ತಾಜಾ ಸುದ್ದಿ ರಾಜಕೀಯ ಕ್ರೈಂ ನ್ಯೂಸ್ ರಾಜ್ಯ-ಜಿಲ್ಲೆ ದೇಶ-ವಿದೇಶ ಸೋಷಿಯಲ್ ಮೀಡಿಯಾ ಮನರಂಜನೆ ಕಾನೂನು ಜೀವನಶೈಲಿ ಕ್ರೀಡೆ ಗುರುಪರಂಪರೆ ವಿಡೀಯೋ English News

ಸಂವಿಧಾನದ ಆಶಯ, ಮೂಲಭೂತ ಹಕ್ಕುಗಳ ಬೋಧನೆಗೆ ಪ್ರತ್ಯೇಕ ಸಮಿತಿ ರಚನೆ; ಮುಂದಿನ ಶೈಕ್ಷಣಿಕ ವರ್ಷದಿಂದ ರಾಜ್ಯದ ಎಲ್ಲ ಶಾಲೆಗಳಲ್ಲೂ ಸಂವಿಧಾನ ಪಾಠ: ಸಿಎಂ ಡಿ.ಕೆ. ಶಿವಕುಮಾರ್

On: November 26, 2026 7:32 PM
Follow Us:

ಮೈಸೂರು, ನ.26: ಸಂವಿಧಾನವೆಂದರೆ ಕೇವಲ ಪುಸ್ತಕವಲ್ಲ, ಅದು ಪ್ರತಿಯೊಬ್ಬ ಭಾರತೀಯನ ಹಕ್ಕು, ಗೌರವ, ಸ್ವಾತಂತ್ರ್ಯ ಹಾಗೂ ಸಮಾನತೆಯ ರಕ್ಷಾಕವಚ. ಸಂವಿಧಾನದ ಆಶಯ ಮತ್ತು ಮೌಲ್ಯಗಳನ್ನು ಬಾಲ್ಯದಿಂದಲೇ ವಿದ್ಯಾರ್ಥಿಗಳಿಗೆ ಪರಿಚಯಿಸುವ ಉದ್ದೇಶದಿಂದ ಮುಂದಿನ ಶೈಕ್ಷಣಿಕ ವರ್ಷದಿಂದ ರಾಜ್ಯದ ಎಲ್ಲ ಸರ್ಕಾರಿ ಹಾಗೂ ಖಾಸಗಿ ಶಾಲೆಗಳ ಪಠ್ಯಕ್ರಮದಲ್ಲಿ ಸಂವಿಧಾನಕ್ಕೆ ಸಂಬಂಧಿಸಿದ ಪಾಠಗಳನ್ನು ಅಳವಡಿಸಲಾಗುವುದು. ಈ ನಿಟ್ಟಿನಲ್ಲಿ ಪ್ರತ್ಯೇಕ ಸಮಿತಿ ರಚಿಸಿ ಪಠ್ಯಕ್ರಮ ಸಿದ್ಧಪಡಿಸಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಘೋಷಿಸಿದರು.

ನಗರದ ಮಹಾರಾಜ ಕಾಲೇಜು ಮೈದಾನದಲ್ಲಿ ಗುರುವಾರ ಆಯೋಜಿಸಿದ್ದ ಸಂವಿಧಾನ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಸಂವಿಧಾನದ ಮಹತ್ವ, ಪ್ರಜಾಪ್ರಭುತ್ವದ ಮೌಲ್ಯಗಳು ಹಾಗೂ ಪ್ರತಿಯೊಬ್ಬ ನಾಗರಿಕನ ಹಕ್ಕುಗಳ ಕುರಿತು ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುವುದು ಇಂದಿನ ಅಗತ್ಯವಾಗಿದೆ. ಸಂವಿಧಾನದ ತತ್ವಗಳು ಕೇವಲ ಪಠ್ಯಪುಸ್ತಕಗಳಿಗೆ ಸೀಮಿತವಾಗದೆ ಪ್ರತಿಯೊಬ್ಬರ ಬದುಕಿನ ಭಾಗವಾಗಬೇಕು ಎಂದು ಹೇಳಿದರು.

