ತಾಜಾ ಸುದ್ದಿ ರಾಜಕೀಯ ಕ್ರೈಂ ನ್ಯೂಸ್ ರಾಜ್ಯ-ಜಿಲ್ಲೆ ದೇಶ-ವಿದೇಶ ಸೋಷಿಯಲ್ ಮೀಡಿಯಾ ಮನರಂಜನೆ ಕಾನೂನು ಜೀವನಶೈಲಿ ಕ್ರೀಡೆ ಗುರುಪರಂಪರೆ ವಿಡೀಯೋ English News

ಮಕ್ಕಳಲ್ಲಿ ನಾಯಕತ್ವ ಗುಣ ಬೆಳೆಸುವ ಹೊಣೆ ಶಿಕ್ಷಕರ ಮೇಲಿದೆ: ಸಿಎಂ ಡಿ.ಕೆ. ಶಿವಕುಮಾರ್

On: November 19, 2026 7:03 PM
Follow Us:

ಬೆಂಗಳೂರು, ನ.19: ಪ್ರತಿಯೊಂದು ಮಗುವಿನಲ್ಲಿಯೂ ನಾಯಕತ್ವದ ಗುಣ ಅಡಗಿರುತ್ತದೆ. ಆ ಪ್ರತಿಭೆಯನ್ನು ಗುರುತಿಸಿ, ಪ್ರೋತ್ಸಾಹಿಸಿ ಉನ್ನತ ಮಟ್ಟಕ್ಕೆ ಬೆಳೆಸುವ ಶಕ್ತಿ ಶಿಕ್ಷಕರಿಗಿದೆ. ಶಾಸಕರು, ಸಚಿವರ ಮಕ್ಕಳಷ್ಟೇ ನಾಯಕರಾಗಬೇಕೆಂದಿಲ್ಲ; ಸಾಮಾನ್ಯ ಕುಟುಂಬಗಳ ಮಕ್ಕಳಿಗೂ ನಾಯಕತ್ವದ ಅವಕಾಶ ದೊರೆಯಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹೇಳಿದರು.

ನಗರದ ಜ್ಞಾನಜ್ಯೋತಿ ಸಭಾಂಗಣದಲ್ಲಿ ಗುರುವಾರ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಿಗೆ ನೂತನವಾಗಿ ಆಯ್ಕೆಯಾದ ಪ್ರಾಂಶುಪಾಲರಿಗೆ ನೇಮಕಾತಿ ಆದೇಶ ವಿತರಿಸುವ ಸಲುವಾಗಿ ಆಯೋಜಿಸಿದ್ದ ‘ಶೈಕ್ಷಣಿಕ ಸಾರಥ್ಯ’ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ನೂತನ ಪ್ರಾಂಶುಪಾಲರ ಮೇಲೆ ವಿದ್ಯಾರ್ಥಿ ಸಮೂಹ ಹಾಗೂ ಸಮಾಜ ಅಪಾರ ವಿಶ್ವಾಸವನ್ನಿಟ್ಟಿದೆ. ಪ್ರತಿಭೆಗಳಿಗೆ ಸೂಕ್ತ ಅವಕಾಶ ಮತ್ತು ಪ್ರೋತ್ಸಾಹ ನೀಡುವುದು ನಮ್ಮ ಕರ್ತವ್ಯ. ಮೈಸೂರು ಮುಕ್ತ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದಾಗ ಸಚಿವನಾಗಿ, ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿದ್ದಕ್ಕಿಂತಲೂ ಹೆಚ್ಚಿನ ಸಂತೋಷವಾಗಿತ್ತು. ಶಿಕ್ಷಣ ವ್ಯಕ್ತಿಯಲ್ಲಿ ಆತ್ಮವಿಶ್ವಾಸವನ್ನು ಬೆಳೆಸುತ್ತದೆ ಎಂದು ತಮ್ಮ ಅನುಭವ ಹಂಚಿಕೊಂಡರು.

