ಬೆಂಗಳೂರು, ನ. 16: ಶಾಲೆಗಳು ಮಕ್ಕಳಿಗೆ ಶಿಕ್ಷಣ, ಸಂಸ್ಕಾರ, ಸಂವಿಧಾನದ ಮೌಲ್ಯಗಳು ಹಾಗೂ ಉತ್ತಮ ಬದುಕಿನ ಮಾರ್ಗದರ್ಶನ ನೀಡುವ ಪವಿತ್ರ ಕೇಂದ್ರಗಳಾಗಿವೆ. ಇಂತಹ ಶಿಕ್ಷಣ ಸಂಸ್ಥೆಗಳ ವೇದಿಕೆಯನ್ನು ರಾಜಕೀಯ ಪ್ರಚಾರಕ್ಕೆ ಬಳಸಿಕೊಳ್ಳುವುದು ಮಾತ್ರವಲ್ಲದೆ, ವಿದ್ಯಾರ್ಥಿಗಳ ಮುಂದೆ ದ್ವೇಷಪೂರಿತ ಹಾಗೂ ಅಸಂವಿಧಾನಿಕ ಹೇಳಿಕೆಗಳನ್ನು ನೀಡುವುದು ಅತ್ಯಂತ ಖಂಡನೀಯ. ಜನಪ್ರತಿನಿಧಿಗಳಾಗಿ ಸಾರ್ವಜನಿಕ ವೇದಿಕೆಗಳಲ್ಲಿ ಮಾತನಾಡುವಾಗ ಕನಿಷ್ಠ ಜವಾಬ್ದಾರಿ ಮತ್ತು ಸಂಯಮ ಇರಬೇಕು. ಆದರೆ, ಮಕ್ಕಳ ಮನಸ್ಸಿನಲ್ಲಿ ವಿಷಬೀಜ ಬಿತ್ತುವ ರೀತಿಯಲ್ಲಿ ಬಿಜೆಪಿ ನಾಯಕರು ವರ್ತಿಸುತ್ತಿದ್ದಾರೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರು ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಬೆಳ್ತಂಗಡಿ ಕ್ಷೇತ್ರದ ಬಿಜೆಪಿ ಶಾಸಕ ಹರೀಶ್ ಪೂಂಜಾ ಅವರು ಬೆಳ್ತಂಗಡಿ ತಾಲ್ಲೂಕಿನ ಪುಂಜಾಲಕಟ್ಟೆಯ ಕರ್ನಾಟಕ ಪಬ್ಲಿಕ್ ಶಾಲೆಯ (ಕೆಪಿಎಸ್) ನೂತನ ಸಭಾಭವನ ಉದ್ಘಾಟನಾ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಪಕ್ಷದ ವಿರುದ್ಧ ಅವಾಚ್ಯ ಪದಗಳನ್ನು ಬಳಸಿ, ದ್ವೇಷಪೂರಿತ ಭಾಷಣ ಮಾಡಿರುವುದು ವಿವಾದಕ್ಕೆ ಕಾರಣವಾಗಿದೆ. ಶಾಲಾ ಮಕ್ಕಳ ಸಮ್ಮುಖದಲ್ಲಿ ಇಂತಹ ರಾಜಕೀಯ ಹೇಳಿಕೆಗಳನ್ನು ನೀಡಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಸಚಿವರು, ಶಾಸಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರನ್ನು ಅವರ ಗೃಹ ಕಚೇರಿಯಲ್ಲಿ ಭೇಟಿಯಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮಧು ಬಂಗಾರಪ್ಪ, ಶಾಲಾ ಆವರಣದಲ್ಲಿ ರಾಜಕೀಯ ಭಾಷಣ ಮಾಡುವುದನ್ನು ಯಾವುದೇ ಕಾರಣಕ್ಕೂ ಒಪ್ಪಲು ಸಾಧ್ಯವಿಲ್ಲ. ಈ ಪ್ರಕರಣವನ್ನು ಇಲಾಖೆ ಗಂಭೀರವಾಗಿ ಪರಿಗಣಿಸಿದ್ದು, ಅಧಿಕಾರಿಗಳಿಂದ ಸಮಗ್ರ ವರದಿ ಪಡೆದು ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.