ಮಕ್ಕಳಿಗೆ ಸಂವಿಧಾನದ ಆಶಯಗಳನ್ನು ಪರಿಚಯಿಸುವುದು ಸರ್ಕಾರದ ಜವಾಬ್ದಾರಿಯಾಗಿದೆ. ಮುಂದಿನ ಶೈಕ್ಷಣಿಕ ವರ್ಷದಿಂದ ಸರ್ಕಾರಿ ಶಾಲೆಗಳ ಜತೆಗೆ ಖಾಸಗಿ ಶಾಲೆಗಳಲ್ಲೂ ಸಂವಿಧಾನದ ಆಶಯಗಳು, ಮೂಲಭೂತ ಹಕ್ಕುಗಳು, ಕರ್ತವ್ಯಗಳು ಹಾಗೂ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಬೋಧಿಸುವ ವ್ಯವಸ್ಥೆ ಮಾಡಲಾಗುವುದು. ಇದಕ್ಕಾಗಿ ಪ್ರತ್ಯೇಕ ಸಮಿತಿ ರಚಿಸಿ ಪಠ್ಯಪುಸ್ತಕಗಳಲ್ಲಿ ಸೂಕ್ತ ಪಾಠಗಳನ್ನು ಸೇರಿಸಲಾಗುವುದು. ಯುವಜನರಲ್ಲಿ ಪ್ರಜಾಪ್ರಭುತ್ವದ ಅರಿವು ಮತ್ತು ನಾಯಕತ್ವ ಗುಣಗಳನ್ನು ಬೆಳೆಸಲು ವಿಧಾನಸಭಾ ಕ್ಷೇತ್ರಗಳಲ್ಲಿ ಯುವ ಸಂಸತ್‌ಗಳ ರಚನೆ ಹಾಗೂ ಯುವ ನಾಯಕರನ್ನು ಗುರುತಿಸುವ ಕಾರ್ಯಕ್ರಮಗಳನ್ನೂ ರೂಪಿಸಲಾಗುತ್ತಿದೆ ಎಂದು ತಿಳಿಸಿದರು.

ಸಂವಿಧಾನ ಪ್ರತಿಯೊಬ್ಬ ಪ್ರಜೆಗೂ ನೀಡಿರುವ ಅತ್ಯಂತ ಅಮೂಲ್ಯ ಕೊಡುಗೆ ಮತದಾನದ ಹಕ್ಕು. ಪ್ರಧಾನಿಯ ಮತಕ್ಕೆ ಎಷ್ಟು ಮೌಲ್ಯವಿದೆಯೋ, ಸಾಮಾನ್ಯ ನಾಗರಿಕನ ಮತಕ್ಕೂ ಅಷ್ಟೇ ಮೌಲ್ಯವಿದೆ. ಶ್ರೀಮಂತ-ಬಡವ ಎಂಬ ಭೇದವಿಲ್ಲದೆ ಎಲ್ಲರಿಗೂ ಸಮಾನ ಮತದಾನದ ಅವಕಾಶ ಕಲ್ಪಿಸಿರುವುದು ಪ್ರಜಾಪ್ರಭುತ್ವದ ಶ್ರೇಷ್ಠತೆಯಾಗಿದೆ.

