ಶಿವಮೊಗ್ಗ: ದೇಶಕ್ಕೆ ಸ್ವಾತಂತ್ರ್ಯ ದೊರೆತು 79 ವರ್ಷಗಳು ಪೂರ್ಣಗೊಂಡ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಆಶಯದಂತೆ ದೇಶಾದ್ಯಂತ ‘ಹರ್ ಘರ್ ತಿರಂಗಾ’ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ. ದೇಶದ ಪ್ರತಿಯೊಬ್ಬ ನಾಗರಿಕನ ಮನೆಯ ಮೇಲೂ ತ್ರಿವರ್ಣ ಧ್ವಜ ಹಾರಿಸುವ ಮೂಲಕ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹನೀಯರನ್ನು ಸ್ಮರಿಸುವುದು ಹಾಗೂ ರಾಷ್ಟ್ರಭಕ್ತಿಯ ಭಾವನೆಯನ್ನು ಬಲಪಡಿಸುವುದು ಅಭಿಯಾನದ ಪ್ರಮುಖ ಉದ್ದೇಶವಾಗಿದೆ.
ಈ ಹಿನ್ನೆಲೆಯಲ್ಲಿ ಶಿವಮೊಗ್ಗ ಸಂಸದರಾದ ಬಿ.ವೈ. ರಾಘವೇಂದ್ರ ಅವರು ತ್ರಿವರ್ಣ ಧ್ವಜಗಳನ್ನು ಪತ್ರಕರ್ತ ಹಾಗೂ ಕರ್ನಾಟಕ ವರ್ಕಿಂಗ್ ಜರ್ನಲಿಸ್ಟ್ಸ್ ವಾಯ್ಸ್ ಅಸೋಸಿಯೇಷನ್ (ರಿ.) ಶಿವಮೊಗ್ಗ ಜಿಲ್ಲಾ ಘಟಕದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೆ.ಎಂ. ಸತೀಶ್ ಗೌಡ ಅವರಿಗೆ ತ್ರಿವರ್ಣ ಧ್ವಜವನ್ನು ವಿತರಿಸಿದರು.

ಈ ವೇಳೆ ಮಾತನಾಡಿದ ಬಿ.ವೈ. ರಾಘವೇಂದ್ರ ಅವರು, ಪ್ರತಿಯೊಬ್ಬರೂ ತಮ್ಮ ಮನೆಗಳ ಮೇಲೆ ತ್ರಿವರ್ಣ ಧ್ವಜ ಹಾರಿಸುವ ಮೂಲಕ ದೇಶದ ಸ್ವಾತಂತ್ರ್ಯಕ್ಕಾಗಿ ತ್ಯಾಗ, ಬಲಿದಾನ ಮಾಡಿದ ಮಹನೀಯರನ್ನು ಸ್ಮರಿಸಬೇಕು. ‘ಹರ್ ಘರ್ ತಿರಂಗಾ’ ಅಭಿಯಾನವು ದೇಶಭಕ್ತಿ ಹಾಗೂ ರಾಷ್ಟ್ರೀಯ ಏಕತೆಯ ಸಂದೇಶವನ್ನು ಪ್ರತಿಯೊಂದು ಮನೆಗೂ ತಲುಪಿಸುವ ಮಹತ್ವದ ಅಭಿಯಾನವಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷರಾದ ಜಗದೀಶ್ ಎನ್.ಕೆ., ಎಸ್. ದತ್ತಾತ್ರಿ, ಸತೀಶ್ ಮುಂಚೆಮನೆ, ಚಂದ್ರಶೇಖರ್, ಮಂಜುನಾಥ್, ದಿವಾಕರ್ ಶೆಟ್ಟಿ, ಕಾಮತ್, ಶ್ರೀನಾಗ ಸೇರಿದಂತೆ ಉಪಸ್ಥಿತರಿದ್ದರು.

ಸ್ವಾತಂತ್ರ್ಯ ಹೋರಾಟಗಾರರ ತ್ಯಾಗವನ್ನು ಸ್ಮರಿಸುತ್ತಾ, ದೇಶದ ಹೆಮ್ಮೆಯ ಪ್ರತೀಕವಾಗಿರುವ ತ್ರಿವರ್ಣ ಧ್ವಜವನ್ನು ಪ್ರತಿಯೊಂದು ಮನೆಯ ಮೇಲೂ ಹಾರಿಸುವ ಮೂಲಕ ‘ಹರ್ ಘರ್ ತಿರಂಗಾ’ ಅಭಿಯಾನವನ್ನು ಯಶಸ್ವಿಗೊಳಿಸುವಂತೆ ಕರೆ ನೀಡಲಾಯಿತು.