ಶಾಲಾ ಮಕ್ಕಳ ಮುಂದೆ ರಾಜಕೀಯ ವಿಚಾರಗಳನ್ನು ಪ್ರಸ್ತಾಪಿಸುವುದರ ಹಿಂದಿನ ಉದ್ದೇಶವೇನು? ಜನಪ್ರತಿನಿಧಿಗಳಿಗೆ ತಾವು ಎಲ್ಲಿ, ಏನು ಮಾತನಾಡಬೇಕು ಎಂಬ ಸಾಮಾನ್ಯ ತಿಳುವಳಿಕೆ ಇರಬೇಕಲ್ಲವೇ? ರಾಜಕೀಯ ಚಟುವಟಿಕೆಗಳಿಗೆ ಪ್ರತ್ಯೇಕ ವೇದಿಕೆಗಳಿವೆ. ಅಲ್ಲಿ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಬಹುದು. ಆದರೆ, ಮಕ್ಕಳ ಭವಿಷ್ಯ ರೂಪುಗೊಳ್ಳುವ ಶಿಕ್ಷಣ ಸಂಸ್ಥೆಗಳಲ್ಲಿ ಇಂತಹ ಭಾಷಣಗಳಿಗೆ ಅವಕಾಶ ನೀಡುವುದು ಸರಿಯಲ್ಲ. ವ್ಯಕ್ತಿಯ ಮನಸ್ಸಿನಲ್ಲಿರುವ ವಿಚಾರಗಳೇ ಮಾತುಗಳ ಮೂಲಕ ಹೊರಬರುತ್ತವೆ. ಈ ಪ್ರಕರಣವನ್ನು ನಾವು ನಿರ್ಲಕ್ಷಿಸುವುದಿಲ್ಲ ಎಂದು ಎಚ್ಚರಿಸಿದ್ದಾರೆ.
ಶಾಸಕ ಹರೀಶ್ ಪೂಂಜಾ ಅವರು ಕಾರ್ಯಕ್ರಮದಲ್ಲಿ ಏನು ಮಾತನಾಡಿದ್ದಾರೆ ಎಂಬುದರ ಕುರಿತು ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ವರದಿಯನ್ನು ಪರಿಶೀಲಿಸಿದ ಬಳಿಕ ಕಾನೂನಿನ ಚೌಕಟ್ಟಿನಲ್ಲಿ ಸೂಕ್ತ ಕ್ರಮ ಜರುಗಿಸಲಾಗುವುದು. ಸಾರ್ವಜನಿಕರು ಈ ಕುರಿತು ದೂರು ನೀಡಿದರೆ ಅದನ್ನೂ ಸ್ವಾಗತಿಸುತ್ತೇವೆ. ಆದರೆ, ಯಾರಾದರೂ ದೂರು ಸಲ್ಲಿಸುವವರೆಗೆ ಇಲಾಖೆ ಕಾಯುವುದಿಲ್ಲ. ಇಲಾಖೆಯೇ ಸ್ವಯಂಪ್ರೇರಿತವಾಗಿ ಪ್ರಕರಣವನ್ನು ಪರಿಶೀಲಿಸಿ ಕ್ರಮ ಕೈಗೊಳ್ಳಲಿದೆ ಎಂದು ಸಚಿವರು ತಿಳಿಸಿದ್ದಾರೆ.
ಶಾಲೆಗಳು ರಾಜಕೀಯ ವೇದಿಕೆಗಳಲ್ಲ; ಶಿಕ್ಷಣದ ಪಾವಿತ್ರ್ಯ ಕಾಪಾಡಬೇಕು
ಶಾಲೆಗಳು ದೇವಸ್ಥಾನಗಳಿದ್ದಂತೆ. ಅಲ್ಲಿ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಮಾನವೀಯ ಮೌಲ್ಯಗಳು, ಸಂವಿಧಾನದ ಆಶಯಗಳು, ಸಮಾನತೆ, ಸಹಬಾಳ್ವೆ ಮತ್ತು ಪರಸ್ಪರ ಗೌರವದ ಪಾಠ ಕಲಿಸಲಾಗುತ್ತದೆ. ಅಂತಹ ಪವಿತ್ರ ಸ್ಥಳದಲ್ಲಿ ರಾಜಕೀಯ ದ್ವೇಷದ ಮಾತುಗಳಿಗೆ ಅವಕಾಶ ನೀಡುವುದು ಶಿಕ್ಷಣ ವ್ಯವಸ್ಥೆಯ ಆಶಯಕ್ಕೆ ವಿರುದ್ಧವಾಗಿದೆ ಎಂದು ಮಧು ಬಂಗಾರಪ್ಪ ಹೇಳಿದ್ದಾರೆ.
