ಹೊಳೆನರಸೀಪುರದ ಮನೆಗೆಲಸದ ಮಹಿಳೆ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಮ್ಮೆ ಜಾಮೀನು ಕೋರಿದ್ದ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಮತ್ತೆ ನಿರಾಸೆಯಾಗಿದೆ. ಜಾಮೀನು ಕೋರಿ ಮೊದಲ ಬಾರಿಗೆ ಸಲ್ಲಿಸಿದ್ದ ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ, ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್ ವಜಾಗೊಳಿಸಿತ್ತು. ಬಳಿಕ ಇದೀಗ ಎರಡನೇ ಬಾರಿಗೂ ಸಹ ಜಾಮೀನು ಕೋರಿದ್ದ ಪ್ರಜ್ವಲ್ ಗೆ ಕೋರ್ಟ್ ಶಾಕ್ ಕೊಟ್ಟಿದೆ.
ಬೆಂಗಳೂರು, : ಮನೆಗೆಲಸದ ಮಹಿಳೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿ ವಜಾಗೊಂಡಿದೆ. ಹೊಳೆನರಸೀಪುರ ಅತ್ಯಾಚಾರ ಕೇಸ್ ನಲ್ಲಿ ಪ್ರಜ್ವಲ್ ರೇವಣ್ಣ ಜಾಮೀನು ಕೋರಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಎರಡನೇ ಬಾರಿಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ಕೋರ್ಟ್, ಇಂದು(ಜುಲೈ 25) ಜಾಮೀನು ಅರ್ಜಿಯನ್ನು ವಜಾ ಮಾಡಿ ಆದೇಶ ಹೊರಡಿಸಿದೆ. ಇದರೊಂದಿಗೆ ಜೈಲಿನಲ್ಲಿರುವ ಪ್ರಜ್ವಲ್ ರೇವಣ್ಣಗೆ ಮತ್ತೊಮ್ಮೆ ನಿರಾಸೆಯಾಗಿದೆ.
ಈ ಪ್ರಕರಣದಲ್ಲಿ ಆರೋಪಿ ಪ್ರಜ್ವಲ್ ಜಾಮೀನು ಕೋರಿ ಮೊದಲ ಬಾರಿಗೆ ಸಲ್ಲಿಸಿದ್ದ ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ, ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್ ವಜಾಗೊಳಿಸಿತ್ತು. ಬಳಿಕ ಪ್ರಜ್ವಲ್ ಜಾಮೀನು ಕೋರಿ ಕಳೆದ ಜೂನ್‌ನಲ್ಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ್ದ ಹೈಕೋರ್ಟ್, ವಿಚಾರಣಾಧೀನ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸುವಂತೆ ಸೂಚಿಸಿತ್ತು. ಅದರಂತೆ ಪ್ರಜ್ವಲ್ ಜಾಮೀನು ಕೋರಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಎರಡನೇ ಬಾರಿಗೆ ಅರ್ಜಿ ಸಲ್ಲಿಸಿದ್ದರು.
ಆರೋಪಿ ಪರ ಹಿರಿಯ ವಕೀಲ ವಿಕ್ರಂ ಹುಯಿಲಗೋಳ ವಾದ ಮಂಡಿಸಿ, ಪ್ರಜ್ವಲ್ ಬಂಧನವಾಗಿ 14 ತಿಂಗಳು ಕಳೆದಿದೆ. ಇದೇ ಪ್ರಕರಣದ ಆರೋಪಿ ಎಚ್ ಡಿ ರೇವಣ್ಣ ವಿರುದ್ಧದ ತನಿಖೆಗೆ ಹೈಕೋರ್ಟ್ ತಡೆ ನೀಡಿದೆ. ಹೀಗಾಗಿ ಪ್ರಜ್ವಲ್‌ಗೂ ಜಾಮೀನು ನೀಡುವಂತೆ ಕೋರಿದ್ದರು. ಸಿಐಡಿಯ ಎಸ್‌ಐಟಿ ತನಿಖಾಧಿಕಾರಿಗಳ ಪರ ವಿಶೇಷ ಸರ್ಕಾರಿ ಅಭಿಯೋಜಕರು, ವಾದ ಮಂಡನೆ ಮಂಡಿದ್ದರು. ಈ ವಾದ ಪ್ರತಿವಾದ ಆಲಿಸಿದ್ದ ಜನಪ್ರತಿನಿಧಿಗಳ ವಿಶೇಷ ಕೋರ್ಟ್, ಪ್ರಜ್ವಲ್ ರೇವಣ್ಣ ಅವರ ಜಾಮೀನು ಅರ್ಜಿಯನ್ನು ತಿರಸ್ಕೃತಗೊಳಿಸಿ ಆದೇಶ ಹೊರಡಿಸಿದೆ. ಇದರೊಂದಿಗೆ ಎರಡನೇ ಬಾರಿಗೆ ಜಾಮೀನು ಸಿಗುವ ನಿರೀಕ್ಷೆಯಲ್ಲಿದ್ದ ಪ್ರಜ್ವಲ್ ರೇವಣ್ಣಗೆ ನಿರಾಸೆಯಾಗಿದೆ.
ಪ್ರಜ್ವಲ್ ರೇವಣ್ಣ ವಿರುದ್ಧ ಒಟ್ಟು ನಾಲ್ಕು ಅತ್ಯಾಚಾರ ಪ್ರಕರಣಗಳು ದಾಖಲಾಗಿವೆ. ಇವುಗಳ ಪೈಕಿ, ಮನೆ ಕೆಲಸದಾಕೆಯೊಬ್ಬರು ತಮ್ಮ ಮೇಲೆ ಅತ್ಯಾಚಾರ ನಡೆದಿದೆ ಎಂದು ಆರೋಪಿಸಿ ಸಲ್ಲಿಸಿದ ದೂರಿನ ಆಧಾರದ ಮೇಲೆ ಈ ಪ್ರಕರಣವು ವಿಶೇಷ ತಿರುವು ಪಡೆದಿತ್ತು. ಹೊಳೆನರಸೀಪುರ ಠಾಣೆಯಲ್ಲಿ ಈ ಸಂಬಂಧ ದೂರು ದಾಖಲಾಗಿದ್ದು, ವಿಶೇಷ ತನಿಖಾ ತಂಡ (SIT) ಈ ಪ್ರಕರಣದ ತನಿಖೆಯನ್ನು ನಡೆಸಿತ್ತು. ಸಿಐಡಿ ಇನ್ಸ್‌ಪೆಕ್ಟರ್ ಶೋಭಾ ಅವರು ತನಿಖೆಯನ್ನು ಮುನ್ನಡೆಸಿ, ಚಾರ್ಜ್‌ಶೀಟ್ ಸಲ್ಲಿಸಿದ್ದರು. ಈ ಚಾರ್ಜ್‌ಶೀಟ್‌ನಲ್ಲಿ ಒಟ್ಟು 26 ಸಾಕ್ಷಿಗಳ ಹೇಳಿಕೆಗಳನ್ನು ದಾಖಲಿಸಲಾಗಿತ್ತು.