ತಾಜಾ ಸುದ್ದಿ ರಾಜಕೀಯ ಕ್ರೈಂ ನ್ಯೂಸ್ ರಾಜ್ಯ-ಜಿಲ್ಲೆ ದೇಶ-ವಿದೇಶ ಸೋಷಿಯಲ್ ಮೀಡಿಯಾ ಮನರಂಜನೆ ಕಾನೂನು ಜೀವನಶೈಲಿ ಕ್ರೀಡೆ ಗುರುಪರಂಪರೆ ವಿಡೀಯೋ English News

ಬರಗಾಲ ಕುರಿತು ವಿಶೇಷ ಅಧಿವೇಶನ ಕರೆಯಿರಿ: 5 ಲಕ್ಷ ರೂ.ವರೆಗೆ ಕೃಷಿ ಸಾಲ ಮನ್ನಾಕ್ಕೆ ಬಿ.ವೈ. ವಿಜಯೇಂದ್ರ ಒತ್ತಾಯ

On: September 3, 2026 1:23 PM
Follow Us:

ಗುಡದೂರು: ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರು ಸಂಕಷ್ಟದ ಸುಳಿಯಲ್ಲಿ ಸಿಲುಕಿದ್ದಾರೆ. ಈ ಹಿನ್ನೆಲೆಯಲ್ಲಿ ಬರಗಾಲ, ರೈತರ ಆತ್ಮಹತ್ಯೆ ಹಾಗೂ ಕೃಷಿ ಸಮಸ್ಯೆಗಳ ಕುರಿತು ಚರ್ಚಿಸಲು ರಾಜ್ಯ ಸರ್ಕಾರ ತಕ್ಷಣವೇ ವಿಶೇಷ ಅಧಿವೇಶನ ಕರೆಯಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಒತ್ತಾಯಿಸಿದರು. ಅಲ್ಲದೆ, ಸಂಕಷ್ಟದಲ್ಲಿರುವ ರೈತರ ನೆರವಿಗಾಗಿ 5 ಲಕ್ಷ ರೂಪಾಯಿವರೆಗೆ ಕೃಷಿ ಸಾಲ ಮನ್ನಾ ಮಾಡುವಂತೆ ಸರ್ಕಾರವನ್ನು ಆಗ್ರಹಿಸಿದರು.

ನವಲಿ ಸಮಾನಾಂತರ ಜಲಾಶಯ ನಿರ್ಮಾಣ, ನಂದವಡಿ ಏತ ನೀರಾವರಿ ಯೋಜನೆ ಜಾರಿಗೊಳಿಸುವುದು, ಬರಪೀಡಿತ ರೈತರಿಗೆ ಪರಿಹಾರ ಒದಗಿಸುವುದು ಹಾಗೂ ರೈತ ವಿರೋಧಿ ನೀತಿಗಳ ವಿರುದ್ಧ ಬಿಜೆಪಿ ನಡೆಸುತ್ತಿರುವ ‘ಬಳ್ಳಾರಿ ಚಲೋ’ ಪಾದಯಾತ್ರೆಯ ಮೂರನೇ ದಿನ ಗುಡದೂರಿನಿಂದ ಪಾದಯಾತ್ರೆ ಆರಂಭವಾಯಿತು. ಈ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ವಿಜಯೇಂದ್ರ, ರಾಜ್ಯದ ರೈತರ ಜ್ವಲಂತ ಸಮಸ್ಯೆಗಳ ಕುರಿತು ಗಂಭೀರ ಚರ್ಚೆ ನಡೆಯಬೇಕಾದ ಅಗತ್ಯವಿದೆ ಎಂದು ತಿಳಿಸಿದರು.

ರಾಜ್ಯದ ಅನೇಕ ಭಾಗಗಳಲ್ಲಿ ಮಳೆಯ ಕೊರತೆಯಿಂದ ಬೆಳೆಗಳು ಒಣಗುತ್ತಿದ್ದು, ಕುಡಿಯುವ ನೀರು ಹಾಗೂ ಮೇವು ಸಮಸ್ಯೆಯೂ ತೀವ್ರವಾಗಿದೆ. ಹೀಗಾಗಿ ರಾಜ್ಯದ 190ಕ್ಕೂ ಹೆಚ್ಚು ತಾಲ್ಲೂಕುಗಳನ್ನು ಬರಪೀಡಿತ ಪ್ರದೇಶಗಳೆಂದು ಘೋಷಿಸಿ, ರೈತರಿಗೆ ತುರ್ತು ಪರಿಹಾರ ಒದಗಿಸಬೇಕು ಎಂದು ಅವರು ಆಗ್ರಹಿಸಿದರು.