ರಾಜಕೀಯ ಉದ್ದೇಶಗಳಿಗಾಗಿ ಈಗಾಗಲೇ ಧಾರ್ಮಿಕ ಸ್ಥಳಗಳನ್ನು ಬಳಸಿಕೊಂಡಿರುವವರು ಇದೀಗ ಶಾಲೆಗಳನ್ನೂ ತಮ್ಮ ರಾಜಕೀಯ ಚಟುವಟಿಕೆಗಳಿಗೆ ಬಳಸಿಕೊಳ್ಳಲು ಮುಂದಾಗುತ್ತಿರುವುದು ಆತಂಕಕಾರಿ ಬೆಳವಣಿಗೆ. ಇಂತಹ ಬೆಳವಣಿಗೆಗಳನ್ನು ಜನರು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ. ಶಿಕ್ಷಣ ಸಚಿವನಾಗಿ ಶಾಲಾ ಆವರಣದಲ್ಲಿ ನಡೆದಿರುವ ಈ ವರ್ತನೆಯನ್ನು ತೀವ್ರವಾಗಿ ಖಂಡಿಸುತ್ತೇನೆ. ಸಂಬಂಧಪಟ್ಟವರು ಕ್ಷಮೆ ಕೇಳುತ್ತಾರೆಯೇ ಇಲ್ಲವೇ ಎಂಬುದು ಇಲ್ಲಿ ಮುಖ್ಯವಲ್ಲ. ಕಾನೂನು ಪ್ರಕಾರ ಯಾವ ಕ್ರಮ ಕೈಗೊಳ್ಳಬೇಕೋ ಅದನ್ನು ಖಂಡಿತವಾಗಿ ಕೈಗೊಳ್ಳುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

ಶಿವಮೊಗ್ಗ ವಿಮಾನ ನಿಲ್ದಾಣ ಖಾಸಗೀಕರಣಕ್ಕೆ ಅವಕಾಶ ನೀಡುವುದಿಲ್ಲ
ಶಿವಮೊಗ್ಗ ವಿಮಾನ ನಿಲ್ದಾಣವನ್ನು ರಾಜ್ಯ ಸರ್ಕಾರ ನಿರ್ಲಕ್ಷಿಸುತ್ತಿದೆ ಹಾಗೂ ಅದರ ಕಾರ್ಯಾಚರಣೆಗೆ ಅಗತ್ಯ ಸಹಕಾರ ನೀಡುತ್ತಿಲ್ಲ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ಆರೋಪಕ್ಕೆ ಪ್ರತಿಕ್ರಿಯಿಸಿದ ಸಚಿವರು, ವಿಮಾನ ನಿಲ್ದಾಣದ ಅಭಿವೃದ್ಧಿಗೆ ರಾಜ್ಯ ಸರ್ಕಾರ ತನ್ನಿಂದ ಸಾಧ್ಯವಾದ ಎಲ್ಲ ಸಹಕಾರವನ್ನೂ ನೀಡುತ್ತಿದೆ ಎಂದು ಸ್ಪಷ್ಟಪಡಿಸಿದರು.
