ತಾಜಾ ಸುದ್ದಿ ರಾಜಕೀಯ ಕ್ರೈಂ ನ್ಯೂಸ್ ರಾಜ್ಯ-ಜಿಲ್ಲೆ ದೇಶ-ವಿದೇಶ ಸೋಷಿಯಲ್ ಮೀಡಿಯಾ ಮನರಂಜನೆ ಕಾನೂನು ಜೀವನಶೈಲಿ ಕ್ರೀಡೆ ಗುರುಪರಂಪರೆ ವಿಡೀಯೋ English News

ಶಿವಮೊಗ್ಗದ ಸಾರ್ವಜನಿಕ ಸಾರಿಗೆಗೆ ಹೊಸ ವೇಗ: 50 ಪಿಎಂ ಇ-ಬಸ್‌ಗಳನ್ನು ಶೀಘ್ರ ರಸ್ತೆಗಿಳಿಸಲು ಸಾರಿಗೆ ಸಚಿವರಿಗೆ ಚೇತನ್ ಕೆ. ಗೌಡ ಮನವಿ

On: August 13, 2026 2:03 PM
Follow Us:
ಸಾರಿಗೆ ಸಚಿವ ಭೈರತಿ ಸುರೇಶ್‌ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ ಚೇತನ್ ಕೆ. ಗೌಡ: ಇ-ಚಾರ್ಜಿಂಗ್ ಮೂಲಸೌಕರ್ಯಕ್ಕೂ ಒತ್ತು

ಬೆಂಗಳೂರು: ‘ಪಿಎಂ ಇ-ಬಸ್ ಸೇವಾ’ (PM-eBus Sewa) ಯೋಜನೆಯಡಿ ಶಿವಮೊಗ್ಗ ನಗರಕ್ಕೆ ಮಂಜೂರಾಗಿರುವ 50 ಎಲೆಕ್ಟ್ರಿಕ್ ಬಸ್‌ಗಳನ್ನು ಶೀಘ್ರವಾಗಿ ರಸ್ತೆಗಿಳಿಸಿ ಸಾರ್ವಜನಿಕರ ಸೇವೆಗೆ ಸಮರ್ಪಿಸುವಂತೆ ಕರ್ನಾಟಕ ರಾಜ್ಯ ಜವಳಿ ಮೂಲಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಚೇತನ್ ಕೆ. ಗೌಡ ಅವರು ಸಾರಿಗೆ ಸಚಿವ ಭೈರತಿ ಸುರೇಶ್ ಅವರಿಗೆ ಮನವಿ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಸಾರಿಗೆ ಸಚಿವರನ್ನು ಖುದ್ದಾಗಿ ಭೇಟಿ ಮಾಡಿದ ಚೇತನ್ ಕೆ. ಗೌಡ ಅವರು, ಶಿವಮೊಗ್ಗ ನಗರದ ಹಾಗೂ ಸುತ್ತಮುತ್ತಲಿನ ಗ್ರಾಮೀಣ ಪ್ರದೇಶಗಳ ಸಾರ್ವಜನಿಕ ಸಾರಿಗೆ ವ್ಯವಸ್ಥೆಯ ಕುರಿತು ಸುದೀರ್ಘವಾಗಿ ಚರ್ಚಿಸಿ ಮನವಿ ಪತ್ರವನ್ನು ಹಸ್ತಾಂತರಿಸಿದರು. ಹೆಚ್ಚುತ್ತಿರುವ ಪ್ರಯಾಣಿಕರ ಸಂಖ್ಯೆಗೆ ಅನುಗುಣವಾಗಿ ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನು ಬಲಪಡಿಸುವ ಅಗತ್ಯವಿದೆ ಎಂದು ಅವರು ಸಚಿವರ ಗಮನಕ್ಕೆ ತಂದರು.

ಮಲೆನಾಡಿನ ಹೆಬ್ಬಾಗಿಲು ಎಂದೇ ಗುರುತಿಸಿಕೊಂಡಿರುವ ಶಿವಮೊಗ್ಗ ನಗರವು ಶೈಕ್ಷಣಿಕ, ವಾಣಿಜ್ಯ, ಕೈಗಾರಿಕೆ ಹಾಗೂ ಪ್ರವಾಸೋದ್ಯಮ ಕ್ಷೇತ್ರಗಳಲ್ಲಿ ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ಪ್ರಮುಖ ಜಿಲ್ಲಾ ಕೇಂದ್ರವಾಗಿದೆ. ಶಿವಮೊಗ್ಗ ನಗರಕ್ಕೆ ಪ್ರತಿದಿನ ಜಿಲ್ಲೆಯ ವಿವಿಧ ತಾಲೂಕುಗಳು ಹಾಗೂ ಗ್ರಾಮೀಣ ಪ್ರದೇಶಗಳಿಂದ ಸಾವಿರಾರು ವಿದ್ಯಾರ್ಥಿಗಳು, ಕಾರ್ಮಿಕರು, ಸರ್ಕಾರಿ ಮತ್ತು ಖಾಸಗಿ ವಲಯದ ನೌಕರರು ಹಾಗೂ ಸಾರ್ವಜನಿಕರು ವಿವಿಧ ಉದ್ದೇಶಗಳಿಗಾಗಿ ಆಗಮಿಸುತ್ತಿದ್ದಾರೆ.