ಆದರೆ, ಮತದಾರರ ಪಟ್ಟಿಯಿಂದ ಹಿಂದುಳಿದವರು, ಅಲ್ಪಸಂಖ್ಯಾತರು ಹಾಗೂ ದಲಿತರ ಹೆಸರುಗಳನ್ನು ತೆಗೆದುಹಾಕುವ ಪ್ರಯತ್ನಗಳು ನಡೆಯುತ್ತಿರುವ ಆತಂಕವಿದೆ. ಇಂತಹ ಬೆಳವಣಿಗೆಗಳನ್ನು ಗಂಭೀರವಾಗಿ ಪರಿಗಣಿಸಬೇಕು. ‘ನಮ್ಮ ಮತ ನಮ್ಮ ಹಕ್ಕು, ನಮ್ಮ ಮತ ನಮ್ಮ ಬದುಕು’ ಎಂಬ ಜಾಗೃತಿಯೊಂದಿಗೆ ಪ್ರತಿಯೊಬ್ಬರೂ ತಮ್ಮ ಮತದಾನದ ಹಕ್ಕಿನ ರಕ್ಷಣೆಗೆ ಒಗ್ಗಟ್ಟಿನಿಂದ ಹೋರಾಡಬೇಕು ಎಂದು ಕರೆ ನೀಡಿದರು.

ಸಂವಿಧಾನಿಕ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಂಡು ಪ್ರಜಾಪ್ರಭುತ್ವದ ಆಶಯಗಳಿಗೆ ಧಕ್ಕೆ ತರುವ ಪ್ರಯತ್ನಗಳನ್ನು ಸಹಿಸಬಾರದು. ಮತದಾನದ ಹಕ್ಕನ್ನೇ ಕಸಿದುಕೊಳ್ಳುವ ಪರಿಸ್ಥಿತಿ ನಿರ್ಮಾಣವಾದರೆ ಅದು ಪ್ರಜಾಪ್ರಭುತ್ವದ ಅಡಿಪಾಯಕ್ಕೆ ಹೊಡೆತ ನೀಡಿದಂತಾಗುತ್ತದೆ. ವ್ಯಕ್ತಿ ಪೂಜೆಗಿಂತ ಪ್ರಜಾಪ್ರಭುತ್ವದ ರಕ್ಷಣೆ ಮುಖ್ಯ. ಸಂವಿಧಾನ ಉಳಿದರೆ ದೇಶದ ಐಕ್ಯತೆ, ಸಮಗ್ರತೆ ಮತ್ತು ಶಾಂತಿ ಉಳಿಯುತ್ತದೆ ಎಂದು ಹೇಳಿದರು.

ಮಹಾತ್ಮ ಗಾಂಧೀಜಿ ಹಾಗೂ ಪಂಡಿತ್ ಜವಾಹರಲಾಲ್ ನೆಹರು ಅವರ ಮಾರ್ಗದರ್ಶನದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಅವರಿಗೆ ಸಂವಿಧಾನ ರಚನೆಯ ಮಹತ್ವದ ಜವಾಬ್ದಾರಿ ನೀಡಲಾಗಿತ್ತು. ದೇಶದ ಪ್ರತಿಯೊಬ್ಬ ಪ್ರಜೆಗೂ ನ್ಯಾಯ, ಸಮಾನತೆ ಮತ್ತು ಸ್ವಾತಂತ್ರ್ಯದ ಹಕ್ಕುಗಳನ್ನು ಕಲ್ಪಿಸಿದ ಸಂವಿಧಾನ ರಚನಾ ಸಮಿತಿಯ ಎಲ್ಲ ಮಹನೀಯರ ಕೊಡುಗೆಯನ್ನು ಸ್ಮರಿಸಬೇಕು.

