ಬೆಂಗಳೂರು, ಡಿ.23: ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ದೆಹಲಿ ಪ್ರವಾಸ ರಾಜ್ಯ ರಾಜಕೀಯದಲ್ಲಿ ಭಾರೀ ಕುತೂಹಲ ಮೂಡಿಸಿದೆ. ಕಾಂಗ್ರೆಸ್ ಪಕ್ಷದೊಳಗಿನ ನಾಯಕತ್ವ ಬದಲಾವಣೆ ಚರ್ಚೆಗಳು ಬಿಸಿಯಾಗಿರುವ ನಡುವೆಯೇ ನಡೆದಿರುವ ಈ ದೆಹಲಿ ಯಾತ್ರೆ, ರಾಜಕೀಯ ವಲಯದಲ್ಲಿ ಹಲವು ಊಹಾಪೋಹಗಳಿಗೆ ಕಾರಣವಾಗಿದೆ.
ಮಂಗಳವಾರ ಬೆಳಗ್ಗೆ ಬೆಂಗಳೂರು ನಗರದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಡಿ.ಕೆ.ಶಿವಕುಮಾರ್ ದೆಹಲಿಗೆ ಪ್ರಯಾಣಿಸಿದ್ದು, ಈ ವೇಳೆ ಅವರು ಮಾಧ್ಯಮಗಳಿಗೆ ಯಾವುದೇ ಪ್ರತಿಕ್ರಿಯೆ ನೀಡದೆ ವಿಮಾನ ಏರಿದರು. ಕೇಂದ್ರ ಜಲಸಂಪನ್ಮೂಲ ಸಚಿವಾಲಯದ ಮಹತ್ವದ ಸಭೆಯಲ್ಲಿ ಪಾಲ್ಗೊಳ್ಳಲು ದೆಹಲಿಗೆ ತೆರಳಿರುವುದಾಗಿ ತಿಳಿದುಬಂದಿದ್ದು, ಕರ್ನಾಟಕದ ಜಲಸಂಪನ್ಮೂಲ ಸಚಿವರಾಗಿರುವ ಅವರು ರಾಜ್ಯದ ವಿವಿಧ ಯೋಜನೆಗಳ ಕುರಿತು ಕೇಂದ್ರದ ಗಮನ ಸೆಳೆಯಲಿದ್ದಾರೆ.

ದೆಹಲಿಯಲ್ಲೇ ವಾಸ್ತವ್ಯ, ಹೈಕಮಾಂಡ್ ಭೇಟಿ ನಿರೀಕ್ಷೆ
ಜಲಸಂಪನ್ಮೂಲ ಸಚಿವಾಲಯದ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಮಂಗಳವಾರ ದೆಹಲಿಯಲ್ಲೇ ವಾಸ್ತವ್ಯ ಹೂಡಲಿದ್ದಾರೆ. ಬುಧವಾರ ಕಾಂಗ್ರೆಸ್ ಹೈಕಮಾಂಡ್ ನಾಯಕರನ್ನು ಭೇಟಿ ಮಾಡುವ ಸಾಧ್ಯತೆ ಇದೆ ಎನ್ನಲಾಗಿದ್ದು, ಆದರೆ ಈ ಭೇಟಿಗೆ ಸ್ಪಷ್ಟ ಸಮಯ ನಿಗದಿಯಾಗಿದೆಯೇ ಎಂಬುದು ಇನ್ನೂ ಖಚಿತವಾಗಿಲ್ಲ. ಡಿಸೆಂಬರ್ 27ರಂದು ದೆಹಲಿಯಲ್ಲಿ ನಡೆಯಲಿರುವ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ (CWC) ಸಭೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಅವರಿಗೆ ಆಹ್ವಾನ ನೀಡುವ ನಿರೀಕ್ಷೆಯಿದೆ. ಈ ಸಭೆಗೆ ಮೊದಲು ಹೈಕಮಾಂಡ್ ಭೇಟಿಗೆ ಅವಕಾಶ ದೊರೆತರೆ ಅವರನ್ನು ಭೇಟಿ ಮಾಡಲು ಡಿಕೆಶಿ ಮುಂದಾಗಿದ್ದಾರೆ ಎನ್ನಲಾಗಿದೆ.