ಒಂದು ಪುಸ್ತಕ, ಒಂದು ಲೇಖನಿ ಮತ್ತು ಒಬ್ಬ ಶಿಕ್ಷಕ ಇಡೀ ದೇಶದ ಭವಿಷ್ಯವನ್ನೇ ಬದಲಾಯಿಸುವ ಸಾಮರ್ಥ್ಯ ಹೊಂದಿದ್ದಾರೆ. ದೇಶದ ಮುಂದಿನ ಪೀಳಿಗೆಯನ್ನು ರೂಪಿಸುವ ಮಹತ್ವದ ಜವಾಬ್ದಾರಿ ಶಿಕ್ಷಕರ ಮೇಲಿದೆ. ಕೇವಲ ವೈಯಕ್ತಿಕ ಸಾಧನೆಗಾಗಿ ಶಿಕ್ಷಣ ನೀಡದೆ, ಉತ್ತಮ ಸಮಾಜ ನಿರ್ಮಾಣದ ಉದ್ದೇಶದಿಂದ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಬೇಕು. ನಿಮ್ಮ ಕಾರ್ಯಕ್ಷಮತೆಯ ಮೇಲೆ ಸರ್ಕಾರ ವಿಶ್ವಾಸವಿಟ್ಟಿದೆ ಎಂದು ಹೇಳಿದರು.

ಸೈನಿಕ, ಕೃಷಿಕ, ಕಾರ್ಮಿಕ ಮತ್ತು ಶಿಕ್ಷಕರು ಸಮಾಜದ ಪ್ರಮುಖ ನಾಲ್ಕು ಸ್ತಂಭಗಳಿದ್ದಂತೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ ಮತ್ತು ಪತ್ರಿಕಾರಂಗ ಪ್ರಮುಖ ಪಾತ್ರ ವಹಿಸುತ್ತವೆ. ನಮ್ಮ ಸರ್ಕಾರ ಶಿಕ್ಷಣ ಕ್ಷೇತ್ರದಲ್ಲಿ ಮಹತ್ವದ ನಿರ್ಧಾರಗಳನ್ನು ಕೈಗೊಂಡಿದ್ದು, 222 ಮಂದಿಗೆ ಪ್ರಾಂಶುಪಾಲರಾಗಿ ಕಾರ್ಯನಿರ್ವಹಿಸುವ ಅವಕಾಶ ಕಲ್ಪಿಸಿದೆ ಎಂದರು.

ಕಾಲೇಜುಗಳ ಆಡಳಿತದ ಸಂಪೂರ್ಣ ಜವಾಬ್ದಾರಿಯನ್ನು ಪ್ರಾಂಶುಪಾಲರು ಸಮರ್ಥವಾಗಿ ನಿಭಾಯಿಸಬೇಕು. ವಿದ್ಯಾರ್ಥಿಗಳ ಚಂಚಲ ಮನಸ್ಸಿನ ಮೇಲೆ ಯಾವುದೇ ದುಷ್ಪರಿಣಾಮ ಬೀರದಂತೆ ಎಚ್ಚರಿಕೆ ವಹಿಸಬೇಕು. ಕಾಲೇಜುಗಳ ಶೈಕ್ಷಣಿಕ ಗುಣಮಟ್ಟವನ್ನು ಹೆಚ್ಚಿಸುವುದರ ಜತೆಗೆ ಸ್ಪರ್ಧಾತ್ಮಕವಾಗಿ ಅಭಿವೃದ್ಧಿಪಡಿಸಲು ಮುಂದಾಗಬೇಕು ಎಂದು ಸಲಹೆ ನೀಡಿದರು.

