ಬೆಂಗಳೂರು: ವಿಧಾನಪರಿಷತ್ತಿನ ಚುನಾವಣೆಯಲ್ಲಿ ಎನ್ಡಿಎ ಅಭ್ಯರ್ಥಿಗಳು ಗೆಲುವು ಸಾಧಿಸಿರುವುದು ಕಾಂಗ್ರೆಸ್ ಸರ್ಕಾರದ ಆಡಳಿತದ ವಿರುದ್ಧ ಜನರಲ್ಲಿರುವ ಆಕ್ರೋಶಕ್ಕೆ ಸಾಕ್ಷಿಯಾಗಿದೆ. ಮತಗಳ್ಳತನದ ಕುರಿತು ಕಾಂಗ್ರೆಸ್ ಮಾಡುತ್ತಿರುವ ಆರೋಪಗಳನ್ನು ಪ್ರಜ್ಞಾವಂತ ಮತದಾರರು ಚುನಾವಣಾ ಫಲಿತಾಂಶದ ಮೂಲಕ ತಿರಸ್ಕರಿಸಿದ್ದಾರೆ ಎಂದು ಬಿಜೆಪಿ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯರಾದ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.
ನಗರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಜನರ ತೆರಿಗೆ ಹಣವನ್ನು ದುರುಪಯೋಗಪಡಿಸಿಕೊಂಡು, ಭ್ರಷ್ಟಾಚಾರದಲ್ಲಿ ತೊಡಗಿರುವ ಕಾಂಗ್ರೆಸ್ ಸರ್ಕಾರಕ್ಕೆ ಅಧಿಕಾರದಲ್ಲಿ ಮುಂದುವರಿಯುವ ನೈತಿಕ ಹಕ್ಕಿಲ್ಲ ಎಂದು ಆರೋಪಿಸಿದರು.
ವಿಧಾನಪರಿಷತ್ ಚುನಾವಣೆಯ ಫಲಿತಾಂಶವನ್ನು ಗಂಭೀರವಾಗಿ ಪರಿಗಣಿಸಿ ಮುಖ್ಯಮಂತ್ರಿ ಹಾಗೂ ಸಚಿವರು ರಾಜೀನಾಮೆ ನೀಡಬೇಕು. ಸರ್ಕಾರಕ್ಕೆ ಜನರ ಬೆಂಬಲವಿದೆ ಎಂಬ ವಿಶ್ವಾಸವಿದ್ದರೆ ಅಧಿಕಾರ ತ್ಯಜಿಸಿ ಜನರ ಮುಂದೆ ಹೋಗಿ ಜನಾದೇಶ ಪಡೆಯಲಿ ಎಂದು ಸವಾಲು ಹಾಕಿದರು.

ಮತಪತ್ರದ ಚುನಾವಣೆ ಕಾಂಗ್ರೆಸ್ಗೆ ಜನರ ಉತ್ತರ
ಈ ಚುನಾವಣೆ ಮತಪತ್ರಗಳ ಮೂಲಕ ನಡೆದಿದ್ದು, ವಿದ್ಯುನ್ಮಾನ ಮತಯಂತ್ರಗಳ (ಇವಿಎಂ) ಬಳಕೆಯಾಗಿಲ್ಲ. ಶಿಕ್ಷಕರು ಮತ್ತು ಪದವೀಧರರು ಮತದಾನ ಮಾಡಿದ ಕ್ಷೇತ್ರಗಳಲ್ಲಿ ಆಡಳಿತಾರೂಢ ಕಾಂಗ್ರೆಸ್ ವಿರುದ್ಧ ಎನ್ಡಿಎ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಇದು ಕಾಂಗ್ರೆಸ್ ಆಡಳಿತದ ಬಗ್ಗೆ ಜನರಲ್ಲಿರುವ ಅಸಮಾಧಾನವನ್ನು ಪ್ರತಿಬಿಂಬಿಸುತ್ತದೆ ಎಂದು ಯಡಿಯೂರಪ್ಪ ಹೇಳಿದರು.
ಈ ಬಾರಿ ಮತದಾನದ ಪ್ರಮಾಣ ಹೆಚ್ಚಾಗಿರುವುದು ಆಡಳಿತ ವಿರೋಧಿ ಮನೋಭಾವಕ್ಕೆ ಸಾಕ್ಷಿಯಾಗಿದೆ. ಕೆ.ಎಂ. ಸುರೇಶ್ ಅವರು 23 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಸಂಕನೂರು ಅವರು 9 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಶಶೀಲ್ ನಮೋಶಿ ಅವರು 3 ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಗೆದ್ದಿದ್ದರೆ, ಎ.ಪಿ. ರಂಗನಾಥ್ ಅವರು 908 ಮತಗಳ ಅಂತರದಿಂದ ವಿಜಯಿಯಾಗಿದ್ದಾರೆ ಎಂದು ವಿವರಿಸಿದರು.