ಶಿವಮೊಗ್ಗ ವಿಮಾನ ನಿಲ್ದಾಣದ ಅಭಿವೃದ್ಧಿ ಮತ್ತು ವಿಮಾನಯಾನ ಸೇವೆಗಳ ನಿರಂತರತೆಗೆ ರಾಜ್ಯ ಸರ್ಕಾರ ಬದ್ಧವಾಗಿದೆ. ಉಡಾನ್ ಯೋಜನೆ ಕೇಂದ್ರ ಸರ್ಕಾರದ ವ್ಯಾಪ್ತಿಗೆ ಬರುವುದರಿಂದ ಈ ಸಂಬಂಧ ಕೇಂದ್ರ ಸರ್ಕಾರದೊಂದಿಗೆ ಚರ್ಚೆ ನಡೆಸಬೇಕಿದೆ. ವಿಮಾನಯಾನ ಸೇವೆಗಳು ಸುಗಮವಾಗಿ ಮುಂದುವರಿಯಲು ಅಗತ್ಯವಿರುವ ಪ್ರಯತ್ನಗಳನ್ನು ರಾಜ್ಯ ಸರ್ಕಾರ ಮಾಡುತ್ತಿದೆ ಎಂದು ತಿಳಿಸಿದರು.
ಸುಮಾರು 200 ಕೋಟಿ ರೂ. ವೆಚ್ಚದ ಯೋಜನೆಯಾಗಿ ಆರಂಭವಾದ ಶಿವಮೊಗ್ಗ ವಿಮಾನ ನಿಲ್ದಾಣದ ಕಾಮಗಾರಿಗೆ ಅಂತಿಮವಾಗಿ ಸುಮಾರು 600 ಕೋಟಿ ರೂ.ವರೆಗೆ ವೆಚ್ಚವಾಗಿದೆ. ರಾಜ್ಯ ಸರ್ಕಾರದ ಹಣ ಮತ್ತು ಶ್ರಮದಿಂದ ನಿರ್ಮಾಣಗೊಂಡಿರುವ ಇಂತಹ ಮಹತ್ವದ ಮೂಲಸೌಕರ್ಯವನ್ನು ಮುಂದಿನ ದಿನಗಳಲ್ಲಿ ಖಾಸಗಿ ಉದ್ಯಮಿಗಳ ಪಾಲಾಗಿಸುವ ಉದ್ದೇಶ ಬಿಜೆಪಿಯದ್ದಾಗಿದೆ ಎಂದು ಆರೋಪಿಸಿದರು.
ಈ ವಿಚಾರವಾಗಿ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಅವರೊಂದಿಗೂ ಚರ್ಚೆ ನಡೆಸಿದ್ದೇನೆ. ಯಾವುದೇ ಕಾರಣಕ್ಕೂ ಶಿವಮೊಗ್ಗ ವಿಮಾನ ನಿಲ್ದಾಣವನ್ನು ಖಾಸಗೀಕರಣಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ. ಈ ಸಂಬಂಧ ಕೇಂದ್ರ ಸರ್ಕಾರಕ್ಕೂ ಪತ್ರ ಬರೆಯಲಾಗುವುದು. ರಾಜ್ಯದ ಜನರ ತೆರಿಗೆ ಹಣದಿಂದ ನಿರ್ಮಾಣಗೊಂಡಿರುವ ವಿಮಾನ ನಿಲ್ದಾಣದ ಅಭಿವೃದ್ಧಿ ಮತ್ತು ಸಾರ್ವಜನಿಕ ಹಿತಾಸಕ್ತಿ ಕಾಪಾಡುವುದು ಸರ್ಕಾರದ ಜವಾಬ್ದಾರಿಯಾಗಿದೆ ಎಂದು ಹೇಳಿದರು.
ಚುನಾವಣೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಶಿವಮೊಗ್ಗ ವಿಮಾನ ನಿಲ್ದಾಣವನ್ನು ಉದ್ಘಾಟಿಸಿ ರಾಜಕೀಯ ಪ್ರಚಾರ ಪಡೆದುಕೊಂಡರು. ಆದರೆ, ಉದ್ಘಾಟನೆಯ ನಂತರದ ಆರಂಭಿಕ ಹಲವು ತಿಂಗಳು ವಿಮಾನ ಹಾರಾಟವೇ ಇರಲಿಲ್ಲ. ವಿಮಾನ ಸಂಚಾರ ಆರಂಭವಾಗಲು ರಾಜ್ಯ ಸರ್ಕಾರವೇ ಅಗತ್ಯ ಪ್ರಯತ್ನಗಳನ್ನು ಮಾಡಬೇಕಾಯಿತು. ಹೀಗಿರುವಾಗ ವಿಮಾನ ನಿಲ್ದಾಣದ ಅಭಿವೃದ್ಧಿಯ ವಿಚಾರದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಆರೋಪ ಮಾಡುವುದು ಸರಿಯಲ್ಲ ಎಂದು ಬಿಜೆಪಿ ನಾಯಕರ ಹೇಳಿಕೆಗೆ ತಿರುಗೇಟು ನೀಡಿದರು.