ಶಿಕ್ಷಣ ಬದುಕನ್ನು ಬೆಳಗಿಸುವ ಜ್ಯೋತಿ ಮಾತ್ರವಲ್ಲ, ಸಮಾಜದ ಪರಿವರ್ತನೆಗೆ ಪ್ರೇರಣೆ ನೀಡುವ ಶಕ್ತಿಯೂ ಹೌದು. ಪ್ರಾಂಶುಪಾಲರು ಶಿಕ್ಷಣ ಸಂಸ್ಥೆಗಳ ಸಾರಥಿಗಳಾಗಿದ್ದು, ಸರ್ಕಾರ ಮತ್ತು ಪೋಷಕರು ನಿಮ್ಮ ಮೇಲೆ ಭರವಸೆ ಇಟ್ಟಿದ್ದಾರೆ. ಪ್ರಸ್ತುತ 5ಜಿ, 6ಜಿ ತಂತ್ರಜ್ಞಾನದ ಯುಗದಲ್ಲಿ ವಿದ್ಯಾರ್ಥಿಗಳು ಅತ್ಯಂತ ಚುರುಕಾಗಿದ್ದಾರೆ. ಕೆಲವೊಮ್ಮೆ ವಿದ್ಯಾರ್ಥಿಗಳೇ ಶಿಕ್ಷಕರಿಗೆ ಹೊಸ ವಿಷಯಗಳನ್ನು ಕಲಿಸುವಷ್ಟು ತಂತ್ರಜ್ಞಾನದಲ್ಲಿ ಮುಂದಿದ್ದಾರೆ. ಇದರ ಜತೆಗೆ ಕೃತಕ ಬುದ್ಧಿಮತ್ತೆ (ಎಐ) ಕೂಡ ಶಿಕ್ಷಣ ಕ್ಷೇತ್ರದಲ್ಲಿ ಮಹತ್ವದ ಬದಲಾವಣೆ ತರುತ್ತಿದೆ. ಈ ಬೆಳವಣಿಗೆಗಳಿಗೆ ಅನುಗುಣವಾಗಿ ಶಿಕ್ಷಕರು ತಮ್ಮ ಜ್ಞಾನ ಮತ್ತು ಬೋಧನಾ ವಿಧಾನಗಳನ್ನು ನವೀಕರಿಸಿಕೊಳ್ಳಬೇಕು ಎಂದರು.

ಸರ್ಕಾರಿ ಕಾಲೇಜುಗಳು ಖಾಸಗಿ ಶಿಕ್ಷಣ ಸಂಸ್ಥೆಗಳೊಂದಿಗೆ ಸ್ಪರ್ಧಿಸಬೇಕಾದ ಪರಿಸ್ಥಿತಿಯಿದೆ. ಹೆಣ್ಣು ಮಕ್ಕಳು ಶಿಕ್ಷಣ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲಿಯೂ ಸಾಧನೆ ಮಾಡುತ್ತಿದ್ದಾರೆ. ಅವರ ಶಿಕ್ಷಣ, ಸುರಕ್ಷತೆ ಮತ್ತು ಸಮಗ್ರ ಬೆಳವಣಿಗೆಗೆ ಪ್ರಾಂಶುಪಾಲರು ಹಾಗೂ ಪ್ರಾಧ್ಯಾಪಕರು ಹೆಚ್ಚಿನ ಕಾಳಜಿ ವಹಿಸಬೇಕು. ಕಾಲೇಜುಗಳಲ್ಲಿ ರ್ಯಾಗಿಂಗ್‌ಗೆ ಅವಕಾಶ ನೀಡದೆ, ಸಂಪೂರ್ಣ ರ್ಯಾಗಿಂಗ್ ಮುಕ್ತ ವಾತಾವರಣ ನಿರ್ಮಿಸಬೇಕು ಎಂದು ಸೂಚಿಸಿದರು.

ಕಾಲೇಜುಗಳ ಆವರಣದಲ್ಲಿ ಯಾವುದೇ ರೀತಿಯ ಜಾತಿ, ಧರ್ಮ, ದ್ವೇಷ ಅಥವಾ ಭೇದಭಾವಗಳಿಗೆ ಅವಕಾಶ ನೀಡಬಾರದು. ವಿದ್ಯಾರ್ಥಿಗಳಲ್ಲಿ ಪರಸ್ಪರ ಗೌರವ, ಸಹಬಾಳ್ವೆ ಮತ್ತು ಸಾಮಾಜಿಕ ಸಾಮರಸ್ಯದ ಮನೋಭಾವ ಬೆಳೆಸಬೇಕು. ವಿದ್ಯಾರ್ಥಿಗಳಲ್ಲಿ ನಾಯಕತ್ವದ ಗುಣ ಹಾಗೂ ಪ್ರಜಾಪ್ರಭುತ್ವದ ಅರಿವು ಮೂಡಿಸುವ ಉದ್ದೇಶದಿಂದ ಕಾಲೇಜು ಚುನಾವಣೆಗಳನ್ನು ನಡೆಸಲು ಸರ್ಕಾರ ನಿರ್ಧರಿಸಿದೆ. ನಾವೂ ಕಾಲೇಜು ದಿನಗಳಲ್ಲಿ ಚುನಾವಣೆಗಳಲ್ಲಿ ಸ್ಪರ್ಧಿಸುವ ಮೂಲಕ ನಾಯಕತ್ವದ ಗುಣಗಳನ್ನು ಬೆಳೆಸಿಕೊಂಡಿದ್ದೇವೆ ಎಂದು ತಿಳಿಸಿದರು.