ಸಂವಿಧಾನ ಭಾರತದ ಅಂತರಾತ್ಮ. ಅದು ದೇಶದ 140 ಕೋಟಿ ಜನರ ಹಕ್ಕು, ಗೌರವ ಮತ್ತು ಕನಸುಗಳನ್ನು ಕಾಪಾಡುವ ಶಕ್ತಿಯಾಗಿದೆ. ಸಂವಿಧಾನವೇ ನಮ್ಮ ರಾಷ್ಟ್ರೀಯ ಗ್ರಂಥ ಎಂಬ ಭಾವನೆಯಿಂದ ಅದರ ಆಶಯಗಳನ್ನು ಎತ್ತಿಹಿಡಿಯಬೇಕು. ಮನೆ ನಿರ್ಮಾಣಕ್ಕೆ ನೀಲನಕ್ಷೆ ಎಷ್ಟು ಮುಖ್ಯವೋ, ರಾಷ್ಟ್ರ ನಿರ್ಮಾಣಕ್ಕೆ ಸಂವಿಧಾನದ ಬುನಾದಿಯೂ ಅಷ್ಟೇ ಅಗತ್ಯ. ಕಾಲಕ್ಕೆ ತಕ್ಕಂತೆ ಬದಲಾವಣೆಗಳನ್ನು ಅಳವಡಿಸಿಕೊಳ್ಳುವ ಸಾಮರ್ಥ್ಯ ಸಂವಿಧಾನಕ್ಕಿದೆ. ಆದರೆ ನ್ಯಾಯ, ಸ್ವಾತಂತ್ರ್ಯ, ಸಮಾನತೆ ಮತ್ತು ಸಹೋದರತ್ವದ ಮೂಲ ಆಶಯಗಳನ್ನು ಎಂದಿಗೂ ಮರೆಯಬಾರದು ಎಂದರು.

ಸಂವಿಧಾನ ಕೇವಲ ಮುಖ್ಯಮಂತ್ರಿ, ಸಚಿವರು, ಶಾಸಕರು ಹಾಗೂ ಜನಪ್ರತಿನಿಧಿಗಳಿಗೆ ಅಧಿಕಾರ ನೀಡಿಲ್ಲ. ಅಧಿಕಾರದಲ್ಲಿರುವವರನ್ನು ಪ್ರಶ್ನಿಸುವ ಧೈರ್ಯವನ್ನೂ ಸಾಮಾನ್ಯ ಜನರಿಗೆ ಕಲ್ಪಿಸಿದೆ. ಅನ್ಯಾಯವಾದಾಗ ನ್ಯಾಯಾಲಯದ ಮೊರೆ ಹೋಗಿ ತಮ್ಮ ಹಕ್ಕುಗಳನ್ನು ಪ್ರತಿಪಾದಿಸುವ ಅವಕಾಶ ಪ್ರತಿಯೊಬ್ಬ ನಾಗರಿಕನಿಗೂ ಇದೆ. ಶ್ರೀಮಂತರು ಮತ್ತು ಬಡವರು ಎಂಬ ತಾರತಮ್ಯವಿಲ್ಲದೆ ಎಲ್ಲರಿಗೂ ಒಂದೇ ಕಾನೂನು, ಒಂದೇ ನ್ಯಾಯ ಎಂಬ ತತ್ವವನ್ನು ಸಂವಿಧಾನ ಎತ್ತಿಹಿಡಿದಿದೆ.

ನಾನು ರೈತನ ಮಗನಾಗಿ, ಜನರ ಸೇವಕನಾಗಿ ಮುಖ್ಯಮಂತ್ರಿಯಾಗಿ ನಿಮ್ಮ ಮುಂದೆ ನಿಂತಿದ್ದೇನೆ. ಕಳೆದ 40 ವರ್ಷಗಳಿಂದ ವಿವಿಧ ಹಂತಗಳಲ್ಲಿ ಜನಸೇವೆ ಮಾಡುತ್ತಾ ಬಂದಿದ್ದೇನೆ. ನನ್ನ ಬದುಕಿಗೆ ಶಕ್ತಿ, ಧೈರ್ಯ ಮತ್ತು ಸ್ಫೂರ್ತಿ ನೀಡಿರುವುದು ಸಂವಿಧಾನ. ಅಧಿಕಾರದ ಜತೆಗೆ ಜನರ ಹಕ್ಕುಗಳನ್ನು ಗೌರವಿಸುವ ಜವಾಬ್ದಾರಿಯನ್ನೂ ಸಂವಿಧಾನ ನಮಗೆ ನೀಡಿದೆ ಎಂದು ಹೇಳಿದರು.