2023ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಬಹುಮತ ಗಳಿಸಿದ ಬಳಿಕ, ಶಾಸಕಾಂಗ ಪಕ್ಷದ ನಾಯಕನ ಆಯ್ಕೆಗೆ ದೆಹಲಿಯಲ್ಲಿ ನಡೆದ ಸಂಧಾನ ಪ್ರಕ್ರಿಯೆ ಇಂದಿಗೂ ರಾಜಕೀಯ ಚರ್ಚೆಯ ಕೇಂದ್ರಬಿಂದುವಾಗಿಯೇ ಉಳಿದಿದೆ. ಆ ವೇಳೆ ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಹಾಗೂ ಡಿ.ಕೆ.ಶಿವಕುಮಾರ್ ಅವರನ್ನು ಉಪ ಮುಖ್ಯಮಂತ್ರಿಯಾಗಿ ನೇಮಿಸುವ ತೀರ್ಮಾನ ಕೈಗೊಳ್ಳಲಾಗಿತ್ತು. ಜೊತೆಗೆ ರಾಜ್ಯಕ್ಕೆ ಒಂದೇ ಉಪಮುಖ್ಯಮಂತ್ರಿ ಹುದ್ದೆ ಇರಲಿದೆ ಹಾಗೂ ಲೋಕಸಭಾ ಚುನಾವಣೆಯವರೆಗೂ ಡಿಕೆಶಿ ಕೆಪಿಸಿಸಿ ಅಧ್ಯಕ್ಷರಾಗಿ ಮುಂದುವರೆಯಲಿದ್ದಾರೆ ಎಂದು ಎಐಸಿಸಿ ಸ್ಪಷ್ಟಪಡಿಸಿತ್ತು.
ಅದರ ಬಳಿಕ ಎರಡುವರೆ ವರ್ಷಗಳ ನಂತರ ನಾಯಕತ್ವ ಬದಲಾವಣೆ ಆಗಲಿದೆ ಎಂಬ ಚರ್ಚೆಗಳು ನಿರಂತರವಾಗಿ ನಡೆಯುತ್ತಿವೆ. ಲೋಕಸಭೆ ಚುನಾವಣೆಗೂ ಮುನ್ನ ಹಲವು ಉಪಮುಖ್ಯಮಂತ್ರಿ ಹುದ್ದೆಗಳನ್ನು ಸೃಷ್ಟಿಸುವ ಬೇಡಿಕೆಗಳು ಕೂಡ ಕೇಳಿಬಂದಿದ್ದವು. ಈ ಎಲ್ಲ ಬೆಳವಣಿಗೆಗಳ ನಡುವೆ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, “ಎಲ್ಲರೂ ತಮಗೆ ವಹಿಸಿರುವ ಜವಾಬ್ದಾರಿಯನ್ನು ನಿರ್ವಹಿಸಬೇಕು, ಹೈಕಮಾಂಡ್ ಸೂಕ್ತ ಸಮಯದಲ್ಲಿ ನಿರ್ಧಾರ ಕೈಗೊಳ್ಳುತ್ತದೆ” ಎಂದು ಹೇಳುವ ಮೂಲಕ ಚರ್ಚೆಗೆ ತಾತ್ಕಾಲಿಕ ಬ್ರೇಕ್ ಹಾಕಿದ್ದರು.