ಶಿಕ್ಷಣ ಸಂಸ್ಥೆಗಳ ಜವಾಬ್ದಾರಿ ಕೇವಲ ಪದವೀಧರರನ್ನು ಸೃಷ್ಟಿಸುವುದಕ್ಕೆ ಸೀಮಿತವಾಗಬಾರದು. ವಿದ್ಯಾವಂತರ ಜತೆಗೆ ಸಾಮಾಜಿಕ ಪ್ರಜ್ಞೆ ಹೊಂದಿರುವ ಪ್ರಜ್ಞಾವಂತರನ್ನೂ ರೂಪಿಸಬೇಕು. ಖಾಸಗಿ ಶಿಕ್ಷಣ ಸಂಸ್ಥೆಗಳಂತೆ ಸರ್ಕಾರಿ ಕಾಲೇಜುಗಳೂ ಗುಣಮಟ್ಟದ ಶಿಕ್ಷಣ ನೀಡುವಲ್ಲಿ ಮಹತ್ವದ ಕೊಡುಗೆ ನೀಡಿವೆ. ಈಗಾಗಲೇ ಉತ್ತಮವಾಗಿ ಬೆಳೆದಿರುವ ಪ್ರತಿಭೆಗಳನ್ನು ಮತ್ತಷ್ಟು ಬೆಳೆಸುವುದು ಮುಖ್ಯವೇ ಸರಿ. ಆದರೆ ಅವಕಾಶಗಳಿಂದ ವಂಚಿತರಾದ ಸಾಮಾನ್ಯ ಮಕ್ಕಳಲ್ಲಿರುವ ಸಾಮರ್ಥ್ಯವನ್ನು ಗುರುತಿಸಿ, ಅವರನ್ನು ಉನ್ನತ ಮಟ್ಟಕ್ಕೆ ಕೊಂಡೊಯ್ಯುವುದು ಇನ್ನೂ ಮುಖ್ಯ. ಕುದುರೆಯನ್ನು ಓಟದ ಕುದುರೆಯನ್ನಾಗಿ ಮಾಡುವುದಕ್ಕಿಂತ ಕತ್ತೆಯನ್ನು ಕುದುರೆಯನ್ನಾಗಿ ಪರಿವರ್ತಿಸುವುದು ಹೆಚ್ಚು ಸವಾಲಿನ ಕೆಲಸ ಎಂಬ ಉದಾಹರಣೆಯ ಮೂಲಕ ಶಿಕ್ಷಣದ ಮಹತ್ವವನ್ನು ವಿವರಿಸಿದರು.

ಸಿಎಸ್‌ಆರ್ ನಿಧಿಯನ್ನು ಬಳಸಿಕೊಂಡು ಸಚಿವ ಬಾಲಕೃಷ್ಣ ಅವರ ಕ್ಷೇತ್ರದಲ್ಲಿ ಪ್ರತಿ ಶಾಲೆಗೆ ಸುಮಾರು 13ರಿಂದ 14 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗುತ್ತಿದೆ. ಸರ್ಕಾರಿ ಶಾಲೆಗಳಲ್ಲಿ 400ರಿಂದ 500ರಷ್ಟಿದ್ದ ವಿದ್ಯಾರ್ಥಿಗಳ ಸಂಖ್ಯೆ 2 ಸಾವಿರಕ್ಕೆ ಏರಿಕೆಯಾಗಿದೆ. ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ 30 ಶಾಲೆಗಳನ್ನು ದತ್ತು ಪಡೆಯಲಾಗಿದೆ. ಇದೇ ಮಾದರಿಯಲ್ಲಿ ರಾಜ್ಯದ ಪಂಚಾಯಿತಿ ಮಟ್ಟದಲ್ಲಿ 2,000 ಶಾಲೆಗಳನ್ನು ದತ್ತು ಪಡೆಯುವ ಯೋಜನೆಯಿದೆ.