ಐಟಿ, ಇ.ಡಿ. ಬಳಕೆ ಮೂಲಕ ದ್ವೇಷದ ರಾಜಕಾರಣ: ಬಿಜೆಪಿ ವಿರುದ್ಧ ವಾಗ್ದಾಳಿ
ಕಾಂಗ್ರೆಸ್ ನಾಯಕರ ಫೋನ್ ಕದ್ದಾಲಿಕೆ ಆರೋಪಕ್ಕೆ ಸಂಬಂಧಿಸಿದಂತೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಮಧು ಬಂಗಾರಪ್ಪ, ಬಿಜೆಪಿ ಆಡಳಿತದ ಅವಧಿಯಲ್ಲಿ ಆದಾಯ ತೆರಿಗೆ ಇಲಾಖೆ (ಐಟಿ) ಮತ್ತು ಜಾರಿ ನಿರ್ದೇಶನಾಲಯ (ಇ.ಡಿ.) ಸಂಸ್ಥೆಗಳನ್ನು ಬಳಸಿಕೊಂಡು ಎಷ್ಟು ಕಾಂಗ್ರೆಸ್ ನಾಯಕರ ವಿರುದ್ಧ ದಾಳಿ ನಡೆಸಲಾಗಿದೆ ಎಂಬುದನ್ನು ಮೊದಲು ಪ್ರಶ್ನಿಸಬೇಕು. ಅದೇ ರೀತಿ ಬಿಜೆಪಿ ನಾಯಕರ ವಿರುದ್ಧ ಎಷ್ಟು ಕ್ರಮ ಕೈಗೊಳ್ಳಲಾಗಿದೆ ಎಂಬುದನ್ನೂ ಪರಿಶೀಲಿಸಬೇಕಿದೆ ಎಂದರು.
ಪ್ರಜಾಪ್ರಭುತ್ವ ವ್ಯವಸ್ಥೆಯ ಆಶಯಗಳಿಗೆ ಧಕ್ಕೆ ತರುವ ರೀತಿಯಲ್ಲಿ ಬಿಜೆಪಿ ರಾಜಕಾರಣ ಮಾಡುತ್ತಿದೆ. ವಿರೋಧ ಪಕ್ಷದ ನಾಯಕರನ್ನು ಗುರಿಯಾಗಿಸಿಕೊಂಡು ತನಿಖಾ ಸಂಸ್ಥೆಗಳನ್ನು ಬಳಸಿಕೊಳ್ಳಲಾಗುತ್ತಿದೆ ಎಂಬ ಆರೋಪವನ್ನು ಅವರು ಮಾಡಿದರು.