ಹೊಸಪೇಟೆ ಜಲಾಶಯದಲ್ಲಿ ಸುಮಾರು 31 ಟಿಎಂಸಿ ಹೂಳು ಸಂಗ್ರಹವಾಗಿರುವುದರಿಂದ ನೀರಿನ ಸಂಗ್ರಹ ಸಾಮರ್ಥ್ಯ ಕುಂಠಿತವಾಗಿದೆ. ಈ ಸಮಸ್ಯೆಗೆ ಶಾಶ್ವತ ಪರಿಹಾರವಾಗಿ ನವಲಿ ಸಮಾನಾಂತರ ಜಲಾಶಯ ನಿರ್ಮಾಣ ಅಗತ್ಯವಾಗಿದೆ ಎಂದು ವಿಜಯೇಂದ್ರ ತಿಳಿಸಿದರು. ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಅವಧಿಯಲ್ಲಿ ಈ ಯೋಜನೆಯ ಡಿಪಿಆರ್ ಸಿದ್ಧತೆಗೆ ಅನುದಾನ ನೀಡಲಾಗಿತ್ತು ಹಾಗೂ ಯೋಜನೆಗೆ ಆದ್ಯತೆ ನೀಡಲು ಪ್ರಯತ್ನಿಸಲಾಗಿತ್ತು ಎಂದು ಅವರು ಸ್ಮರಿಸಿದರು.

ರಾಜ್ಯ ಸರ್ಕಾರ ಪಂಚ ಗ್ಯಾರಂಟಿಗಳನ್ನೇ ಅಭಿವೃದ್ಧಿಯ ಪರ್ಯಾಯವಾಗಿ ಬಿಂಬಿಸುತ್ತಿದ್ದು, ರೈತರ ಸಂಕಷ್ಟ, ನೀರಾವರಿ ಯೋಜನೆಗಳು ಹಾಗೂ ಗ್ರಾಮೀಣ ಅಭಿವೃದ್ಧಿ ವಿಷಯಗಳಿಗೆ ಸಮರ್ಪಕ ಗಮನ ನೀಡುತ್ತಿಲ್ಲ ಎಂದು ವಿಜಯೇಂದ್ರ ಟೀಕಿಸಿದರು.

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಗ್ರಾಮೀಣ ಭಾಗದ ರೈತರ ಸಮಸ್ಯೆಗಳ ಬಗ್ಗೆ ಅಗತ್ಯ ಕಾಳಜಿ ಇಲ್ಲ ಎಂದು ಆರೋಪಿಸಿದ ವಿಜಯೇಂದ್ರ, ರೈತರ ಬದುಕಿನ ಸಂಕಷ್ಟವನ್ನು ಅರ್ಥಮಾಡಿಕೊಳ್ಳುವ ಬದಲು ಸರ್ಕಾರ ಬೇರೆ ವಿಚಾರಗಳಿಗೆ ಹೆಚ್ಚು ಆದ್ಯತೆ ನೀಡುತ್ತಿದೆ ಎಂದು ಹೇಳಿದರು.

“ರಿಯಲ್ ಎಸ್ಟೇಟ್ ಹಾಗೂ ನಗರಾಭಿವೃದ್ಧಿ ಕ್ಷೇತ್ರಗಳಿಗೆ ನೀಡುವ ಗಮನದ ಒಂದು ಭಾಗವಾದರೂ ಅನ್ನದಾತರ ಸಮಸ್ಯೆಗಳ ಕಡೆ ಹರಿಸಿದರೆ ರೈತರಿಗೆ ನೆರವಾಗುತ್ತದೆ. ಬರ ಪರಿಸ್ಥಿತಿ ದಿನದಿಂದ ದಿನಕ್ಕೆ ಗಂಭೀರವಾಗುತ್ತಿದ್ದು, ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕು” ಎಂದು ಅವರು ಆಗ್ರಹಿಸಿದರು.

