ತಾಜಾ ಸುದ್ದಿ ರಾಜಕೀಯ ಕ್ರೈಂ ನ್ಯೂಸ್ ರಾಜ್ಯ-ಜಿಲ್ಲೆ ದೇಶ-ವಿದೇಶ ಸೋಷಿಯಲ್ ಮೀಡಿಯಾ ಮನರಂಜನೆ ಕಾನೂನು ಜೀವನಶೈಲಿ ಕ್ರೀಡೆ ಗುರುಪರಂಪರೆ ವಿಡೀಯೋ English News

ಆಶಾ ಕಾರ್ಯಕರ್ತೆಯರಿಗೆ ₹350 ಕೋಟಿ ನೀಡಲು ಹಿಂದೇಟು; ಕಾಂಗ್ರೆಸ್ ಕಾರ್ಯಕರ್ತರಿಗೆ ಕ್ಯಾಬಿನೆಟ್ ಭಾಗ್ಯ! ಸರ್ಕಾರದ ವಿರುದ್ಧ ಬಿ.ವೈ. ವಿಜಯೇಂದ್ರ ವಾಗ್ದಾಳಿ

On: November 22, 2026 2:14 PM
Follow Us:

ಶಿವಮೊಗ್ಗ: ಒಂದೆಡೆ ಜನರ ಆರೋಗ್ಯ ಕಾಪಾಡಲು ಹಗಲಿರುಳು ಶ್ರಮಿಸುವ ಆಶಾ ಕಾರ್ಯಕರ್ತೆಯರು ತಮ್ಮ ನ್ಯಾಯಯುತ ಬೇಡಿಕೆಗಳಿಗಾಗಿ ಬೀದಿಗಿಳಿದು ಹೋರಾಡುತ್ತಿದ್ದಾರೆ. ಮತ್ತೊಂದೆಡೆ ರಾಜ್ಯದ ಬೊಕ್ಕಸದಲ್ಲಿ ಹಣವಿಲ್ಲ ಎಂಬ ನೆಪವೊಡ್ಡಿ ಅವರ ಗೌರವಧನ ಹೆಚ್ಚಿಸಲು ಹಿಂದೇಟು ಹಾಕುತ್ತಿರುವ ಕಾಂಗ್ರೆಸ್ ಸರ್ಕಾರ, ತನ್ನ ಪಕ್ಷದ ಕಾರ್ಯಕರ್ತರಿಗೆ ಅಧಿಕಾರದ ಸ್ಥಾನಮಾನ ಕಲ್ಪಿಸಲು ಮಾತ್ರ ಕೋಟಿ ಕೋಟಿ ರೂಪಾಯಿ ಖರ್ಚು ಮಾಡುತ್ತಿದೆ. ಜನಸೇವೆಗೆ ಹಣಕಾಸಿನ ಸಂಕಷ್ಟ, ರಾಜಕೀಯ ನೇಮಕಾತಿಗಳಿಗೆ ಮಾತ್ರ ಹಣದ ಹೊಳೆ. ಇದು ಯಾವ ರೀತಿಯ ಆಡಳಿತ? ಜನರ ತೆರಿಗೆ ಹಣವನ್ನು ಜನರ ಕಲ್ಯಾಣಕ್ಕೆ ಬಳಸಬೇಕೇ ಹೊರತು ಪಕ್ಷದ ಕಾರ್ಯಕರ್ತರ ರಾಜಕೀಯ ಪುನರ್ವಸತಿಗೆ ಬಳಸುವುದಕ್ಕಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ವೈ. ವಿಜಯೇಂದ್ರ ಅವರು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಕಳೆದ ಮೂರೂವರೆ ವರ್ಷಗಳಿಂದ ರಾಜ್ಯದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಸರ್ಕಾರಕ್ಕೆ ರಸ್ತೆ ಗುಂಡಿಗಳನ್ನು ಮುಚ್ಚಲು ಸಾಧ್ಯವಾಗಿಲ್ಲ. ಅಭಿವೃದ್ಧಿ ಕಾರ್ಯಗಳಿಗೆ ಸಮರ್ಪಕ ಅನುದಾನ ನೀಡುತ್ತಿಲ್ಲ. ಶಾಸಕರ ಕ್ಷೇತ್ರಗಳ ಅಭಿವೃದ್ಧಿಗೂ ಹಣ ಬಿಡುಗಡೆ ಮಾಡದೆ ಸತಾಯಿಸುತ್ತಿದೆ. ಆದರೆ ಜಾಹೀರಾತುಗಳ ಮೂಲಕ ಸರ್ಕಾರದ ಸಾಧನೆಗಳನ್ನು ಬಿಂಬಿಸಿಕೊಳ್ಳುವ ಪ್ರಯತ್ನ ಮಾತ್ರ ಜೋರಾಗಿದೆ. ಪ್ರಚಾರದ ಪರದೆಯ ಹಿಂದೆ ಆಡಳಿತ ವೈಫಲ್ಯವನ್ನು ಮುಚ್ಚಿಹಾಕುವ ಕೆಲಸ ನಡೆಯುತ್ತಿದೆ ಎಂದು ಅವರು ಆರೋಪಿಸಿದರು.