ಡಿಕೆ ಬಣದ ಒತ್ತಾಯ, ಸಿದ್ದರಾಮಯ್ಯ ಮೌನ
ಇತ್ತೀಚಿನ ದಿನಗಳಲ್ಲಿ ಅಧಿಕಾರ ಹಂಚಿಕೆಯ ಬಗ್ಗೆ ಒಪ್ಪಂದವಾಗಿದೆ ಎಂಬ ವಿಚಾರವನ್ನು ಡಿ.ಕೆ. ಬಣ ಬಲವಾಗಿ ಮುಂದಿಟ್ಟಿದ್ದು, ಅದರಂತೆ ನಡೆದುಕೊಳ್ಳಬೇಕು ಎಂಬ ಒತ್ತಾಯ ಕೇಳಿಬರುತ್ತಿದೆ. ಇದೇ ಹಿನ್ನೆಲೆಯಲ್ಲಿ ಡಿ.ಕೆ.ಶಿವಕುಮಾರ್ ದೆಹಲಿಗೆ ತೆರಳಿರುವುದು ರಾಜಕೀಯ ಅರ್ಥಕತೆಗಳಿಗೆ ಕಾರಣವಾಗಿದೆ. ದೆಹಲಿಗೆ ತೆರಳುವ ಮುನ್ನ “ಕಾಂಗ್ರೆಸ್‌ನಲ್ಲಿ ಯಾವುದೇ ಸಮಸ್ಯೆಗಳಿಲ್ಲ” ಎಂದು ಹೇಳಿದ್ದ ಡಿಕೆಶಿ, ದೆಹಲಿ ಪ್ರವಾಸದ ಬಳಿಕ ಈ ಚರ್ಚೆ ಮತ್ತಷ್ಟು ತೀವ್ರಗೊಂಡಿದೆ.

ಸಿದ್ದರಾಮಯ್ಯ ಪ್ರತಿಕ್ರಿಯೆ
ಈ ಕುರಿತು ಮೈಸೂರಿನಲ್ಲಿ ಮಾತನಾಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, “ಪಕ್ಷಕ್ಕಿಂತ ಯಾರು ದೊಡ್ಡವರಲ್ಲ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆಗೆ ನಾನು ಸಂಪೂರ್ಣ ಸಹಮತ ವ್ಯಕ್ತಪಡಿಸುತ್ತೇನೆ. ನಾಯಕತ್ವ ಬದಲಾವಣೆ ವಿಚಾರವನ್ನು ರಾಹುಲ್ ಗಾಂಧಿಯವರು ತೀರ್ಮಾನಿಸಬೇಕು. ಅವರು ಏನು ತೀರ್ಮಾನಿಸುತ್ತಾರೋ ಅದಕ್ಕೆ ನಾವು ಬದ್ಧ” ಎಂದು ಸ್ಪಷ್ಟಪಡಿಸಿದ್ದರು. ಮಾಧ್ಯಮಗಳೇ ಈ ವಿಚಾರವನ್ನು ಹೆಚ್ಚಾಗಿ ಚರ್ಚಿಸುತ್ತಿವೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದ ಸಿದ್ದರಾಮಯ್ಯ, ಪಕ್ಷದ ವರಿಷ್ಠರ ತೀರ್ಮಾನವೇ ಅಂತಿಮ ಎಂದು ಹೇಳಿದ್ದರು.
ರಾಜಕೀಯ ವಲಯ
ಇತ್ತೀಚೆಗೆ ಡಿ.ಕೆ.ಶಿವಕುಮಾರ್ ಮತ್ತು ಸಿದ್ದರಾಮಯ್ಯ ಆಪ್ತರ ನಡುವೆ ನಡೆದ ಭೇಟಿಗಳು, ಉಪಹಾರ ಕೂಟಗಳು ಹಾಗೂ ದೆಹಲಿ ಯಾತ್ರೆಗಳು, ಕಾಂಗ್ರೆಸ್ ಒಳಗಿನ ರಾಜಕೀಯ ಜಿದ್ದಾಜಿದ್ದಿಯನ್ನು ಮತ್ತಷ್ಟು ತೀವ್ರಗೊಳಿಸುತ್ತಿವೆ. ಹೈಕಮಾಂಡ್ ಯಾವ ತೀರ್ಮಾನ ಕೈಗೊಳ್ಳಲಿದೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲದಿದ್ದರೂ, ಡಿಕೆಶಿಯ ದೆಹಲಿ ಪ್ರವಾಸ ರಾಜ್ಯ ರಾಜಕೀಯದಲ್ಲಿ ಹೊಸ ತಿರುವು ತರುತ್ತದೆಯೇ ಎಂಬುದರ ಮೇಲೆ ಎಲ್ಲರ ಗಮನ ನೆಟ್ಟಿದೆ.






