ಲಿ ಜಾತಿ-ಜಾತಿಗಳ ನಡುವೆ ಪರಸ್ಪರ ವೈಷಮ್ಯ ಮೂಡಿಸುವ ಹಾಗೂ ಸಂಘರ್ಷಕ್ಕೆ ಕಾರಣವಾಗುವಂತಹ ಬೆಳವಣಿಗೆಗಳು ನಡೆಯುತ್ತಿರುವುದು ಆತಂಕಕಾರಿ. ಕೆಲವು ಮಾಧ್ಯಮಗಳು ಮತ್ತು ಕಿಡಿಗೇಡಿಗಳಿಂದ ಇಂತಹ ವಾತಾವರಣ ಸೃಷ್ಟಿಯಾಗುತ್ತಿದೆ. ಸಮಾಜದಲ್ಲಿ ಶಾಂತಿ, ಸೌಹಾರ್ದತೆ ಮತ್ತು ಸಾಮರಸ್ಯ ಕಾಪಾಡುವುದು ಸರ್ಕಾರದ ಪ್ರಮುಖ ಜವಾಬ್ದಾರಿಯಾಗಿದೆ ಎಂದು ತಿಳಿಸಿದರು.
‘ಬಸವ ಮಂಟಪ’ ಕೃತಿಯ ವಿಚಾರವಾಗಿ ಸಚಿವ ಸಂಪುಟದ ಸಹೋದ್ಯೋಗಿಗಳಾದ ಈಶ್ವರ್ ಖಂಡ್ರೆ, ಎಂ.ಬಿ. ಪಾಟೀಲ್, ಶಿವಾನಂದ ಪಾಟೀಲ್, ಬಸವರಾಜ ರಾಯರೆಡ್ಡಿ, ಯತೀಂದ್ರ ಸಿದ್ದರಾಮಯ್ಯ ಹಾಗೂ ಕೆ.ಜೆ. ಮುನಿಯಪ್ಪ ಸೇರಿದಂತೆ ಎಲ್ಲ ಸಚಿವರು ಒಗ್ಗಟ್ಟಿನಿಂದ ಚರ್ಚಿಸಿ ನಿರ್ಧಾರ ಕೈಗೊಂಡಿದ್ದಾರೆ. ಸಂಪುಟದ ಎಲ್ಲ ಸದಸ್ಯರು ಒಟ್ಟಾಗಿ ಸಹಿ ಹಾಕಿ ಸರ್ಕಾರದ ನಿಲುವನ್ನು ವ್ಯಕ್ತಪಡಿಸಿದ್ದಾರೆ. ಬಸವ ಸಮಿತಿಯವರೂ ಈ ಕುರಿತು ಪತ್ರದ ಮೂಲಕ ಮನವಿ ಸಲ್ಲಿಸಿದ್ದಾರೆ ಎಂದರು.
ಈ ವಿಚಾರವನ್ನು ಇನ್ನಷ್ಟು ಸುದೀರ್ಘವಾಗಿ ಚರ್ಚಿಸಬಹುದಾಗಿದೆ. ಆದರೆ ಸದ್ಯದ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ‘ಬಸವ ಮಂಟಪ’ ಕೃತಿಯನ್ನು ಮುಟ್ಟುಗೋಲು ಹಾಕಿಕೊಳ್ಳುವ ವ್ಯವಸ್ಥೆ ಮಾಡಲಾಗುತ್ತಿದೆ. ಈಗಾಗಲೇ ಈ ಸಂಬಂಧ ಅಗತ್ಯ ಮಾರ್ಗದರ್ಶನ ನೀಡಿದ್ದು, ಪ್ರಕರಣದಲ್ಲಿ ಯಾರೆಲ್ಲ ಭಾಗಿಯಾಗಿದ್ದಾರೆ ಎಂಬುದನ್ನು ಪರಿಶೀಲಿಸಿ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲು ಸಚಿವ ಸಂಪುಟ ನಿರ್ಧರಿಸಿದೆ ಎಂದು ಸ್ಪಷ್ಟಪಡಿಸಿದರು.
ಪ್ರತಿಭಟನೆ, ಶಾಂತಿಭಂಗ ತಡೆಯಲು ತಕ್ಷಣದ ನಿರ್ಧಾರ
ಈ ವಿಚಾರವಾಗಿ ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಕೂಡ ತಮ್ಮೊಂದಿಗೆ ಚರ್ಚಿಸಿದ್ದಾರೆ. ರಾಜ್ಯದ ಹಲವು ಕಡೆಗಳಲ್ಲಿ ಪ್ರತಿಭಟನೆಗಳು ನಡೆಯುವ ಹಾಗೂ ಶಾಂತಿ ಸುವ್ಯವಸ್ಥೆಗೆ ಧಕ್ಕೆಯಾಗುವ ಸಾಧ್ಯತೆಗಳು ಕಂಡುಬಂದಿದ್ದವು. ಸಮಾಜದಲ್ಲಿ ಸಂಘರ್ಷದ ವಾತಾವರಣ ನಿರ್ಮಾಣವಾಗುವುದನ್ನು ತಡೆಯುವ ಉದ್ದೇಶದಿಂದ ಸರ್ಕಾರ ತಕ್ಷಣವೇ ಸಚಿವ ಸಂಪುಟದ ಮಟ್ಟದಲ್ಲಿ ನಿರ್ಧಾರ ಕೈಗೊಂಡಿದೆ ಎಂದು ಮುಖ್ಯಮಂತ್ರಿ ತಿಳಿಸಿದರು.
ಬಸವಣ್ಣನವರ ತತ್ವಗಳು ಸಮಾಜದಲ್ಲಿ ಸಮಾನತೆ, ಸಹಬಾಳ್ವೆ ಮತ್ತು ಮಾನವೀಯ ಮೌಲ್ಯಗಳನ್ನು ಬಿತ್ತುವ ಶಕ್ತಿಯನ್ನು ಹೊಂದಿವೆ. ಅಂತಹ ಮಹಾನ್ ವ್ಯಕ್ತಿತ್ವದ ಕುರಿತು ವಿವಾದಗಳು ಸೃಷ್ಟಿಯಾಗಿ ಸಮಾಜದಲ್ಲಿ ಅಶಾಂತಿ ಉಂಟಾಗಬಾರದು. ಕಾನೂನಿನ ಚೌಕಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಂಡು ಸಾಮಾಜಿಕ ಸಾಮರಸ್ಯ ಕಾಪಾಡಲು ಸರ್ಕಾರ ಬದ್ಧವಾಗಿದೆ ಎಂದು ಹೇಳಿದರು.