ಸಮಾಜದ ಎಲ್ಲ ವರ್ಗಗಳಿಗೂ ಸಮಾನ ಅವಕಾಶ ಹಾಗೂ ನ್ಯಾಯ ಒದಗಿಸುವುದೇ ಸಂವಿಧಾನದ ಪ್ರಮುಖ ಆಶಯವಾಗಿದೆ. 2013ರಿಂದ 2018ರವರೆಗೆ ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನಸಂಖ್ಯೆಗೆ ಅನುಗುಣವಾಗಿ ಅನುದಾನ ಮೀಸಲಿಡುವ ಐತಿಹಾಸಿಕ ನಿರ್ಧಾರ ಕೈಗೊಂಡಿತ್ತು. ಇಂತಹ ಕ್ರಮಗಳು ಸಾಮಾಜಿಕ ನ್ಯಾಯದ ಆಶಯವನ್ನು ಕಾರ್ಯರೂಪಕ್ಕೆ ತರುವಲ್ಲಿ ಮಹತ್ವದ ಪಾತ್ರ ವಹಿಸಿವೆ ಎಂದು ತಿಳಿಸಿದರು.

ಸಂವಿಧಾನದ ಪೀಠಿಕೆಯಲ್ಲಿ ಸಮಾಜವಾದಿ ಮತ್ತು ಜಾತ್ಯತೀತ ಪದಗಳನ್ನು ಸೇರ್ಪಡೆಗೊಳಿಸಿದ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ನಿರ್ಧಾರವನ್ನು ಸ್ಮರಿಸಿದ ಅವರು, ಈ ಪದಗಳ ಸೇರ್ಪಡೆಯನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ ಎಂದರು.

ಕಾಂಗ್ರೆಸ್ ಪಕ್ಷದ ಇತಿಹಾಸವೇ ದೇಶದ ಇತಿಹಾಸ. ಕಾಂಗ್ರೆಸ್ ಶಕ್ತಿಯೇ ದೇಶದ ಶಕ್ತಿ. ಪಕ್ಷ ಅಧಿಕಾರದಲ್ಲಿದ್ದಾಗ ಎಲ್ಲ ವರ್ಗಗಳಿಗೂ ನ್ಯಾಯ, ಸಮಾನತೆ ಮತ್ತು ಹಕ್ಕುಗಳನ್ನು ಒದಗಿಸುವ ನಿಟ್ಟಿನಲ್ಲಿ ಕೆಲಸ ಮಾಡಿದೆ. ಸಂವಿಧಾನದ ಆಶಯಗಳನ್ನು ಎತ್ತಿಹಿಡಿಯಲು ಕಾಂಗ್ರೆಸ್ ಸದಾ ಬದ್ಧವಾಗಿದೆ ಎಂದು ಹೇಳಿದರು.

ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಗೌರವಯುತ ಬದುಕು, ಆರ್ಥಿಕ ಭದ್ರತೆ ಹಾಗೂ ಸಮಾನ ಅವಕಾಶಗಳು ದೊರೆಯಬೇಕು ಎಂಬುದು ಸಂವಿಧಾನದ ಆಶಯವಾಗಿದೆ. ಇದೇ ಉದ್ದೇಶದಿಂದ ರಾಜ್ಯ ಸರ್ಕಾರ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದೆ. ಭೂಮಿ ಗ್ಯಾರಂಟಿ ಯೋಜನೆಯೂ ಇದೇ ಆಶಯದ ಭಾಗವಾಗಿದೆ. ಬಡವರು, ರೈತರು, ಮಹಿಳೆಯರು ಹಾಗೂ ದುರ್ಬಲ ವರ್ಗಗಳ ಬದುಕಿನಲ್ಲಿ ಬದಲಾವಣೆ ತರುವುದು ಸರ್ಕಾರದ ಗುರಿಯಾಗಿದೆ. ಎಲ್ಲರಿಗೂ ಸಮಬಾಳು, ಸಮಾನ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಸರ್ಕಾರ ಕಾರ್ಯನಿರ್ವಹಿಸುತ್ತಿದೆ ಎಂದು ತಿಳಿಸಿದರು.