ನಗರದ ಜನಸಂಖ್ಯೆ ಹಾಗೂ ವಾಣಿಜ್ಯ ಚಟುವಟಿಕೆಗಳು ವಿಸ್ತರಿಸುತ್ತಿರುವ ಹಿನ್ನೆಲೆಯಲ್ಲಿ ನಗರ ಮತ್ತು ಗ್ರಾಮೀಣ ಮಾರ್ಗಗಳಲ್ಲಿ ಸಾರ್ವಜನಿಕ ಸಾರಿಗೆಯ ಮೇಲಿನ ಅವಲಂಬನೆಯೂ ಹೆಚ್ಚಾಗಿದೆ. ಅದರಲ್ಲೂ ಕಾಲೇಜು ವಿದ್ಯಾರ್ಥಿಗಳು ಹಾಗೂ ಉದ್ಯೋಗಸ್ಥರು ಸೇರಿದಂತೆ ಪ್ರತಿನಿತ್ಯ ಸಂಚರಿಸುವ ಪ್ರಯಾಣಿಕರ ಸಂಖ್ಯೆ ಹೆಚ್ಚಾಗುತ್ತಿದ್ದು, ಹಲವು ಮಾರ್ಗಗಳಲ್ಲಿ ಬಸ್‌ಗಳ ಬೇಡಿಕೆ ಗಣನೀಯವಾಗಿ ಏರಿಕೆಯಾಗಿದೆ ಎಂದು ಚೇತನ್ ಕೆ. ಗೌಡ ಅವರು ಸಚಿವರ ಗಮನಕ್ಕೆ ತಂದರು.

ರಾಜ್ಯ ಸರ್ಕಾರದ ‘ಶಕ್ತಿ ಯೋಜನೆ’ ಜಾರಿಯಾದ ಬಳಿಕ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಸರ್ಕಾರಿ ಬಸ್‌ಗಳನ್ನು ಬಳಸುತ್ತಿದ್ದಾರೆ. ಇದರಿಂದ ಸಾರ್ವಜನಿಕ ಸಾರಿಗೆ ವ್ಯವಸ್ಥೆಗೆ ಜನರಿಂದ ಉತ್ತಮ ಸ್ಪಂದನೆ ದೊರೆತಿದ್ದು, ಬಸ್‌ಗಳ ಮೇಲಿನ ಪ್ರಯಾಣಿಕರ ಒತ್ತಡವೂ ಹೆಚ್ಚಾಗಿದೆ. ಇಂತಹ ಸಂದರ್ಭದಲ್ಲಿ ಶಿವಮೊಗ್ಗ ನಗರಕ್ಕೆ ಈಗಾಗಲೇ ಮಂಜೂರಾಗಿರುವ 50 ಎಲೆಕ್ಟ್ರಿಕ್ ಬಸ್‌ಗಳನ್ನು ಕಾರ್ಯಾಚರಣೆಗೆ ತರಲು ವಿಳಂಬವಾಗಬಾರದು ಎಂದು ಅವರು ಒತ್ತಾಯಿಸಿದರು.

ನಗರದಲ್ಲಿ ಎಲೆಕ್ಟ್ರಿಕ್ ಬಸ್‌ಗಳ ಸಂಚಾರ ಆರಂಭಿಸುವುದರಿಂದ ಸಾರ್ವಜನಿಕರಿಗೆ ಹೆಚ್ಚಿನ ಅನುಕೂಲವಾಗುವುದರ ಜೊತೆಗೆ ಪರಿಸರ ಸ್ನೇಹಿ ಹಸಿರು ಸಾರಿಗೆ ವ್ಯವಸ್ಥೆಗೆ ಉತ್ತೇಜನ ದೊರೆಯಲಿದೆ. ಇಂಧನ ಆಧಾರಿತ ವಾಹನಗಳಿಂದ ಉಂಟಾಗುವ ವಾಯುಮಾಲಿನ್ಯವನ್ನು ತಗ್ಗಿಸುವ ನಿಟ್ಟಿನಲ್ಲಿಯೂ ವಿದ್ಯುತ್ ಚಾಲಿತ ಬಸ್‌ಗಳ ಬಳಕೆ ಮಹತ್ವದ್ದಾಗಿದೆ ಎಂದು ಅವರು ವಿವರಿಸಿದರು.