ಎಸ್‌ಸಿಪಿ ಮತ್ತು ಟಿಎಸ್‌ಪಿ ಯೋಜನೆಗಳಡಿ ದಲಿತ ಸಮುದಾಯಗಳ ಅಭಿವೃದ್ಧಿಗಾಗಿ ಮೀಸಲಾದ ಅನುದಾನವನ್ನು ಇತರ ಇಲಾಖೆಗಳ ಕಾರ್ಯಗಳಿಗೆ ಬಳಸಲಾಗುತ್ತಿದೆ ಎಂದು ವಿಜಯೇಂದ್ರ ಆರೋಪಿಸಿದರು. ಇದು ದಲಿತ ಸಮುದಾಯಕ್ಕೆ ಅನ್ಯಾಯವಾಗಿದ್ದು, ಸರ್ಕಾರ ಈ ಬಗ್ಗೆ ಸ್ಪಷ್ಟನೆ ನೀಡಬೇಕು ಎಂದು ಒತ್ತಾಯಿಸಿದರು.

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ರಾಜ್ಯದಲ್ಲಿ ರೈತರ ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗಿವೆ ಎಂದು ಆರೋಪಿಸಿದ ವಿಜಯೇಂದ್ರ, ಕಳೆದ ಮೂರು ವರ್ಷಗಳಲ್ಲಿ 3,655 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಿದರು.

ಕಲ್ಯಾಣ ಕರ್ನಾಟಕ ಭಾಗದಲ್ಲಿ ಪರಿಸ್ಥಿತಿ ಮತ್ತಷ್ಟು ಗಂಭೀರವಾಗಿದ್ದು, ಕಲಬುರಗಿ ಜಿಲ್ಲೆಯಲ್ಲಿ ಸುಮಾರು 294, ಬೀದರ್ ಜಿಲ್ಲೆಯಲ್ಲಿ 220ಕ್ಕೂ ಹೆಚ್ಚು, ರಾಯಚೂರು ಜಿಲ್ಲೆಯಲ್ಲಿ 160ಕ್ಕೂ ಹೆಚ್ಚು, ಕೊಪ್ಪಳ ಜಿಲ್ಲೆಯಲ್ಲಿ 80ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಒಟ್ಟು ಈ ಭಾಗದಲ್ಲೇ ಸುಮಾರು 937 ರೈತರ ಆತ್ಮಹತ್ಯೆಗಳು ದಾಖಲಾಗಿವೆ ಎಂದು ಅವರು ವಿವರಿಸಿದರು.

ಈ ವಿಷಯವನ್ನು ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಗಂಭೀರವಾಗಿ ಪರಿಗಣಿಸಬೇಕು ಎಂದು ವಿಜಯೇಂದ್ರ ತಿಳಿಸಿದರು.

ರಾಯಚೂರು ಭಾಗದಲ್ಲಿ ರೈತರಿಂದ ಖರೀದಿಸಲಾದ ಜೋಳದ ಹಣದಲ್ಲಿ ಸುಮಾರು 145 ಕೋಟಿ ರೂಪಾಯಿ ಬಾಕಿಯಿದೆ ಎಂದು ರೈತ ಮೋರ್ಚಾ ಮುಖಂಡರು ಮಾಹಿತಿ ನೀಡಿದ್ದಾರೆ ಎಂದು ವಿಜಯೇಂದ್ರ ಹೇಳಿದರು. ಈ ಬಾಕಿ ಹಣವನ್ನು ಸರ್ಕಾರ ತಕ್ಷಣ ಬಿಡುಗಡೆ ಮಾಡಬೇಕು ಎಂದು ಅವರು ಒತ್ತಾಯಿಸಿದರು.

ಹಿಂದಿನ ಬಿಜೆಪಿ ಸರ್ಕಾರ ಹೈನುಗಾರಿಕೆಗೆ ಉತ್ತೇಜನ ನೀಡುವ ಉದ್ದೇಶದಿಂದ ಸಹಾಯಧನ ನೀಡುತ್ತಿತ್ತು. ಆದರೆ ಪ್ರಸ್ತುತ ಸರ್ಕಾರ ಆ ನೆರವನ್ನೂ ಸ್ಥಗಿತಗೊಳಿಸಿದ್ದು, ಈಗಾಗಲೇ ಸಂಕಷ್ಟದಲ್ಲಿರುವ ರೈತರ ಮೇಲೆ ಇನ್ನಷ್ಟು ಹೊರೆ ಹಾಕಿದಂತಾಗಿದೆ ಎಂದು ಅವರು ಟೀಕಿಸಿದರು.

