ಬೆಂಗಳೂರು: ರಾಜ್ಯದಲ್ಲಿ ಗೋರಕ್ಷಣೆ, ಹಿಂದೂ ಸಂಸ್ಕೃತಿ ಹಾಗೂ ಸಂಪ್ರದಾಯಗಳ ರಕ್ಷಣೆಗೆ ಮುಂದಾಗುವವರ ವಿರುದ್ಧವೇ ಪೊಲೀಸರು ಪ್ರಕರಣ ದಾಖಲಿಸುತ್ತಿದ್ದಾರೆ. ಮತ್ತೊಂದೆಡೆ ಅಕ್ರಮ ಗೋಹತ್ಯೆ ನಡೆಸುವವರಿಗೆ ಸರ್ಕಾರ ರಕ್ಷಣೆ ನೀಡುತ್ತಿದೆ ಎಂದು ಬಿಜೆಪಿ ನಾಯಕರು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪುನೀತ್ ಕೆರೆಹಳ್ಳಿ ಅವರ ವಿರುದ್ಧ ಪ್ರಕರಣ ದಾಖಲಿಸಿರುವುದನ್ನು ಖಂಡಿಸಿ ಬಿಜೆಪಿ ವತಿಯಿಂದ ಪೊಲೀಸ್ ಮಹಾನಿರ್ದೇಶಕರಿಗೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ವಿಧಾನಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್. ರವಿಕುಮಾರ್, ವಿಧಾನಸಭೆ ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ ಹಾಗೂ ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಅವರು ಸರ್ಕಾರದ ಕ್ರಮವನ್ನು ಖಂಡಿಸಿದರು.

ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ದಮನಿಸುವ ಪ್ರಯತ್ನ: ಎನ್. ರವಿಕುಮಾರ್
ಗೋರಕ್ಷಣೆ ಹಾಗೂ ಸಂಸ್ಕೃತಿಯ ರಕ್ಷಣೆಗೆ ಮುಂದಾಗುವವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸುತ್ತಿರುವುದು ಸರಿಯಾದ ಕ್ರಮವಲ್ಲ ಎಂದು ವಿಧಾನಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್. ರವಿಕುಮಾರ್ ಆಕ್ಷೇಪಿಸಿದರು.
ಪುನೀತ್ ಕೆರೆಹಳ್ಳಿ ಅವರ ವಿರುದ್ಧ ಪ್ರಕರಣ ದಾಖಲಿಸಿರುವುದನ್ನು ಖಂಡಿಸಿ ಪೊಲೀಸ್ ಮಹಾನಿರ್ದೇಶಕರಿಗೆ ಮನವಿ ಸಲ್ಲಿಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಾಮಾಜಿಕ ಜಾಲತಾಣಗಳಲ್ಲಿ ಸರ್ಕಾರದ ವಿರುದ್ಧ ಅಭಿಪ್ರಾಯ ವ್ಯಕ್ತಪಡಿಸುವವರ ಮೇಲೂ ಪ್ರಕರಣ ದಾಖಲಿಸಲಾಗುತ್ತಿದೆ ಎಂದು ಆರೋಪಿಸಿದರು.
ಸರ್ಕಾರದ ನೀತಿ, ನಿರ್ಧಾರಗಳನ್ನು ಪ್ರಶ್ನಿಸುವುದು ಮತ್ತು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸುವುದು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಯೊಬ್ಬರ ಹಕ್ಕಾಗಿದೆ. ಆದರೆ, ಸರ್ಕಾರದ ವಿರುದ್ಧ ಮಾತನಾಡುವವರನ್ನು ಹಾಗೂ ಗೋರಕ್ಷಣೆ, ಸಂಸ್ಕೃತಿ ರಕ್ಷಣೆಯ ಕಾರ್ಯದಲ್ಲಿ ತೊಡಗಿರುವವರನ್ನು ಪ್ರಕರಣಗಳ ಮೂಲಕ ಹತ್ತಿಕ್ಕುವ ಪ್ರಯತ್ನ ನಡೆಯುತ್ತಿದೆ. ಇದು ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ದಮನಿಸುವ ಕ್ರಮವಾಗಿದೆ ಎಂದು ಟೀಕಿಸಿದರು.
