ಶಿವಮೊಗ್ಗ, ಜುಲೈ 27: ಹಿರಿಯ ಕಾಂಗ್ರೆಸ್ ನಾಯಕರು, ಶಿವಮೊಗ್ಗದ ಮಾಜಿ ಶಾಸಕರು, ಕರ್ನಾಟಕ ಮಾಜಿ ಶಾಸಕರ ವೇದಿಕೆಯ ರಾಜ್ಯಾಧ್ಯಕ್ಷರು ಹಾಗೂ ಅಖಿಲ ಭಾರತ ವೀರಶೈವ ಮಹಾಸಭಾ ರಾಜ್ಯ ಉಪಾಧ್ಯಕ್ಷರಾಗಿದ್ದ ಹೆಚ್.ಎಂ. ಚಂದ್ರಶೇಖರಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಮಾಜಿ ಸಚಿವ ಎಸ್. ಮಧು ಬಂಗಾರಪ್ಪ ಸಂತಾಪ ಸೂಚಿಸಿದ್ದಾರೆ.
ಶಿವಮೊಗ್ಗ ಕ್ಷೇತ್ರ ಹಾಗೂ ಪಕ್ಷಕ್ಕೆ ತುಂಬಲಾರದ ನಷ್ಟ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಮಾಜಿ ಶಾಸಕ ಹೆಚ್.ಎಂ. ಚಂದ್ರಶೇಖರಪ್ಪ ಅವರ ನಿಧನಕ್ಕೆ ಸಂತಾಪ ಸೂಚಿಸಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು, “ಹಿರಿಯ ಕಾಂಗ್ರೆಸ್ ನಾಯಕರಾಗಿದ್ದ ಚಂದ್ರಶೇಖರಪ್ಪ ಅವರ ನಿಧನದ ಸುದ್ದಿ ಕೇಳಿ ಮನಸ್ಸಿಗೆ ತೀವ್ರ ನೋವಾಗಿದೆ. ಶಿವಮೊಗ್ಗ ವಿಧಾನಸಭಾ ಕ್ಷೇತ್ರದ ಶಾಸಕರಾಗಿ, ಅಖಿಲ ಭಾರತ ವೀರಶೈವ ಮಹಾಸಭಾದ ರಾಜ್ಯ ಉಪಾಧ್ಯಕ್ಷರಾಗಿ, ಶಿವಮೊಗ್ಗ ನಗರಸಭೆಯ ಅಧ್ಯಕ್ಷರಾಗಿ ಹಾಗೂ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿ ಅವರು ಸಾರ್ವಜನಿಕ ರಂಗದಲ್ಲಿ ಅಪಾರ ಸೇವೆ ಸಲ್ಲಿಸಿದ್ದಾರೆ. ಅವರ ಅಕಾಲಿಕ ಮರಣದಿಂದ ಕ್ಷೇತ್ರಕ್ಕೆ ಹಾಗೂ ಕಾಂಗ್ರೆಸ್ ಪಕ್ಷಕ್ಕೆ ತುಂಬಲಾರದ ನಷ್ಟ ಉಂಟಾಗಿದೆ. ಮೃತರ ಆತ್ಮಕ್ಕೆ ಸದ್ಗತಿ ಸಿಗಲಿ, ಅವರ ಕುಟುಂಬ ವರ್ಗದವರಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ” ಎಂದು ಪ್ರಾರ್ಥಿಸಿದ್ದಾರೆ.

