ಮೊತೊಮಚಿ (ಜಪಾನ್), ನವೆಂಬರ್ 23: ಕರ್ನಾಟಕದಲ್ಲಿ ಹೊಸ ಹೂಡಿಕೆಗಳನ್ನು ಆಕರ್ಷಿಸುವುದರ ಜತೆಗೆ ಬೆಂಗಳೂರಿಗೆ ಮಾತ್ರ ಸೀಮಿತವಾಗದೆ ರಾಜ್ಯದ ಎಲ್ಲ ಜಿಲ್ಲೆಗಳಿಗೂ ಕೈಗಾರಿಕಾ ಬೆಳವಣಿಗೆ ಮತ್ತು ಉದ್ಯೋಗಾವಕಾಶಗಳನ್ನು ವಿಸ್ತರಿಸುವ ಗುರಿಯನ್ನು ಸರ್ಕಾರ ಹೊಂದಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.
ರಾಜ್ಯದಲ್ಲಿ ಕೈಗಾರಿಕಾ ಹೂಡಿಕೆಗಳನ್ನು ಹೆಚ್ಚಿಸುವ ಉದ್ದೇಶದಿಂದ ಜಪಾನ್ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು, ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಕರ್ಯ ಅಭಿವೃದ್ಧಿ ಹಾಗೂ ವಾಣಿಜ್ಯ ಸಚಿವ ಎಂ.ಬಿ. ಪಾಟೀಲ್ ಮತ್ತು ಅಧಿಕಾರಿಗಳ ನಿಯೋಗದೊಂದಿಗೆ ಜಪಾನ್ನ ಮೊತೊಮಚಿಯಲ್ಲಿರುವ ಟೊಯೊಟಾ ಮೋಟಾರ್ ಕಾರ್ಪೊರೇಷನ್ನ ಘಟಕಕ್ಕೆ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಟೊಯೊಟಾ ಮೋಟಾರ್ ಕಾರ್ಪೊರೇಷನ್ನ ಪ್ರಮುಖರೊಂದಿಗೆ ಸಭೆ ನಡೆಸಿ, ಕರ್ನಾಟಕದಲ್ಲಿ ಮತ್ತಷ್ಟು ಹೂಡಿಕೆ ಮಾಡುವ ಸಾಧ್ಯತೆಗಳು, ಕೈಗಾರಿಕಾ ಸಹಭಾಗಿತ್ವ, ತಂತ್ರಜ್ಞಾನ ವಿನಿಮಯ ಹಾಗೂ ಉದ್ಯೋಗ ಸೃಷ್ಟಿಯ ಕುರಿತು ಚರ್ಚಿಸಿದರು.
ಇದೇ ವೇಳೆ ಟೊಯೊಟಾದ ‘ಗ್ಲೋಬಲ್ ಸ್ಕಿಲ್-ಅಪ್’ (Global Skill-up) ಕಾರ್ಯಕ್ರಮದಡಿ ಜಪಾನ್ನಲ್ಲಿ ವಿಶೇಷ ತರಬೇತಿ ಪಡೆಯುತ್ತಿರುವ ಬಿಡದಿಯ ಟೊಯೊಟಾ ಘಟಕದ 20ಕ್ಕೂ ಹೆಚ್ಚು ಐಟಿಐ ಪ್ರಶಿಕ್ಷಣಾರ್ಥಿಗಳೊಂದಿಗೆ ಮುಖ್ಯಮಂತ್ರಿ ಸಂವಾದ ನಡೆಸಿದರು.

ಪ್ರಶಿಕ್ಷಣಾರ್ಥಿಗಳಿಂದ ಜಪಾನ್ನಲ್ಲಿ ದೊರೆಯುತ್ತಿರುವ ತರಬೇತಿ, ಅಲ್ಲಿನ ತಾಂತ್ರಿಕ ವ್ಯವಸ್ಥೆ ಹಾಗೂ ಕಲಿಕೆಯ ಅನುಭವಗಳ ಕುರಿತು ಮಾಹಿತಿ ಪಡೆದರು. ವಿದೇಶದಲ್ಲಿ ದೊರೆತಿರುವ ಈ ಅವಕಾಶವನ್ನು ಸಮರ್ಪಕವಾಗಿ ಬಳಸಿಕೊಂಡು ತಮ್ಮ ತಾಂತ್ರಿಕ ಕೌಶಲ್ಯ, ವೃತ್ತಿಪರ ಪರಿಣತಿ ಮತ್ತು ಕಾರ್ಯಕ್ಷಮತೆಯನ್ನು ಹೆಚ್ಚಿಸಿಕೊಳ್ಳಬೇಕು. ತರಬೇತಿಯ ಮೂಲಕ ಗಳಿಸುವ ಜ್ಞಾನವನ್ನು ಕರ್ನಾಟಕದ ಕೈಗಾರಿಕಾ ಅಭಿವೃದ್ಧಿಗೆ ಬಳಸಿಕೊಳ್ಳುವಂತೆ ಯುವಕರಿಗೆ ಸಲಹೆ ನೀಡಿ ಪ್ರೋತ್ಸಾಹಿಸಿದರು.