ಪಾದಯಾತ್ರೆಯಲ್ಲಿ ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಎಂ. ನಾಗರಾಜ್, ಮಾಜಿ ಸಚಿವ ಬಿ. ಶ್ರೀರಾಮುಲು, ವಿಧಾನಸಭೆಯ ಮುಖ್ಯ ಸಚೇತಕ ದೊಡ್ಡನಗೌಡ ಎಚ್. ಪಾಟೀಲ್, ವಿಧಾನಪರಿಷತ್ ವಿಪಕ್ಷ ಮುಖ್ಯ ಸಚೇತಕ ಎನ್. ರವಿಕುಮಾರ್, ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ. ರಾಜೀವ್, ಶಾಸಕರಾದ ಡಾ. ಶಿವರಾಜ್ ಪಾಟೀಲ್, ಮಾನಪ್ಪ ವಜ್ಜಲ್, ಹರೀಶ್ ಪೂಂಜಾ, ಮಾಜಿ ಸಚಿವ ಶಿವನಗೌಡ ನಾಯಕ, ಮಾಜಿ ಶಾಸಕರಾದ ಪ್ರತಾಪಗೌಡ ಪಾಟೀಲ್, ರಾಜೇಗೌಡ ಸೇರಿದಂತೆ ಸಂಸದರು, ಶಾಸಕರು, ವಿಧಾನಪರಿಷತ್ ಸದಸ್ಯರು, ರಾಜ್ಯ ಪದಾಧಿಕಾರಿಗಳು, ಜಿಲ್ಲಾ ಅಧ್ಯಕ್ಷರು ಹಾಗೂ ಅನೇಕ ಕಾರ್ಯಕರ್ತರು ಉತ್ಸಾಹದಿಂದ ಪಾಲ್ಗೊಂಡಿದ್ದರು.

K.M.Sathish Gowda

Join WhatsApp

Join Now

Facebook

Join Now

Read more

ಕೆಪಿಎಸ್‌ಸಿ ನೇಮಕಾತಿ ವ್ಯವಸ್ಥೆ ಬಲಪಡಿಸಲು ಮಹತ್ವದ ಸುಧಾರಣೆಗೆ ಚಿಂತನೆ; ವಿದ್ಯಾರ್ಥಿಗಳ ಭವಿಷ್ಯಕ್ಕಾಗಿ ಶಿಕ್ಷಣ ವ್ಯವಸ್ಥೆಗೆ ಹೊಸ ರೂಪ: ಮಧು ಬಂಗಾರಪ್ಪ

ಮಹಿಳಾ ನೌಕರರ ಹಕ್ಕು, ಆರೋಗ್ಯ ಮತ್ತು ಸಬಲೀಕರಣಕ್ಕೆ ಸಂಘಟಿತ ಶಕ್ತಿ ಅಗತ್ಯ: ಸಿ.ಎಸ್. ಷಡಾಕ್ಷರಿ

ದಲಿತರ ಹಣ ದುರ್ಬಳಕೆ ಕುರಿತು ಸರ್ಕಾರ ಶ್ವೇತಪತ್ರ ಹೊರಡಿಸಲಿ: ವಿಜಯೇಂದ್ರ

ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ವಿರುದ್ಧ ಆಕ್ರೋಶ: ವಿವಾದಾತ್ಮಕ ಹೇಳಿಕೆಗೆ ಶ್ರೀ ರಂಭಾಪುರಿ ಜಗದ್ಗುರುಗಳಿಂದ ತೀವ್ರ ಖಂಡನೆ!

ದಲಿತ–ರೈತರಿಗೆ ನ್ಯಾಯ ಕೊಡಲಾಗದಿದ್ದರೆ ಅಧಿಕಾರ ಬಿಟ್ಟುಬಿಡಿ; ವಿಧಾನಸಭೆ ವಿಸರ್ಜಿಸಿ ಜನರ ತೀರ್ಪಿಗೆ ಬನ್ನಿ: ಡಿಕೆಶಿಗೆ ವಿಜಯೇಂದ್ರ ಸವಾಲು

ರೈತರ ಬದುಕು ಬರಡಾಗಿದೆ, ಸರ್ಕಾರದ ಕಣ್ಣು ಇನ್ನೂ ತೆರೆದಿಲ್ಲ: ಬಿ.ವೈ. ವಿಜಯೇಂದ್ರ

Leave a Comment