ರಾಜ್ಯದ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಗಳ ಅಧ್ಯಕ್ಷರನ್ನು ನೇಮಿಸಿ, ಅವರಿಗೆ ಕ್ಯಾಬಿನೆಟ್ ದರ್ಜೆಯ ಸ್ಥಾನಮಾನ ನೀಡುವ ಮೂಲಕ ಸರ್ಕಾರ ಸಾರ್ವಜನಿಕ ಹಣವನ್ನು ರಾಜಕೀಯ ಉದ್ದೇಶಗಳಿಗೆ ಬಳಸುತ್ತಿದೆ. ಇದರ ಜೊತೆಗೆ ಭಾರತ್ ಜೋಡೋ ಅನುಷ್ಠಾನ ಸಮಿತಿ ರಚಿಸಿ, ಅದಕ್ಕಾಗಿ ₹35 ಕೋಟಿ ಮೀಸಲಿಡುವ ನಿರ್ಧಾರ ಕೈಗೊಂಡಿರುವುದು ಸರ್ಕಾರದ ಆದ್ಯತೆಗಳನ್ನು ಎತ್ತಿತೋರಿಸುತ್ತದೆ.

ರಾಜ್ಯದಲ್ಲಿ ಬರಗಾಲ ಮತ್ತು ಆರ್ಥಿಕ ಸಂಕಷ್ಟವಿದೆ ಎಂದು ಹೇಳುತ್ತಿರುವ ಸರ್ಕಾರಕ್ಕೆ ಇಂತಹ ಸಮಿತಿಗಳ ರಚನೆಯ ಅಗತ್ಯವಾದರೂ ಏನಿದೆ? ಕಾಂಗ್ರೆಸ್ ಕಾರ್ಯಕರ್ತರಿಗೆ ಗಂಜಿ ಕೇಂದ್ರ ತೆರೆಯುವ ಕೆಲಸವಲ್ಲದೆ ಮತ್ತೇನು? ಮುಖ್ಯಮಂತ್ರಿಗಳ ಕುರ್ಚಿ ಉಳಿಸಿಕೊಳ್ಳಲು ಶಾಸಕರಿಗೆ ಬೋರ್ಡ್ ಮತ್ತು ಕಾರ್ಪೊರೇಷನ್‌ಗಳಲ್ಲಿ ಸ್ಥಾನಮಾನ ನೀಡಿ, ಕ್ಯಾಬಿನೆಟ್ ದರ್ಜೆ ಒದಗಿಸುವ ಮೂಲಕ ಜನರ ತೆರಿಗೆ ಹಣವನ್ನು ಪೋಲು ಮಾಡಲಾಗುತ್ತಿದೆ ಎಂದು ವಿಜಯೇಂದ್ರ ಕಿಡಿಕಾರಿದರು.