ಸಂವಿಧಾನ ಎಷ್ಟೇ ಉತ್ತಮವಾಗಿದ್ದರೂ ಅದನ್ನು ಜಾರಿಗೊಳಿಸುವವರ ನಡವಳಿಕೆ ಮತ್ತು ಬದ್ಧತೆಯ ಮೇಲೆ ಅದರ ಯಶಸ್ಸು ಅವಲಂಬಿತವಾಗಿರುತ್ತದೆ ಎಂಬ ಡಾ.ಬಿ.ಆರ್. ಅಂಬೇಡ್ಕರ್ ಅವರ ಎಚ್ಚರಿಕೆಯ ಮಾತುಗಳನ್ನು ಪ್ರತಿಯೊಬ್ಬರೂ ನೆನಪಿನಲ್ಲಿಟ್ಟುಕೊಳ್ಳಬೇಕು. ಸಂವಿಧಾನದ ರಕ್ಷಣೆ ಕೇವಲ ಸರ್ಕಾರದ ಜವಾಬ್ದಾರಿಯಲ್ಲ. ಪ್ರತಿಯೊಬ್ಬ ಭಾರತೀಯನ ಕರ್ತವ್ಯವೂ ಆಗಿದೆ.

ಸ್ವಾತಂತ್ರ್ಯದ ನಿಜವಾದ ಉದ್ದೇಶ ಕೇವಲ ಆಡಳಿತ ನಡೆಸುವುದಲ್ಲ; ಶತಮಾನಗಳಿಂದ ಅಸಮಾನತೆ ಮತ್ತು ಶೋಷಣೆಗೆ ಒಳಗಾದ ಸಮಾಜದಲ್ಲಿ ಬದಲಾವಣೆ ತರುವುದು. ಸಂವಿಧಾನ ರಚನೆಯಲ್ಲಿ ಕರ್ನಾಟಕದ 12 ಮಂದಿ ಮಹತ್ವದ ಪಾತ್ರ ವಹಿಸಿದ್ದರು ಎಂದು ಸ್ಮರಿಸಿದ ಅವರು, ಕೆ.ಸಿ. ರೆಡ್ಡಿ, ಎಸ್. ನಿಜಲಿಂಗಪ್ಪ ಹಾಗೂ ಕೆಂಗಲ್ ಹನುಮಂತಯ್ಯ ಸೇರಿದಂತೆ ರಾಜ್ಯದ ಮಹನೀಯರ ಕೊಡುಗೆಯನ್ನು ಉಲ್ಲೇಖಿಸಿದರು.

ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್ ಒಬಾಮಾ ಅವರು ಭಾರತೀಯ ಸಂವಿಧಾನವನ್ನು ಪ್ರಶಂಸಿಸಿದ್ದನ್ನು ಹಾಗೂ ದಕ್ಷಿಣ ಆಫ್ರಿಕಾದ ನೆಲ್ಸನ್ ಮಂಡೇಲಾ ಅವರು ಭಾರತದ ಸಂವಿಧಾನದಿಂದ ಸ್ಫೂರ್ತಿ ಪಡೆದಿದ್ದನ್ನು ಪ್ರಸ್ತಾಪಿಸಿದರು.