ಈಶ್ವರಪ್ಪ ಅವರನ್ನು ಸೋಲಿಸಿ ರಾಜ್ಯದ ಗಮನ ಸೆಳೆದಿದ್ದರು: ಮಾಜಿ ಸಚಿವ ಮಧು ಬಂಗಾರಪ್ಪ ಸ್ಮರಣೆ
ಸೊರಬ ಶಾಸಕರು ಹಾಗೂ ಮಾಜಿ ಸಚಿವರಾದ ಎಸ್. ಮಧು ಬಂಗಾರಪ್ಪ ಅವರು ಸಂತಾಪದ ಸಂದೇಶ ನೀಡಿ, ಚಂದ್ರಶೇಖರಪ್ಪ ಅವರೊಂದಿಗಿನ ವೈಯಕ್ತಿಕ ಹಾಗೂ ಕುಟುಂಬದ ಒಡನಾಟವನ್ನು ನೆನಪಿಸಿಕೊಂಡಿದ್ದಾರೆ.
”ಪಕ್ಷದ ಹಿರಿಯ ನಾಯಕರು, ಶಿವಮೊಗ್ಗದ ಮಾಜಿ ಶಾಸಕರು ಹಾಗೂ ರಾಜ್ಯ ಮಾಜಿ ಶಾಸಕರ ವೇದಿಕೆಯ ಅಧ್ಯಕ್ಷರಾದ ಹೆಚ್.ಎಂ. ಚಂದ್ರಶೇಖರಪ್ಪ ಅವರ ನಿಧನದ ಸುದ್ದಿ ಆಘಾತ ತಂದಿದೆ. ಇತ್ತೀಚಿನವರೆಗೂ ಪಕ್ಷದ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಅವರು, ಶಿವಮೊಗ್ಗ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬಲವಾಗಿ ಸಂಘಟಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಸುಮಾರು 10 ವರ್ಷಗಳ ಕಾಲ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಪಕ್ಷಕ್ಕೆ ಭದ್ರ ಬುನಾದಿ ಹಾಕಿಕೊಟ್ಟಿದ್ದರು. ಅಲ್ಲದೆ, ಅಖಿಲ ಭಾರತ ವೀರಶೈವ ಮಹಾಸಭಾ ರಾಜ್ಯ ಘಟಕದ ಉಪಾಧ್ಯಕ್ಷರಾಗಿ ಲಿಂಗಾಯತ ಸಮಾಜವನ್ನು ಸಂಘಟಿಸುವ ಜವಾಬ್ದಾರಿಯನ್ನೂ ಯಶಸ್ವಿಯಾಗಿ ನಿರ್ವಹಿಸಿದ್ದರು.

ನಮ್ಮ ತಂದೆ, ಮಾಜಿ ಮುಖ್ಯಮಂತ್ರಿ ಮಾನ್ಯ ಎಸ್. ಬಂಗಾರಪ್ಪ (ಅಪ್ಪಾಜಿ) ಅವರ ಅತ್ಯಂತ ಆತ್ಮೀಯ ಬಳಗದಲ್ಲಿದ್ದ ಚಂದ್ರಶೇಖರಪ್ಪನವರು, ಅವರ ಪ್ರೇರಣೆಯಂತೆ 1999ರ ವಿಧಾನಸಭಾ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರದಿಂದ ಸ್ಪರ್ಧಿಸಿ ಶಾಸಕರಾಗಿ ಆಯ್ಕೆಯಾಗಿದ್ದರು. ತಮ್ಮ ಎದುರಾಳಿಯಾಗಿದ್ದ ಬಿಜೆಪಿಯ ಹಿರಿಯ ನಾಯಕ ಕೆ.ಎಸ್. ಈಶ್ವರಪ್ಪ ಅವರನ್ನು ಸೋಲಿಸುವ ಮೂಲಕ ಇಡೀ ರಾಜ್ಯದ ಗಮನ ಸೆಳೆದಿದ್ದರು.

ಚಂದ್ರಶೇಖರಪ್ಪನವರು ಅಪ್ಪಾಜಿಯವರೊಂದಿಗೆ ಮಾತ್ರವಲ್ಲದೆ, ನನ್ನೊಂದಿಗೂ ರಾಜಕೀಯ ವಿಷಯಗಳ ಕುರಿತು ಮುಕ್ತವಾಗಿ ಚರ್ಚಿಸುತ್ತಾ ಸೂಕ್ತ ಮಾರ್ಗದರ್ಶನ ನೀಡುತ್ತಿದ್ದರು. ಅಪ್ಪಾಜಿಯವರೊಂದಿಗೆ ಕಳೆದ ಆತ್ಮೀಯ ಕ್ಷಣಗಳನ್ನು ನನ್ನೊಂದಿಗೆ ಹಂಚಿಕೊಳ್ಳುತ್ತಿದ್ದರು. ಅವರೊಂದಿಗೆ ನನಗಿದ್ದ ಒಡನಾಟದ ದಿನಗಳು ನನ್ನ ಮನಸ್ಸಿನಲ್ಲಿ ಸದಾ ಹಸಿರಾಗಿರುತ್ತವೆ. ಭಗವಂತನು ಮೃತರ ಆತ್ಮಕ್ಕೆ ಚಿರಶಾಂತಿ ನೀಡಲಿ. ಅವರ ಕುಟುಂಬ ವರ್ಗಕ್ಕೆ, ನನ್ನ ಆತ್ಮೀಯರೂ ಹಾಗೂ ಕಾಂಗ್ರೆಸ್ ಮುಖಂಡರೂ ಆದ ಅವರ ಹಿರಿಯ ಪುತ್ರ ಹೆಚ್.ಸಿ. ಯೋಗೀಶ್ ಹಾಗೂ ಅಪಾರ ಅಭಿಮಾನಿಗಳಿಗೆ ಈ ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ಕರುಣಿಸಲಿ” ಎಂದು ಪ್ರಾರ್ಥಿಸಿದ್ದಾರೆ.