ರಾಜ್ಯದ ಆಶಾ ಕಾರ್ಯಕರ್ತೆಯರು ತಮ್ಮ ಕುಟುಂಬದ ಜವಾಬ್ದಾರಿಗಳ ನಡುವೆಯೂ ಜನರ ಆರೋಗ್ಯ ಸೇವೆಗಾಗಿ ನಿರಂತರವಾಗಿ ಶ್ರಮಿಸುತ್ತಿದ್ದಾರೆ. ಆದರೆ ತಮ್ಮ ನ್ಯಾಯಯುತ ಬೇಡಿಕೆಗಳ ಈಡೇರಿಕೆಗಾಗಿ ಬೆಂಗಳೂರಿನಲ್ಲಿ ಸಾವಿರಾರು ಕಾರ್ಯಕರ್ತೆಯರು ನಡೆಸುತ್ತಿರುವ ಪ್ರತಿಭಟನೆ ಏಳನೇ ದಿನಕ್ಕೆ ಕಾಲಿಟ್ಟಿದ್ದರೂ ಸರ್ಕಾರ ಸೂಕ್ತವಾಗಿ ಸ್ಪಂದಿಸಿಲ್ಲ.

ಪ್ರತಿಭಟನಾ ನಿರತ ಆಶಾ ಕಾರ್ಯಕರ್ತೆಯರನ್ನು ಭೇಟಿ ಮಾಡಿದ ಮುಖ್ಯಮಂತ್ರಿ, ರಾಜ್ಯದ ಆರ್ಥಿಕ ಪರಿಸ್ಥಿತಿ ಸರಿಯಿಲ್ಲ ಎಂದು ಹೇಳಿ ತಮ್ಮ ಅಸಹಾಯಕತೆ ವ್ಯಕ್ತಪಡಿಸಿದ್ದಾರೆ. ಆದರೆ ಹಿರಿಯೂರಿನಲ್ಲಿ ಆಶಾ ಕಾರ್ಯಕರ್ತೆಯರನ್ನು ಉದ್ದೇಶಿಸಿ ‘ನಾನು ನಿಮ್ಮ ಸಹೋದರ’ ಎಂದು ಹೇಳುವ ಮುಖ್ಯಮಂತ್ರಿಗಳು, ನಿಜವಾಗಿಯೂ ಸಹೋದರನ ಭಾವನೆ ಹೊಂದಿದ್ದರೆ ಅವರ ಸಂಕಷ್ಟಕ್ಕೆ ಸ್ಪಂದಿಸಬೇಕಿತ್ತು.

ಆಶಾ ಕಾರ್ಯಕರ್ತೆಯರ ಗೌರವಧನ ಹೆಚ್ಚಿಸಲು ವರ್ಷಕ್ಕೆ ₹350 ಕೋಟಿ ವೆಚ್ಚವಾಗುತ್ತದೆ ಎಂಬ ಕಾರಣಕ್ಕೆ ಸರ್ಕಾರ ಹಿಂದೆ ಸರಿಯುತ್ತಿರುವುದು ಸರಿಯೇ? ಜನರ ಆರೋಗ್ಯ ರಕ್ಷಣೆಗಾಗಿ ದುಡಿಯುವ ಕಾರ್ಯಕರ್ತೆಯರಿಗೆ ಗೌರವಧನ ನೀಡುವುದು ಸರ್ಕಾರಕ್ಕೆ ಹೊರೆಯೇ? ಕಾಂಗ್ರೆಸ್ ಕಾರ್ಯಕರ್ತರಿಗೆ ಅಧಿಕಾರದ ಸ್ಥಾನಮಾನ ನೀಡಲು, ಸಮಿತಿಗಳ ನಿರ್ವಹಣೆಗೆ ಹಣ ವ್ಯಯಿಸಲು ಸಂಪನ್ಮೂಲವಿದೆ. ಆದರೆ ದುಡಿಯುವ ಮಹಿಳೆಯರ ನ್ಯಾಯಯುತ ಬೇಡಿಕೆ ಬಂದಾಗ ಮಾತ್ರ ಆರ್ಥಿಕ ಸಂಕಷ್ಟ ನೆನಪಾಗುತ್ತದೆಯೇ ಎಂದು ವಿಜಯೇಂದ್ರ ಪ್ರಶ್ನಿಸಿದರು.