ಈ ಫಲಿತಾಂಶವು ರಾಜ್ಯದ ಸುಶಿಕ್ಷಿತ ಮತದಾರರು ಸರ್ಕಾರದ ಆಡಳಿತವನ್ನು ಹೇಗೆ ಮೌಲ್ಯಮಾಪನ ಮಾಡಿದ್ದಾರೆ ಎಂಬುದನ್ನು ತೋರಿಸುತ್ತದೆ. ಕಾಂಗ್ರೆಸ್ ಸರ್ಕಾರದ ವಿರುದ್ಧ ಜನಾಭಿಪ್ರಾಯ ವ್ಯಕ್ತವಾಗಿರುವುದಕ್ಕೆ ಈ ಚುನಾವಣೆ ಸ್ಪಷ್ಟ ಉದಾಹರಣೆಯಾಗಿದೆ ಎಂದು ಹೇಳಿದರು.

ಜನರನ್ನು ಸಂಕಷ್ಟಕ್ಕೆ ತಳ್ಳಿದ ಸರ್ಕಾರ
ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ಕುಂಠಿತಗೊಂಡಿದ್ದು, ಕಾನೂನು ಮತ್ತು ಸುವ್ಯವಸ್ಥೆಯ ಪರಿಸ್ಥಿತಿ ಹದಗೆಟ್ಟಿದೆ. ಭ್ರಷ್ಟಾಚಾರ ಮತ್ತು ವಿವಿಧ ಹಗರಣಗಳ ಆರೋಪಗಳಿಂದ ಸರ್ಕಾರ ಸುತ್ತುವರಿದಿದೆ. ರಾಜ್ಯದ ಜನರು ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದರೂ ಅವುಗಳಿಗೆ ಪರಿಣಾಮಕಾರಿ ಪರಿಹಾರ ಕಲ್ಪಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಯಡಿಯೂರಪ್ಪ ಟೀಕಿಸಿದರು.
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಜನರ ನಿರೀಕ್ಷೆಗಳಿಗೆ ತಕ್ಕಂತೆ ಆಡಳಿತ ನೀಡುವಲ್ಲಿ ವಿಫಲವಾಗಿದೆ. ರಾಜ್ಯದ ಅಭಿವೃದ್ಧಿಗೆ ವೇಗ ನೀಡುವ ಬದಲು ರಾಜಕೀಯ ಗೊಂದಲಗಳು ಮತ್ತು ಆಡಳಿತಾತ್ಮಕ ವೈಫಲ್ಯಗಳಿಗೆ ಹೆಚ್ಚು ಆದ್ಯತೆ ನೀಡಲಾಗುತ್ತಿದೆ ಎಂದು ಆರೋಪಿಸಿದರು.

ಬೆಲೆ ಏರಿಕೆ, ರೈತರ ಆತ್ಮಹತ್ಯೆ ಕುರಿತು ಕಿಡಿ
ರಾಜ್ಯದಲ್ಲಿ ಕೆಪಿಎಸ್ಸಿ ನೇಮಕಾತಿ ಪ್ರಕ್ರಿಯೆಗೆ ಸಂಬಂಧಿಸಿದ ಭ್ರಷ್ಟಾಚಾರದ ಆರೋಪಗಳು, ಅಗತ್ಯ ವಸ್ತುಗಳ ಬೆಲೆ ಏರಿಕೆ ಹಾಗೂ ರೈತರ ಸಮಸ್ಯೆಗಳು ತೀವ್ರವಾಗಿವೆ. ಸುಮಾರು 3,500 ರೈತರು ಆತ್ಮಹತ್ಯೆ ಮಾಡಿಕೊಂಡಿರುವುದು ಆತಂಕಕಾರಿ ಬೆಳವಣಿಗೆಯಾಗಿದ್ದು, ಬರಗಾಲದ ನಿರ್ವಹಣೆಯಲ್ಲಿಯೂ ಸರ್ಕಾರ ಸಮರ್ಪಕವಾಗಿ ಕಾರ್ಯನಿರ್ವಹಿಸಿಲ್ಲ ಎಂದು ದೂರಿದರು.
ವೃದ್ಧಾಪ್ಯ ವೇತನ ಮತ್ತು ಅಂಗವಿಕಲರ ಮಾಸಾಶನ ಪಾವತಿಯಲ್ಲಿ ವಿಳಂಬವಾಗಿರುವುದರಿಂದ ಅರ್ಹ ಫಲಾನುಭವಿಗಳು ಸಂಕಷ್ಟ ಎದುರಿಸುತ್ತಿದ್ದಾರೆ ಎಂದು ಆರೋಪಿಸಿದ ಅವರು, ಸರ್ಕಾರ ಬಡವರು ಮತ್ತು ರೈತರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಬೇಕು ಎಂದು ಒತ್ತಾಯಿಸಿದರು.