ಗ್ರಾಮೀಣ ಪ್ರದೇಶದ ಮಕ್ಕಳಿಗೂ ಸ್ಥಳೀಯವಾಗಿಯೇ ಗುಣಮಟ್ಟದ ಶಿಕ್ಷಣ ಮತ್ತು ಉತ್ತಮ ಸೌಲಭ್ಯಗಳು ದೊರೆಯಬೇಕು ಎಂಬ ಉದ್ದೇಶದಿಂದ ಸರ್ಕಾರ ಕಾರ್ಯನಿರ್ವಹಿಸುತ್ತಿದೆ. ನನ್ನ ಅಧಿಕಾರಾವಧಿಯಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಶಾಶ್ವತವಾಗಿ ನೆನಪಿನಲ್ಲಿ ಉಳಿಯುವ ಸಾಧನೆಗಳನ್ನು ಮಾಡಬೇಕೆಂಬ ಆಶಯವಿದೆ ಎಂದು ಹೇಳಿದರು.

ವಿಶ್ವದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳು ಬೆಂಗಳೂರಿನಲ್ಲಿ ತಮ್ಮ ಶಾಖೆಗಳನ್ನು ತೆರೆಯುತ್ತಿವೆ. ಇದರಿಂದ ಶಿಕ್ಷಣ ಕ್ಷೇತ್ರದಲ್ಲಿ ಸ್ಪರ್ಧೆ ಹೆಚ್ಚಾಗಿದೆ. ಸರ್ಕಾರಿ ಶಿಕ್ಷಣ ಸಂಸ್ಥೆಗಳನ್ನು ನಿರ್ವಹಿಸುವುದು ಸವಾಲಿನ ಕೆಲಸವಾದರೂ ಲಭ್ಯವಿರುವ ಸಂಪನ್ಮೂಲಗಳಲ್ಲಿಯೇ ಉತ್ತಮ ಸೌಲಭ್ಯ ಕಲ್ಪಿಸಬೇಕು. ವಿಶ್ವಬ್ಯಾಂಕ್ ನೆರವಿನೊಂದಿಗೆ ತಾಂತ್ರಿಕ ಮತ್ತು ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಬದಲಾವಣೆ ತರಲು ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ಅವರು ಪ್ರಯತ್ನಿಸುತ್ತಿದ್ದಾರೆ. ಶಿಕ್ಷಣ ಕ್ಷೇತ್ರದ ಅನುಭವ ಮತ್ತು ಬದ್ಧತೆಯನ್ನು ಪರಿಗಣಿಸಿ ಅವರಿಗೆ ಈ ಖಾತೆ ನೀಡಲಾಗಿದೆ ಎಂದರು.

ವಿಶ್ವದ ಗಮನ ಬೆಂಗಳೂರಿನತ್ತ ನೆಟ್ಟಿದೆ. ಭಾರತದ ಬೆಳವಣಿಗೆಯಲ್ಲಿ ಬೆಂಗಳೂರು ಪ್ರಮುಖ ಪಾತ್ರ ವಹಿಸುತ್ತಿದೆ. ಶಿಕ್ಷಕರು ರಾಷ್ಟ್ರದ ನಿರ್ಮಾತೃಗಳು. ಶಿಕ್ಷಕರು ಸರ್ಕಾರದ ಮೇಲೆ ವಿಶ್ವಾಸವಿಟ್ಟು ಪ್ರಾಮಾಣಿಕತೆ ಮತ್ತು ಶಿಸ್ತಿನಿಂದ ಕಾರ್ಯನಿರ್ವಹಿಸಬೇಕು. ನಿಮ್ಮ ಸೇವೆ ಮತ್ತು ಕಾರ್ಯಕ್ಷಮತೆಯನ್ನು ಗುರುತಿಸಿ ಸೂಕ್ತ ಗೌರವ ನೀಡುವ ಕೆಲಸವನ್ನು ಸರ್ಕಾರ ಮಾಡಲಿದೆ.