ದಕ್ಷಿಣ ಕನ್ನಡಕ್ಕೆ ತೆರಳಿ ₹32 ಸಾವಿರ ಕೋಟಿ ಪ್ಯಾಕೇಜ್ ಘೋಷಿಸುವುದು, ಬೆಂಗಳೂರು ಜಿಬಿಎ ಚುನಾವಣೆ ಹಿನ್ನೆಲೆಯಲ್ಲಿ ಸಾವಿರಾರು ಕೋಟಿ ರೂಪಾಯಿ ವೆಚ್ಚದ ಫ್ಲೈಓವರ್ ಮತ್ತು ಅಭಿವೃದ್ಧಿ ಯೋಜನೆಗಳನ್ನು ಪ್ರಕಟಿಸುವುದು, ರಾಜ್ಯದ ರಸ್ತೆ ಅಭಿವೃದ್ಧಿಗೆ ₹16 ಸಾವಿರ ಕೋಟಿ ನೀಡುವುದಾಗಿ ಹೇಳುವುದು ಇವೆಲ್ಲವೂ ಜನರನ್ನು ಆಕರ್ಷಿಸುವ ರಾಜಕೀಯ ಘೋಷಣೆಗಳಾಗಿವೆ.

ಆಶಾ ಕಾರ್ಯಕರ್ತೆಯರ ಗೌರವಧನ ಹೆಚ್ಚಿಸಲು ₹350 ಕೋಟಿ ನೀಡಲು ಸಾಧ್ಯವಿಲ್ಲ ಎನ್ನುವ ಸರ್ಕಾರ ರಸ್ತೆ ಅಭಿವೃದ್ಧಿಗೆ ₹16 ಸಾವಿರ ಕೋಟಿ ಎಲ್ಲಿಂದ ತರುತ್ತದೆ? ಕೇವಲ ಘೋಷಣೆಗಳಿಂದ ಅಭಿವೃದ್ಧಿ ಸಾಧ್ಯವಿಲ್ಲ. ಜನರ ಬದುಕಿನ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವ ಬದಲು ಗ್ಯಾರಂಟಿಗಳ ಹೆಸರಿನಲ್ಲಿ ಜನರನ್ನು ವಂಚಿಸುವ ಕೆಲಸವನ್ನು ಕಾಂಗ್ರೆಸ್ ಸರ್ಕಾರ ಮಾಡುತ್ತಿದೆ ಎಂದು ಟೀಕಿಸಿದರು.

ರಾಜ್ಯದಲ್ಲಿ ಬರಗಾಲ ಮತ್ತು ಆರ್ಥಿಕ ಸಂಕಷ್ಟದ ಪರಿಸ್ಥಿತಿ ಇದೆ ಎಂದು ಹೇಳುತ್ತಿರುವ ಸರ್ಕಾರ, ಮುಖ್ಯಮಂತ್ರಿಗಳ ನಿವಾಸದ ಶೃಂಗಾರ ಮತ್ತು ಅಲಂಕಾರಕ್ಕೆ ₹100 ಕೋಟಿ ವೆಚ್ಚ ಮಾಡಿದೆ ಎಂಬ ಆರೋಪ ಗಂಭೀರವಾದುದು. ಇದು ಸರ್ಕಾರದ ಆದ್ಯತೆಗಳು ಮತ್ತು ಮುಖ್ಯಮಂತ್ರಿಗಳ ಜನಸೇವೆಯ ಬದ್ಧತೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕುತ್ತದೆ.

ನಿಜವಾಗಿಯೂ ಪ್ರಜಾಸೇವೆಯ ಮನೋಭಾವ ಇದ್ದಿದ್ದರೆ ಮುಖ್ಯಮಂತ್ರಿಗಳು ತಮ್ಮ ನಿವಾಸದ ಅಲಂಕಾರಕ್ಕೆ ಇಷ್ಟು ದೊಡ್ಡ ಮೊತ್ತವನ್ನು ವ್ಯಯಿಸುತ್ತಿರಲಿಲ್ಲ. ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರ ಬೇಡಿಕೆಗಳಿಗೆ ಸ್ಪಂದಿಸದೆ, ರಾಜಕೀಯ ನೇಮಕಾತಿಗಳಿಗೆ ಹಣ ಖರ್ಚು ಮಾಡುತ್ತಿರುವುದು ಸರ್ಕಾರದ ಆದ್ಯತೆಗಳು ಜನವಿರೋಧಿ ದಿಕ್ಕಿನಲ್ಲಿ ಸಾಗುತ್ತಿರುವುದಕ್ಕೆ ಸಾಕ್ಷಿಯಾಗಿದೆ ಎಂದು ವಿಜಯೇಂದ್ರ ಹೇಳಿದರು.