ಶಿವಮೊಗ್ಗ ನಗರಕ್ಕೆ ಮಂಜೂರಾಗಿರುವ 50 ಪಿಎಂ ಇ-ಬಸ್‌ಗಳನ್ನು ಆದಷ್ಟು ಶೀಘ್ರವಾಗಿ ರಸ್ತೆಗಿಳಿಸಬೇಕು. ಬಸ್‌ಗಳ ಸುಗಮ ಹಾಗೂ ನಿರಂತರ ಕಾರ್ಯಾಚರಣೆಗೆ ಅಗತ್ಯವಿರುವ ಆಧುನಿಕ ಇ-ಚಾರ್ಜಿಂಗ್ ಕೇಂದ್ರಗಳು ಹಾಗೂ ಸಂಬಂಧಿತ ಮೂಲಸೌಕರ್ಯಗಳನ್ನು ಸಹ ನಗರದಲ್ಲಿ ಸಮರ್ಪಕವಾಗಿ ಅಭಿವೃದ್ಧಿಪಡಿಸಬೇಕು ಎಂದು ಚೇತನ್ ಕೆ. ಗೌಡ ಅವರು ಮನವಿ ಮಾಡಿದರು.

ಹೊಸ ಇ-ಬಸ್‌ಗಳು ಕಾರ್ಯಾಚರಣೆಗೆ ಬಂದರೆ ನಗರ ಮತ್ತು ಪ್ರಮುಖ ಗ್ರಾಮೀಣ ಮಾರ್ಗಗಳಲ್ಲಿ ಸಾರ್ವಜನಿಕ ಸಾರಿಗೆ ಸಂಪರ್ಕ ಮತ್ತಷ್ಟು ಬಲಪಡಿಸುವುದರ ಜೊತೆಗೆ, ವಿದ್ಯಾರ್ಥಿಗಳು, ಮಹಿಳೆಯರು, ಉದ್ಯೋಗಿಗಳು ಹಾಗೂ ಸಾಮಾನ್ಯ ಪ್ರಯಾಣಿಕರಿಗೆ ಹೆಚ್ಚು ಅನುಕೂಲವಾಗಲಿದೆ. ಹೆಚ್ಚುತ್ತಿರುವ ಪ್ರಯಾಣಿಕರ ದಟ್ಟಣೆಯನ್ನು ನಿರ್ವಹಿಸಲು ಇದು ಪರಿಣಾಮಕಾರಿ ಹೆಜ್ಜೆಯಾಗಲಿದೆ ಎಂದು ಅವರು ತಿಳಿಸಿದ್ದಾರೆ.

ಚೇತನ್ ಕೆ. ಗೌಡ ಅವರ ಮನವಿಯನ್ನು ಸ್ವೀಕರಿಸಿದ ಸಾರಿಗೆ ಸಚಿವ ಭೈರತಿ ಸುರೇಶ್ ಅವರು ವಿಷಯದ ಗಂಭೀರತೆಯನ್ನು ಪರಿಗಣಿಸಿ, ಶಿವಮೊಗ್ಗಕ್ಕೆ ಮಂಜೂರಾಗಿರುವ ಪಿಎಂ ಇ-ಬಸ್‌ಗಳ ಕಾರ್ಯಾಚರಣೆಗೆ ಸಂಬಂಧಿಸಿದಂತೆ ಶೀಘ್ರದಲ್ಲೇ ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ.

ಶಿವಮೊಗ್ಗ ನಗರದ ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನು ಆಧುನೀಕರಿಸುವ ನಿಟ್ಟಿನಲ್ಲಿ 50 ಎಲೆಕ್ಟ್ರಿಕ್ ಬಸ್‌ಗಳ ಕಾರ್ಯಾಚರಣೆ ಮಹತ್ವದ ಹೆಜ್ಜೆಯಾಗಲಿದೆ. ಈ ಬಸ್‌ಗಳು ಶೀಘ್ರ ರಸ್ತೆಗಿಳಿದರೆ ಸಾರ್ವಜನಿಕರಿಗೆ ಅನುಕೂಲವಾಗುವುದರ ಜೊತೆಗೆ ನಗರದಲ್ಲಿ ಪರಿಸರ ಸ್ನೇಹಿ ಸಾರಿಗೆ ವ್ಯವಸ್ಥೆ ಮತ್ತಷ್ಟು ಬಲಗೊಳ್ಳಲಿದೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ.

ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಜವಳಿ ಮೂಲಸೌಕರ್ಯ ಅಭಿವೃದ್ಧಿ ನಿಗಮದ ಉಪಾಧ್ಯಕ್ಷ ಹಾಗೂ ಹೆಬ್ಬಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಿ.ವಿ. ಬಾಲಾಜಿ ಮತ್ತು ಚಿಕ್ಕಮಗಳೂರು ಯುವ ಕಾಂಗ್ರೆಸ್ ಅಧ್ಯಕ್ಷ ಶ್ರೀಜಿತ್ ಉಪಸ್ಥಿತರಿದ್ದರು.

K.M.Sathish Gowda

Join WhatsApp

Join Now

Facebook

Join Now

Leave a Comment