ಶಾಲಾ ಮಕ್ಕಳ ಮುಂದೆ ಶಾಸಕ ಹರೀಶ್ ಪೂಂಜಾ ಅವರು ರಾಜಕೀಯ ದ್ವೇಷದ ಮಾತುಗಳನ್ನಾಡುವ ಅಗತ್ಯವೇನಿತ್ತು? ಮಕ್ಕಳ ಮನಸ್ಸಿನಲ್ಲಿಯೂ ದ್ವೇಷದ ಭಾವನೆಗಳನ್ನು ಬಿತ್ತುವ ಪ್ರಯತ್ನ ಏಕೆ? ಕಾಂಗ್ರೆಸ್ ಅಧಿಕಾರಕ್ಕೆ ಬರುವ ಮುನ್ನವೇ ಬಿಜೆಪಿ ಸರ್ಕಾರದ ಅವಧಿಯಲ್ಲಿ ಪಠ್ಯಪುಸ್ತಕಗಳಲ್ಲಿ ಸೇರ್ಪಡೆಯಾಗಿದ್ದ ದ್ವೇಷಪೂರಿತ ಅಂಶಗಳನ್ನು ತೆಗೆದುಹಾಕಿ, ಸಂವಿಧಾನದ ಆಶಯಗಳಿಗೆ ಅನುಗುಣವಾಗಿ ಪಠ್ಯಕ್ರಮ ರೂಪಿಸುವುದಾಗಿ ಭರವಸೆ ನೀಡಿತ್ತು. ಅದರಂತೆ ಶಿಕ್ಷಣ ಸಚಿವನಾಗಿ ಪಠ್ಯಪುಸ್ತಕ ಪರಿಷ್ಕರಣೆ ಮೂಲಕ ಮಕ್ಕಳಿಗೆ ಸಂವಿಧಾನಬದ್ಧ ಮೌಲ್ಯಗಳನ್ನು ಪರಿಚಯಿಸುವ ಕೆಲಸ ಮಾಡಿದ್ದೇವೆ ಎಂದು ತಿಳಿಸಿದರು.
ಬಿಜೆಪಿ ನಾಯಕರು ನಿರಂತರವಾಗಿ ಕಾಂಗ್ರೆಸ್ ವಿರುದ್ಧ ಆರೋಪ ಮತ್ತು ಹೇಳಿಕೆಗಳನ್ನು ನೀಡುತ್ತಿರುವುದರ ಕುರಿತು ಪ್ರತಿಕ್ರಿಯಿಸಿದ ಅವರು, ಬಿಜೆಪಿಗೆ ಸಮರ್ಥ ನಾಯಕತ್ವದ ಕೊರತೆಯಿದೆ. ಸಮಾಜದಲ್ಲಿ ಸಕಾರಾತ್ಮಕ ವಿಚಾರಗಳನ್ನು ಬೆಳೆಸುವ ಬದಲು ಕೆಟ್ಟ ವಿಚಾರಗಳು ಮತ್ತು ದ್ವೇಷದ ಭಾವನೆಗಳನ್ನು ಹರಡುವುದೇ ಅವರ ರಾಜಕೀಯದ ಭಾಗವಾಗಿದೆ ಎಂದು ಟೀಕಿಸಿದರು.
ಹಿರಿಯೂರು ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿನ ವಿಶ್ವಾಸ
ಹಿರಿಯೂರು ಉಪಚುನಾವಣೆಯ ಫಲಿತಾಂಶದ ಕುರಿತು ಮಾತನಾಡಿದ ಸಚಿವ ಮಧು ಬಂಗಾರಪ್ಪ, ಚುನಾವಣೆಯಲ್ಲಿ ಗೆಲುವು ಸಾಧಿಸಲು ಬಿಜೆಪಿ ಯಾವುದೇ ತಂತ್ರ, ಕುತಂತ್ರ ಅಥವಾ ರಾಜಕೀಯ ಹುನ್ನಾರಗಳನ್ನು ರೂಪಿಸಿದರೂ ಅಂತಿಮವಾಗಿ ಜನರ ಬೆಂಬಲ ಕಾಂಗ್ರೆಸ್ ಪಕ್ಷಕ್ಕೆ ದೊರೆಯಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ಜನರ ಆಶೀರ್ವಾದ ಮತ್ತು ಕಾಂಗ್ರೆಸ್ ಸರ್ಕಾರದ ಅಭಿವೃದ್ಧಿ ಕಾರ್ಯಗಳು ಪಕ್ಷದ ಗೆಲುವಿಗೆ ನೆರವಾಗಲಿವೆ. ಬಿಜೆಪಿ ಎಷ್ಟೇ ಪ್ರಯತ್ನ ನಡೆಸಿದರೂ ಹಿರಿಯೂರು ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವೇ ಜಯಭೇರಿ ಬಾರಿಸಲಿದೆ ಎಂದು ವಿಶ್ವಾಸದಿಂದ ಹೇಳಿದರು.