ಹಿರಿಯೂರಿನಲ್ಲಿ ಬಿಜೆಪಿ ಕಾರ್ಯಕರ್ತರು ಮನೆ ಬಾಗಿಲಿಗೆ ಬಂದರೆ ಬಹಿಷ್ಕರಿಸಿ ಎಂದು ಮುಖ್ಯಮಂತ್ರಿ ನೀಡಿರುವ ಹೇಳಿಕೆ ಅವರ ಉದ್ಧಟತನದ ಮನೋಭಾವವನ್ನು ತೋರಿಸುತ್ತದೆ. ಇತ್ತೀಚೆಗೆ ನಡೆದ ನಾಲ್ಕು ವಿಧಾನ ಪರಿಷತ್ ಕ್ಷೇತ್ರಗಳ ಚುನಾವಣೆಯಲ್ಲಿ ಮತದಾರರು ಕಾಂಗ್ರೆಸ್‌ಗೆ ನೀಡಿರುವ ತೀರ್ಪು ಸರ್ಕಾರದ ವಿರುದ್ಧದ ಜನಾಭಿಪ್ರಾಯಕ್ಕೆ ಸಾಕ್ಷಿಯಾಗಿದೆ.

135 ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡ ನಾಲ್ಕು ವಿಧಾನ ಪರಿಷತ್ ಕ್ಷೇತ್ರಗಳ ಚುನಾವಣೆಯಲ್ಲಿ ಮತದಾರರು ಕಾಂಗ್ರೆಸ್‌ಗೆ ತಕ್ಕ ಪಾಠ ಕಲಿಸಿದ್ದಾರೆ. ಹಿರಿಯೂರಿನ ಉಪಚುನಾವಣೆಯಲ್ಲಿಯೂ ಎನ್‌ಡಿಎ ಅಭ್ಯರ್ಥಿಯನ್ನು ಗೆಲ್ಲಿಸುವ ಮೂಲಕ ಜನರು ಕಾಂಗ್ರೆಸ್ ಸರ್ಕಾರಕ್ಕೆ ತಕ್ಕ ಉತ್ತರ ನೀಡಲಿದ್ದಾರೆ ಎಂಬ ವಿಶ್ವಾಸವಿದೆ ಎಂದು ತಿಳಿಸಿದರು.

ಹಿರಿಯೂರಿನ ಉಪಚುನಾವಣೆ ಎದುರಾಗಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಕಾಡುಗೊಲ್ಲ ಸಮುದಾಯದ ಬಗ್ಗೆ ಮೊಸಳೆ ಕಣ್ಣೀರು ಸುರಿಸುತ್ತಿದ್ದಾರೆ. ಕಳೆದ ಮೂರೂವರೆ ವರ್ಷಗಳಲ್ಲಿ ಈ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ಸರ್ಕಾರ ಕೈಗೊಂಡಿರುವ ಪ್ರಯತ್ನಗಳೇನು? ಚುನಾವಣೆ ಎದುರಾದಾಗ ಮಾತ್ರ ಸಮುದಾಯ ನೆನಪಾಗುವುದು ರಾಜಕೀಯ ಲಾಭದ ಉದ್ದೇಶವಲ್ಲದೆ ಮತ್ತೇನು ಎಂದು ಪ್ರಶ್ನಿಸಿದರು.

ಹಿರಿಯೂರಿಗೆ ನೀರು ಹರಿಸುವ ಯೋಜನೆಗಳ ವಿಚಾರದಲ್ಲಿ ಬಿಜೆಪಿ ಸರ್ಕಾರ, ವಿಶೇಷವಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಅವಧಿಯಲ್ಲಿ ಕೈಗೊಂಡ ಕ್ರಮಗಳು ಹಾಗೂ ನೀಡಿದ ಅನುದಾನದಿಂದ ಅಭಿವೃದ್ಧಿ ಕಾರ್ಯಗಳು ನಡೆದಿವೆ. ಆದರೆ ಕಳೆದ ಮೂರೂವರೆ ವರ್ಷಗಳಲ್ಲಿ ಕಾಂಗ್ರೆಸ್ ಸರ್ಕಾರ ನೀರಾವರಿ ಯೋಜನೆಗಳಿಗೆ ಎಷ್ಟು ಅನುದಾನ ನೀಡಿದೆ ಎಂಬುದನ್ನು ಚಳಿಗಾಲದ ಅಧಿವೇಶನದಲ್ಲಿ ಚರ್ಚಿಸಲು ಬಿಜೆಪಿ ಸಿದ್ಧವಿದೆ.