ಕರ್ನಾಟಕಕ್ಕೆ ಹೊಸ ಹೂಡಿಕೆಗಳನ್ನು ಸೆಳೆಯುವುದು, ಸ್ಥಳೀಯ ಯುವಕರಿಗೆ ಹೆಚ್ಚಿನ ಉದ್ಯೋಗಾವಕಾಶಗಳನ್ನು ಕಲ್ಪಿಸುವುದು ಹಾಗೂ ವಿದೇಶಿ ನೇರ ಹೂಡಿಕೆ (FDI) ಆಕರ್ಷಿಸುವ ಪ್ರಮುಖ ರಾಜ್ಯವಾಗಿ ಕರ್ನಾಟಕದ ಸ್ಥಾನಮಾನವನ್ನು ಮತ್ತಷ್ಟು ಬಲಪಡಿಸುವುದು ಜಪಾನ್ ಪ್ರವಾಸದ ಪ್ರಮುಖ ಉದ್ದೇಶವಾಗಿದೆ ಎಂದು ತಿಳಿಸಿದರು.
‘ಬಿಯಾಂಡ್ ಬೆಂಗಳೂರು’ ಯೋಜನೆಗೆ ಆದ್ಯತೆ
ರಾಜ್ಯ ಸರ್ಕಾರದ ‘ಬಿಯಾಂಡ್ ಬೆಂಗಳೂರು’ ಯೋಜನೆಯ ಮೂಲಕ ಕೈಗಾರಿಕಾ ಅಭಿವೃದ್ಧಿ ಮತ್ತು ಹೂಡಿಕೆಗಳನ್ನು ರಾಜಧಾನಿ ಬೆಂಗಳೂರಿನಿಂದ ರಾಜ್ಯದ ಇತರ ಭಾಗಗಳಿಗೂ ವಿಸ್ತರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಇದರಿಂದ ಪ್ರಾದೇಶಿಕ ಅಸಮಾನತೆ ಕಡಿಮೆಯಾಗಿ, ಎಲ್ಲ ಜಿಲ್ಲೆಗಳಲ್ಲಿಯೂ ಕೈಗಾರಿಕೆಗಳ ಸ್ಥಾಪನೆ, ಉದ್ಯೋಗ ಸೃಷ್ಟಿ ಮತ್ತು ಆರ್ಥಿಕ ಚಟುವಟಿಕೆಗಳಿಗೆ ಉತ್ತೇಜನ ದೊರೆಯಲಿದೆ ಎಂದು ಹೇಳಿದರು.

ಕೈಗಾರಿಕೆಗಳನ್ನು ಆಕರ್ಷಿಸುವುದಷ್ಟೇ ಸರ್ಕಾರದ ಉದ್ದೇಶವಲ್ಲ. ರಾಜ್ಯದ ಪ್ರತಿಯೊಂದು ಪ್ರದೇಶದಲ್ಲಿಯೂ ಆರ್ಥಿಕ ಅವಕಾಶಗಳನ್ನು ಸೃಷ್ಟಿಸಿ, ಸ್ಥಳೀಯ ಯುವಕರಿಗೆ ಉದ್ಯೋಗ ಕಲ್ಪಿಸುವುದು ಹಾಗೂ ಆಯಾ ಭಾಗಗಳ ಸಂಪನ್ಮೂಲ ಮತ್ತು ಮಾನವ ಸಂಪನ್ಮೂಲವನ್ನು ಅಭಿವೃದ್ಧಿಗೆ ಬಳಸಿಕೊಳ್ಳುವುದು ಮುಖ್ಯವಾಗಿದೆ. ಬೆಂಗಳೂರಿನಾಚೆಗೂ ಹೂಡಿಕೆ ಮತ್ತು ಕೈಗಾರಿಕಾ ಬೆಳವಣಿಗೆ ವಿಸ್ತರಿಸುವ ಮೂಲಕ ಕರ್ನಾಟಕದ ಎಲ್ಲ ಪ್ರದೇಶಗಳನ್ನೂ ರಾಜ್ಯದ ಪ್ರಗತಿಯ ಪಾಲುದಾರರನ್ನಾಗಿ ಮಾಡುವ ನಿಟ್ಟಿನಲ್ಲಿ ಸರ್ಕಾರ ಬದ್ಧವಾಗಿದೆ ಎಂದು ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.