ಕಬ್ಬು ಬೆಳೆಗಾರರಿಗೆ ಹಣ ಪಾವತಿಸುವ ವಿಚಾರದಲ್ಲಿ ಮುಖ್ಯಮಂತ್ರಿಗಳು ಹಣದ ಕೊರತೆಯ ಬಗ್ಗೆ ಹೇಳಿಕೆ ನೀಡಿದ್ದಾರೆ. ಹಾಗಾದರೆ ರಾಜ್ಯದ ಜನರು ಪಾವತಿಸಿರುವ ತೆರಿಗೆ ಹಣ ಎಲ್ಲಿ ಬಳಕೆಯಾಗಿದೆ? ಸರ್ಕಾರದ ಹಣಕಾಸು ನಿರ್ವಹಣೆಯಲ್ಲಿ ಪಾರದರ್ಶಕತೆ ಇರಬೇಕಲ್ಲವೇ? ಎಂದು ಯಡಿಯೂರಪ್ಪ ಪ್ರಶ್ನಿಸಿದರು.

ಭ್ರಷ್ಟಾಚಾರ, ಸ್ವಜನಪಕ್ಷಪಾತದಲ್ಲೇ ಸರ್ಕಾರ ನಿರತ: ಗೋವಿಂದ ಕಾರಜೋಳ
ಸಂಸದ ಗೋವಿಂದ ಕಾರಜೋಳ ಮಾತನಾಡಿ, ವಿಧಾನಪರಿಷತ್ ಚುನಾವಣೆಯ ಫಲಿತಾಂಶವು ಕಾಂಗ್ರೆಸ್ ಸರ್ಕಾರದ ಆಡಳಿತದ ವಿರುದ್ಧ ಜನರು ವ್ಯಕ್ತಪಡಿಸಿರುವ ಅಸಮಾಧಾನವನ್ನು ತೋರಿಸುತ್ತದೆ ಎಂದು ಹೇಳಿದರು.
ರಾಜ್ಯದಲ್ಲಿ ಭ್ರಷ್ಟಾಚಾರ, ಸ್ವಜನಪಕ್ಷಪಾತ ಮತ್ತು ಸ್ಟಿಂಗ್ ಆಪರೇಷನ್ಗಳ ವಿಚಾರಗಳಲ್ಲೇ ಸರ್ಕಾರ ಕಾಲಹರಣ ಮಾಡುತ್ತಿದೆ. ಜನರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವ ಬದಲು ಅಧಿಕಾರದ ಕುರ್ಚಿಗಾಗಿ ಕಿತ್ತಾಟ ನಡೆಸಲಾಗುತ್ತಿದೆ ಎಂದು ಟೀಕಿಸಿದರು.
ರಾಜ್ಯದ ಸುಶಿಕ್ಷಿತ ಮತದಾರರು ಕಾಂಗ್ರೆಸ್ನ ದುರಾಡಳಿತ ಮತ್ತು ಅಭಿವೃದ್ಧಿಯ ಕೊರತೆಯನ್ನು ತಿರಸ್ಕರಿಸಿದ್ದಾರೆ. ಚುನಾವಣೆಯ ಮೂಲಕ ಜನರು ತಮ್ಮ ಅಭಿಪ್ರಾಯವನ್ನು ಸ್ಪಷ್ಟವಾಗಿ ವ್ಯಕ್ತಪಡಿಸಿದ್ದಾರೆ. ಸರ್ಕಾರಕ್ಕೆ ನೈತಿಕ ಹೊಣೆಗಾರಿಕೆಯ ಅರಿವಿದ್ದರೆ ರಾಜೀನಾಮೆ ನೀಡಿ ಜನರ ಮುಂದೆ ಹೋಗಬೇಕು ಎಂದು ಆಗ್ರಹಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಆರ್. ಅಶೋಕ್, ಚಲವಾದಿ ನಾರಾಯಣಸ್ವಾಮಿ, ರಾಜ್ಯಸಭಾ ಸದಸ್ಯ ಲೇಹರ್ ಸಿಂಗ್ ಸಿರೋಯಾ, ಮಾಜಿ ಸಚಿವ ಹಾಗೂ ಶಾಸಕ ಕೆ. ಗೋಪಾಲಯ್ಯ, ಸುನೀಲ್ ಕುಮಾರ್, ವಿಧಾನಪರಿಷತ್ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಅಭ್ಯರ್ಥಿಗಳಾದ ಕೆ.ಎಂ. ಸುರೇಶ್ ಮತ್ತು ಎ.ಪಿ. ರಂಗನಾಥ್, ವಿಧಾನಪರಿಷತ್ ಮಾಜಿ ಸದಸ್ಯ ಡಾ. ಶಿವಯೋಗಿಸ್ವಾಮಿ, ಬಿಜೆಪಿ ರಾಜ್ಯ ಕಾರ್ಯದರ್ಶಿ ಅಂಬಿಕಾ ಹುಲಿನಾಯ್ಕರ್, ಪ್ರಕೋಷ್ಠಗಳ ರಾಜ್ಯ ಸಂಯೋಜಕ ಎಸ್. ದತ್ತಾತ್ರಿ, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್. ಹರೀಶ್ ಹಾಗೂ ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷ ಸಪ್ತಗಿರಿ ಗೌಡ ಉಪಸ್ಥಿತರಿದ್ದರು.