ಕಾಡುಗೊಲ್ಲರು ಸೇರಿದಂತೆ ಹಿಂದುಳಿದ ಮತ್ತು ಶೋಷಿತ ಸಮುದಾಯಗಳ ಹಿತಾಸಕ್ತಿಗೆ ಬಿಜೆಪಿಯ ಬದ್ಧತೆ ಇದೆ. ಜನರು ಪದೇಪದೇ ಮೋಸ ಹೋಗುವುದಿಲ್ಲ. ಹಿರಿಯೂರಿನ ಪ್ರಜ್ಞಾವಂತ ಮತದಾರರು ಕಾಂಗ್ರೆಸ್‌ಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಅಮೆರಿಕದಿಂದ ಬಂದಿರುವ ರವಿ ಹಂಚ್ ಅವರು ಅಣ್ಣ ಬಸವಣ್ಣನವರ ಕುರಿತು ಪುಸ್ತಕದಲ್ಲಿ ಆಕ್ಷೇಪಾರ್ಹವಾಗಿ ಬರೆದಿರುವ ವಿಚಾರ ನಾಡಿನ ಜನರಲ್ಲಿ ತೀವ್ರ ಆಕ್ರೋಶ ಮೂಡಿಸಿದೆ. ಇದು ಕೇವಲ ವೀರಶೈವ-ಲಿಂಗಾಯತ ಸಮುದಾಯದ ಭಾವನೆಗಳಿಗೆ ಮಾತ್ರವಲ್ಲ, ಇಡೀ ನಾಡಿನ ಸಾಂಸ್ಕೃತಿಕ ಮತ್ತು ಸಾಮಾಜಿಕ ಗೌರವಕ್ಕೆ ಧಕ್ಕೆ ಉಂಟುಮಾಡುವ ವಿಚಾರವಾಗಿದೆ.

ಗೃಹ ಸಚಿವರು ಕೇವಲ ಬಂಧಿಸಿ ಬಿಡುಗಡೆ ಮಾಡುವ ಕ್ರಮಕ್ಕೆ ಸೀಮಿತವಾಗದೆ, ಕಾನೂನಿನ ಪ್ರಕಾರ ಸೂಕ್ತ ಕ್ರಮ ಕೈಗೊಳ್ಳಬೇಕು. ಬಸವಣ್ಣನವರು ಸೇರಿದಂತೆ ನಾಡಿನ ಮಹಾನ್ ದಾರ್ಶನಿಕರ ಕುರಿತು ಜನರ ಭಾವನೆಗಳಿಗೆ ನೋವುಂಟು ಮಾಡುವ ರೀತಿಯಲ್ಲಿ ಬರೆಯುವವರಿಗೆ ಕಾನೂನುಬದ್ಧವಾಗಿ ತಕ್ಕ ಶಿಕ್ಷೆಯಾಗಬೇಕು. ಇಂತಹ ಕೃತ್ಯಗಳನ್ನು ಯಾವುದೇ ಕಾರಣಕ್ಕೂ ಸಹಿಸಲು ಸಾಧ್ಯವಿಲ್ಲ ಎಂದು ವಿಜಯೇಂದ್ರ ಆಗ್ರಹಿಸಿದರು.

ರಾಜ್ಯದಲ್ಲಿ ದಿನೇದಿನೆ ಹೆಚ್ಚುತ್ತಿರುವ ಬೆಲೆ ಏರಿಕೆಯಿಂದ ಬಡವರು, ಮಧ್ಯಮ ವರ್ಗದವರು ಹಾಗೂ ಸಾಮಾನ್ಯ ಜನರು ತತ್ತರಿಸಿದ್ದಾರೆ. ಗ್ಯಾರಂಟಿ ಯೋಜನೆಗಳ ಹೆಸರಿನಲ್ಲಿ ಜನರ ಮೇಲೆ ಬೆಲೆ ಏರಿಕೆಯ ಹೊರೆ ಹಾಕುತ್ತಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ವಿಧಾನಸಭೆ ಮತ್ತು ಚಳಿಗಾಲದ ಅಧಿವೇಶನದಲ್ಲಿ ಬಿಜೆಪಿ ತೀವ್ರ ಹೋರಾಟ ನಡೆಸಲಿದೆ.