ಶಿಕ್ಷಕ ವೃತ್ತಿಯನ್ನು ಆಯ್ಕೆ ಮಾಡಿಕೊಂಡಿರುವ ನಿಮ್ಮ ಆಸಕ್ತಿ ಮತ್ತು ಬದ್ಧತೆ ಮೆಚ್ಚುವಂತಹದ್ದು. ಸರ್ಕಾರ, ಶಿಕ್ಷಕರು, ಪೋಷಕರು ಮತ್ತು ಸಮಾಜ ಒಟ್ಟಾಗಿ ಕೈಜೋಡಿಸಿದಾಗ ಮಾತ್ರ ಮಕ್ಕಳ ಭವಿಷ್ಯ ಉಜ್ವಲವಾಗಲು ಸಾಧ್ಯ. ಈ ನಿಟ್ಟಿನಲ್ಲಿ ಎಲ್ಲರೂ ಸಮನ್ವಯದಿಂದ ಕೆಲಸ ಮಾಡೋಣ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕರೆ ನೀಡಿದರು.

ಈ ಸಂದರ್ಭದಲ್ಲಿ ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ, ಸಚಿವ ಹೆಚ್.ಸಿ. ಬಾಲಕೃಷ್ಣ, ಶಾಸಕ ಬಸವನಗೌಡ ದದ್ದಲ್, ವಿಧಾನ ಪರಿಷತ್ ಸದಸ್ಯ ಸುಧಾಮ ದಾಸ್, ಕಾಲೇಜು ಶಿಕ್ಷಣ ಇಲಾಖೆ ಆಯುಕ್ತ ಡಾ. ಹೆಚ್.ಎನ್. ಗೋಪಾಲಕೃಷ್ಣ, ತಾಂತ್ರಿಕ ಶಿಕ್ಷಣ ಇಲಾಖೆ ನಿರ್ದೇಶಕ ಡಾ. ಹರೀಶ್ ಕುಮಾರ್ ಕೆ., ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಪ್ರಸನ್ನ ಹೆಚ್., ಕಾಲೇಜು ಶಿಕ್ಷಣ ಇಲಾಖೆ ನಿರ್ದೇಶಕಿ ಶೋಭಾ ಜಿ., ಮುಖ್ಯ ಆಡಳಿತಾಧಿಕಾರಿ ಟಿ.ಆರ್. ಶೋಭಾ ಸೇರಿದಂತೆ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.

K.M.Sathish Gowda

Join WhatsApp

Join Now

Facebook

Join Now

Read more

ಬಸವಣ್ಣನವರ ಘನತೆಗೆ ಧಕ್ಕೆ ಆರೋಪ: ‘ಬಸವ ಮಂಟಪ’ ಕೃತಿ ಮುಟ್ಟುಗೋಲಿಗೆ ರಾಜ್ಯ ಸಚಿವ ಸಂಪುಟ ಅಸ್ತು!

ಬಸವಣ್ಣನವರ ಗೌರವಕ್ಕೆ ಧಕ್ಕೆ ತರುವ ಕೃತಿಗಳ ವಿರುದ್ಧ ಕ್ರಮ ಕೈಗೊಳ್ಳಲಿ: ಸುನೀಲ್ ಕುಮಾರ್

ಬಸವಣ್ಣನವರ ತೇಜೋವಧೆ ಸಹಿಸುವುದಿಲ್ಲ; ‘ಬಸವ ಮಂಟಪ’ ಕೃತಿ ನಿಷೇಧಿಸಿ: ಸಾಣೇಹಳ್ಳಿ ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ

ಬಸವಣ್ಣನವರ ವಿರುದ್ಧ ಅವಹೇಳನಕಾರಿ ಹೇಳಿಕೆ; ರವಿ ಹಂಜ್ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರ: ಶಂಕರ್ ಬಿದರಿ

ಬಸವಣ್ಣನವರ ಗೌರವಕ್ಕೆ ಧಕ್ಕೆ ತರುವ ಕೃತ್ಯ ಸಹಿಸುವುದಿಲ್ಲ; ವಿವಾದಾತ್ಮಕ ಕೃತಿ ಮುಟ್ಟುಗೋಲಿಗೆ ಬಿ.ವೈ. ವಿಜಯೇಂದ್ರ ಆಗ್ರಹ

ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ₹2,000 ಕೋಟಿ ಬಿಡುಗಡೆ ಮಾಡಿ; ಇಲ್ಲದಿದ್ದರೆ 2028ರಲ್ಲಿ ತಕ್ಕ ಪಾಠ ಕಲಿಸುತ್ತಾರೆ: ರಘು ಕೌಟಿಲ್ಯ

Leave a Comment