ಇಂತಹ ದಮನಕಾರಿ ಕ್ರಮಗಳನ್ನು ಸರ್ಕಾರ ಮುಂದುವರಿಸಿದರೆ ಬಿಜೆಪಿ ಸುಮ್ಮನಿರುವುದಿಲ್ಲ. ಇದೇ ರೀತಿ ಪ್ರಕರಣಗಳನ್ನು ದಾಖಲಿಸುವುದನ್ನು ಮುಂದುವರಿಸಿದರೆ ರಾಜ್ಯಾದ್ಯಂತ ದೊಡ್ಡ ಮಟ್ಟದ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಗೋರಕ್ಷಕರಿಗೆ ಜೈಲು, ಗೋಹತ್ಯೆ ಮಾಡುವವರಿಗೆ ರಕ್ಷಣೆ: ಅರವಿಂದ ಬೆಲ್ಲದ
ರಾಜ್ಯದಲ್ಲಿ ಗೋರಕ್ಷಣೆ ಮಾಡುವವರಿಗೆ ಜೈಲು ಶಿಕ್ಷೆಯ ಭಾಗ್ಯ ಕಲ್ಪಿಸಲಾಗುತ್ತಿದೆ. ಆದರೆ, ಗೋಹತ್ಯೆ ಮಾಡುವವರಿಗೆ ಸರ್ಕಾರ ರಕ್ಷಣೆ ನೀಡುತ್ತಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ನಮ್ಮ ಸಂಸ್ಕಾರ, ಸಂಸ್ಕೃತಿ ಮತ್ತು ಪರಂಪರೆಯನ್ನು ಉಳಿಸಲು ಶ್ರಮಿಸುವವರನ್ನೇ ಗುರಿಯಾಗಿಸಲಾಗುತ್ತಿದೆ. ಗೋರಕ್ಷಕರಿಂದ 10 ಲಕ್ಷ ರೂ. ಬಾಂಡ್ ಪಡೆಯುವಂತಹ ಕ್ರಮಗಳನ್ನು ಕೈಗೊಳ್ಳುತ್ತಿರುವುದು ಖಂಡನೀಯ. ಸಮಾಜದ ಸಂಪ್ರದಾಯ ಮತ್ತು ಸಾಂಸ್ಕೃತಿಕ ಮೌಲ್ಯಗಳನ್ನು ಕಾಪಾಡಲು ಮುಂದಾಗುವವರನ್ನು ಅಪರಾಧಿಗಳಂತೆ ನಡೆಸಿಕೊಳ್ಳುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು.
ಗೋರಕ್ಷಣೆ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಸರ್ಕಾರ, ಅಕ್ರಮ ಗೋಹತ್ಯೆ ತಡೆಯುವ ವಿಚಾರದಲ್ಲಿ ಯಾವ ರೀತಿಯ ನಿಲುವು ಹೊಂದಿದೆ ಎಂಬುದನ್ನು ಸ್ಪಷ್ಟಪಡಿಸಬೇಕು ಎಂದು ಆಗ್ರಹಿಸಿದರು.
ಗೋಹತ್ಯೆ ತಡೆಯುವವರ ಮೇಲೆ ಸುಳ್ಳು ಮೊಕದ್ದಮೆ ಸರಿಯಲ್ಲ: ಸಿ.ಟಿ. ರವಿ
ಅಕ್ರಮ ಗೋಹತ್ಯೆ ಮಾಡುವವರನ್ನು ಬೆಂಬಲಿಸುವ ಪ್ರವೃತ್ತಿ ರಾಜ್ಯದಲ್ಲಿ ಕಂಡುಬರುತ್ತಿದೆ. ಆದರೆ, ಗೋಹತ್ಯೆ ತಡೆಯಲು ಮುಂದಾಗುವವರ ವಿರುದ್ಧ ಸುಳ್ಳು ಮೊಕದ್ದಮೆಗಳನ್ನು ದಾಖಲಿಸಲಾಗುತ್ತಿದೆ ಎಂದು ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಆಕ್ರೋಶ ವ್ಯಕ್ತಪಡಿಸಿದರು.
ಅಕ್ರಮ ಗೋಹತ್ಯೆ ತಡೆಯುವವರು ಹಾಗೂ ರಾಷ್ಟ್ರಹಿತದ ಪರವಾಗಿ ಕೆಲಸ ಮಾಡುವವರನ್ನು ಪ್ರಕರಣಗಳ ಮೂಲಕ ಹತ್ತಿಕ್ಕುವ ಪ್ರಯತ್ನ ನಡೆಯುತ್ತಿದೆ. ಬಾಂಗ್ಲಾದೇಶದಿಂದ ಅಕ್ರಮವಾಗಿ ವಲಸೆ ಬಂದವರಿಗೆ ರಾಜ್ಯದಲ್ಲಿ ನೆಲೆಸಲು ಬೆಂಬಲ ನೀಡುವ ವ್ಯವಸ್ಥೆಯಿದೆ ಎಂದು ಆರೋಪಿಸಿದ ಅವರು, ದೇಶದ ಹಿತಾಸಕ್ತಿಯ ಪರವಾಗಿ ಧ್ವನಿ ಎತ್ತುವವರ ವಿರುದ್ಧವೇ ಕಾನೂನು ಕ್ರಮ ಜರುಗಿಸಲಾಗುತ್ತಿದೆ ಎಂದು ದೂರಿದರು.
ಕಾನೂನು ಎಲ್ಲರಿಗೂ ಸಮಾನವಾಗಿ ಅನ್ವಯವಾಗಬೇಕು. ತಪ್ಪು ಮಾಡಿದವರ ವಿರುದ್ಧ ಕಾನೂನುಬದ್ಧ ಕ್ರಮ ಕೈಗೊಳ್ಳುವುದಕ್ಕೆ ಯಾರ ವಿರೋಧವೂ ಇಲ್ಲ. ಆದರೆ, ಆಯ್ದ ವ್ಯಕ್ತಿಗಳನ್ನು ಗುರಿಯಾಗಿಸಿಕೊಂಡು ಸುಳ್ಳು ಪ್ರಕರಣಗಳನ್ನು ದಾಖಲಿಸುವುದು ಪ್ರಜಾಪ್ರಭುತ್ವದ ಆಶಯಗಳಿಗೆ ವಿರುದ್ಧವಾಗಿದೆ ಎಂದು ಅಭಿಪ್ರಾಯಪಟ್ಟರು.