ಜನಸಾಮಾನ್ಯರ ಬದುಕಿಗೆ ಸಂಬಂಧಿಸಿದ ಬೆಲೆ ಏರಿಕೆ, ಅಭಿವೃದ್ಧಿ ಕಾರ್ಯಗಳ ನಿರ್ಲಕ್ಷ್ಯ ಹಾಗೂ ಸರ್ಕಾರದ ಆಡಳಿತ ವೈಫಲ್ಯಗಳನ್ನು ಸದನದಲ್ಲಿ ಪ್ರಸ್ತಾಪಿಸಿ ಸರ್ಕಾರಕ್ಕೆ ಉತ್ತರ ನೀಡುವಂತೆ ಒತ್ತಾಯಿಸಲಾಗುವುದು. ವಿಧಾನಸಭಾ ಚುನಾವಣೆಯವರೆಗೂ ಜನಪರ ಹೋರಾಟಗಳು ನಿರಂತರವಾಗಿ ಮುಂದುವರಿಯಲಿವೆ ಎಂದು ಹೇಳಿದರು.

ಹಿರಿಯೂರಿನ ಉಪಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಒಟ್ಟಾಗಿ ಒಮ್ಮತದ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಕುರಿತು ಜೆಡಿಎಸ್ ನಾಯಕರು ಹಾಗೂ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಸೇರಿದಂತೆ ಎರಡೂ ಪಕ್ಷಗಳ ವರಿಷ್ಠರೊಂದಿಗೆ ಚರ್ಚೆ ನಡೆಸಲಾಗಿದೆ.

ಎನ್‌ಡಿಎ ಅಭ್ಯರ್ಥಿಯನ್ನು ಗೆಲ್ಲಿಸುವ ಉದ್ದೇಶದಿಂದ ಎರಡೂ ಪಕ್ಷಗಳು ಒಗ್ಗಟ್ಟಿನಿಂದ ಕಾರ್ಯತಂತ್ರ ರೂಪಿಸಲಿವೆ. ಅಭ್ಯರ್ಥಿ ಆಯ್ಕೆ ಮತ್ತು ಚುನಾವಣಾ ಕಾರ್ಯತಂತ್ರದ ಕುರಿತು ರಾಷ್ಟ್ರಮಟ್ಟದಲ್ಲಿ ಚರ್ಚೆ ನಡೆಸಿದ ನಂತರ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ವಿಜಯೇಂದ್ರ ತಿಳಿಸಿದರು.

ಶಿಕ್ಷಣ ಸಚಿವರು ನೀಡಿರುವ ಉದ್ಧಟತನದ ಹೇಳಿಕೆ ರಾಜ್ಯದಾದ್ಯಂತ ಖಂಡನೆಗೆ ಒಳಗಾಗಿದೆ. ಶಿಕ್ಷಣದಂತಹ ಮಹತ್ವದ ಜವಾಬ್ದಾರಿಯುತ ಖಾತೆಯನ್ನು ನಿರ್ವಹಿಸುವ ಸಚಿವರು ಸಾರ್ವಜನಿಕವಾಗಿ ಮಾತನಾಡುವಾಗ ತಮ್ಮ ಸ್ಥಾನಮಾನದ ಗೌರವ ಮತ್ತು ಜವಾಬ್ದಾರಿಯನ್ನು ಅರಿತುಕೊಳ್ಳಬೇಕು.

ಶಿಕ್ಷಣ ಸಚಿವರಿಗೆ ತಮ್ಮ ಹುದ್ದೆಯ ಘನತೆ ಮತ್ತು ಜವಾಬ್ದಾರಿಯ ಅರಿವಿದ್ದರೆ ಕೂಡಲೇ ತಮ್ಮ ಹೇಳಿಕೆಗೆ ಕ್ಷಮೆಯಾಚಿಸಬೇಕು ಎಂದು ವಿಜಯೇಂದ್ರ ಆಗ್ರಹಿಸಿದರು.

ರಾಜ್ಯದ ಜನರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವ ಬದಲು ರಾಜಕೀಯ ನೇಮಕಾತಿ, ಪ್ರಚಾರ ಮತ್ತು ಸುಳ್ಳು ಭರವಸೆಗಳಲ್ಲಿ ತೊಡಗಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಜನರ ಪರವಾಗಿ ನಿರಂತರ ಹೋರಾಟ ನಡೆಸಲಿದೆ ಎಂದು ಅವರು ಎಚ್ಚರಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷರಾದ ಜಗದೀಶ್ ಎನ್.ಕೆ., ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಮಾಜಿ ಶಾಸಕರಾದ ಅಶೋಕ್ ನಾಯ್ಕ್, ಮಾಧ್ಯಮ ಪ್ರಮುಖರಾದ ಚಂದ್ರಶೇಖರ ಎಸ್. ಮತ್ತು ಮಂಜುನಾಥ್ ಎನ್., ಪಕ್ಷದ ಪ್ರಮುಖರಾದ ಬಳ್ಳೆಕೆರೆ ಸಂತೋಷ್, ರಾಜೇಶ್ ಕಾಮತ್, ದಿವಾಕರ್ ಶೆಟ್ಟಿ, ಅರುಣ್ ಬಾಬು ಹಾಗೂ ಕುಮಾರ್ ನಾಯ್ಡು ಉಪಸ್ಥಿತರಿದ್ದರು.

K.M.Sathish Gowda

Join WhatsApp

Join Now

Facebook

Join Now

Read more

ಜಾತಿ, ಧರ್ಮದ ಗೋಡೆಗಳನ್ನು ಮೀರಿ ಮನುಷ್ಯತ್ವದ ಸಮಾಜ ನಿರ್ಮಾಣವೇ ಬಸವಣ್ಣನವರ ಆಶಯ; ಮಾತಿನಲ್ಲಿ ಬಸವತತ್ವವಲ್ಲ, ಬದುಕಿನಲ್ಲಿ ಬಸವತತ್ವ ಅಳವಡಿಸಿಕೊಳ್ಳಬೇಕು: ಕೆ.ಪಿ. ಶ್ರೀಪಾಲ್

ನೌಕರರ ಬೇಡಿಕೆಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಅಸ್ತು; ₹50 ಸಾವಿರ ಹಬ್ಬದ ಮುಂಗಡ ಘೋಷಣೆ, ಒಪಿಎಸ್-ಎನ್‌ಪಿಎಸ್ ಕುರಿತು ಮಹತ್ವದ ಭರವಸೆ

2.5 ಲಕ್ಷ ನೌಕರರ ಭವಿಷ್ಯಕ್ಕೆ ಡಿ.ಕೆ. ಶಿವಕುಮಾರ್ ಅವರೇ ಆಶಾಕಿರಣ; ಎನ್‌ಪಿಎಸ್ ರದ್ದುಗೊಳಿಸಿ ಒಪಿಎಸ್ ಜಾರಿಗೆ ತರಲು ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ ಒತ್ತಾಯ

ಬಸವಣ್ಣನವರ ಚಾರಿತ್ರ್ಯಕ್ಕೆ ಮಸಿ ಬಳಿಯುವ ಪ್ರಯತ್ನ ಸಹಿಸಲಾಗದು; ರವಿ ಹಂಜ್ ಮತ್ತು ವಿಶ್ವೇಶ್ವರ ಭಟ್ ವಿರುದ್ಧ ಕಠಿಣ ಕ್ರಮಕ್ಕೆ ಸಾಣೇಹಳ್ಳಿ ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಆಗ್ರಹ

15 ಲಕ್ಷ ಕುಟುಂಬಗಳಿಗೆ ಉಚಿತ ನಿವೇಶನ, ಒಂದು ಲಕ್ಷ ಹೊಸ ಮನೆ ನಿರ್ಮಾಣಕ್ಕೆ ಸಂಪುಟ ಅಸ್ತು!

ಅಧಿಕಾರದ ವೈಭವಕ್ಕಿಂತ ಸರಳ ಬದುಕಿನ ಘನತೆ ದೊಡ್ಡದು; ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಕುಟುಂಬದ ಜೀವನಶೈಲಿ ರಾಜಕಾರಣಿಗಳಿಗೆ ಮಾದರಿಯಾಗಲಿ

Leave a Comment