ಸಂವಿಧಾನ, ರಾಷ್ಟ್ರಧ್ವಜ ಹಾಗೂ ರಾಷ್ಟ್ರಗೀತೆಗಳು ದೇಶದ ಹೆಮ್ಮೆಯ ಸಂಕೇತಗಳಾಗಿವೆ. ಇವುಗಳನ್ನು ಪ್ರತಿಯೊಬ್ಬ ಭಾರತೀಯ ಗೌರವಿಸಿ, ಮುಂದಿನ ಪೀಳಿಗೆಗೂ ಅವುಗಳ ಮಹತ್ವವನ್ನು ತಿಳಿಸಬೇಕು. ವಿಶ್ವಮಾನವ ತತ್ವ, ಸಮಾನತೆ ಮತ್ತು ಸಹೋದರತ್ವದ ಸಂದೇಶಗಳನ್ನು ನಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.

ಜಾತಿ, ಧರ್ಮ, ಮೇಲು-ಕೀಳು ಎಂಬ ಭಾವನೆಗಳನ್ನು ಬದಿಗಿಟ್ಟು ನಾವೆಲ್ಲರೂ ಭಾರತೀಯರು ಎಂಬ ಒಗ್ಗಟ್ಟಿನ ಮನೋಭಾವದಿಂದ ಬದುಕಬೇಕು. ಕನಕದಾಸರು, ಶಿಶುನಾಳ ಶರೀಫರು, ನಾರಾಯಣ ಗುರುಗಳು ಸೇರಿದಂತೆ ಅನೇಕ ಮಹನೀಯರು ಸಾರಿದ ಸಮಾನತೆ ಮತ್ತು ಮಾನವೀಯತೆಯ ಸಂದೇಶಗಳನ್ನು ಜೀವನದಲ್ಲಿ ಪಾಲಿಸಬೇಕು. ಮಾನವೀಯತೆಯೇ ನಮ್ಮ ಧರ್ಮವಾಗಬೇಕು. ಪ್ರತಿಯೊಬ್ಬರಿಗೂ ಸಮಾನ ಗೌರವ ದೊರೆಯುವ ಸಮಾಜ ನಿರ್ಮಾಣವಾಗಬೇಕು ಎಂದು ಆಶಿಸಿದರು.

ಕಾಂಗ್ರೆಸ್ ಪಕ್ಷ ಹಾಗೂ ರಾಜ್ಯ ಸರ್ಕಾರ ಡಾ.ಬಿ.ಆರ್. ಅಂಬೇಡ್ಕರ್ ಅವರ ಆಶಯಗಳ ಹಾದಿಯಲ್ಲಿ ಮುನ್ನಡೆಯಲಿದ್ದು, ಸಂವಿಧಾನ ನೀಡಿರುವ ಹಕ್ಕು, ಸ್ವಾತಂತ್ರ್ಯ ಮತ್ತು ಸಮಾನತೆಯನ್ನು ರಕ್ಷಿಸಲು ಬದ್ಧವಾಗಿವೆ. ಸಾಮಾಜಿಕ ನ್ಯಾಯ ಮತ್ತು ಸಮಾನತೆಯ ವಿಚಾರದಲ್ಲಿ ಕರ್ನಾಟಕ ಇಡೀ ದೇಶಕ್ಕೆ ಮಾದರಿಯಾಗಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.

ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ, ಕಾಂಗ್ರೆಸ್ ಸಂಸದೀಯ ಮಂಡಳಿ ಸದಸ್ಯರು ಹಾಗೂ ನಿಕಟಪೂರ್ವ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರಾದ ಕೆ. ಎಚ್. ಮುನಿಯಪ್ಪ, ಕೆ. ಎಸ್. ಬಸವಂತಪ್ಪ, ನರೇಂದ್ರಸ್ವಾಮಿ, ಟಿ. ರಘುಮೂರ್ತಿ, ಸತೀಶ್ ಜಾರಕಿಹೊಳಿ, ಪುಟ್ಟರಂಗಶೆಟ್ಟಿ, ರಿಜ್ವಾನ್ ಹರ್ಷದ್, ಯತೀಂದ್ರ ಸಿದ್ದರಾಮಯ್ಯ, ಕೆ. ಎಂ. ಶಿವಲಿಂಗೇಗೌಡ, ಯು. ಟಿ. ಖಾದರ್, ಚಲುವರಾಯಸ್ವಾಮಿ, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಎ. ಎಸ್. ಪೊನ್ನಣ್ಣ, ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಎಚ್. ಎಂ. ರೇವಣ್ಣ, ಮುಖ್ಯಮಂತ್ರಿಯವರ ಮುಖ್ಯ ಸಲಹೆಗಾರ ಜಿ. ಸಿ. ಚಂದ್ರಶೇಖರ್, ಸಂಸದರಾದ ಸುನೀಲ್ ಬೋಸ್, ಶ್ರೇಯಸ್ ಪಟೇಲ್, ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೇವಾಲ, ಕೆಪಿಸಿಸಿ ಅಧ್ಯಕ್ಷ ಬಿ. ಕೆ. ಹರಿಪ್ರಸಾದ್, ಶಾಸಕರಾದ ಎಚ್. ಸಿ. ಮಹದೇವಪ್ಪ, ತನ್ವೀರ್ ಸೇಠ್, ಕೆ. ವೆಂಕಟೇಶ್, ಡಿ. ರವಿಶಂಕರ್, ಅನಿಲ್ ಚಿಕ್ಕಮಾದು, ಎ. ಆರ್. ಕೃಷ್ಣಮೂರ್ತಿ, ಹರೀಶ್ ಗೌಡ, ಗಣೇಶ್ ಪ್ರಸಾದ್, ಮಂಥರ್ ಗೌಡ, ಗಣಿಗ ರವಿಕುಮಾರ್, ವಿಧಾನ ಪರಿಷತ್ ಸದಸ್ಯರಾದ ಐವನ್ ಡಿಸೋಜಾ, ಡಾ. ಡಿ. ತಿಮ್ಮಯ್ಯ, ಶಿವಕುಮಾರ್ ಕೆ., ಶ್ರೀನಿವಾಸ್, ಶಿವಣ್ಣ, ವಸಂತ್ ಕುಮಾರ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

K.M.Sathish Gowda

Join WhatsApp

Join Now

Facebook

Join Now

Read more

ಗೋಹತ್ಯೆ ತಡೆಯುವವರನ್ನೇ ಗುರಿಯಾಗಿಸಲಾಗುತ್ತಿದೆ; ಸುಳ್ಳು ಮೊಕದ್ದಮೆ ದಾಖಲಿಸಿದರೆ ರಾಜ್ಯಾದ್ಯಂತ ಹೋರಾಟ: ಬಿಜೆಪಿ ನಾಯಕರ ಎಚ್ಚರಿಕೆ

ನಿರುದ್ಯೋಗಿ ಪದವೀಧರರಿಗೆ ತಿಂಗಳಿಗೆ ₹5,000 ಭತ್ಯೆ; 25 ಲಕ್ಷ ಸರ್ಕಾರಿ ಉದ್ಯೋಗಗಳ ಭರವಸೆ! ಮಹಿಳೆಯರಿಗೆ ವಾರ್ಷಿಕ ₹40 ಸಾವಿರ ನೆರವು, ರೈತರ ಸಾಲಮನ್ನಾ, 300 ಯೂನಿಟ್ ಉಚಿತ ವಿದ್ಯುತ್: 2027ರ ಯುಪಿ ಚುನಾವಣೆಗೆ ಅಖಿಲೇಶ್ ಯಾದವ್ ಭರ್ಜರಿ ಪ್ರಣಾಳಿಕೆ

ಅಂಬೇಡ್ಕರ್ ಹೆಸರಿನಲ್ಲಿ ರಾಜಕೀಯ ಮಾಡುವ ಕಾಂಗ್ರೆಸ್‌ಗೆ ಸಂವಿಧಾನದ ಆಶಯಗಳ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ: ಬಿ.ವೈ. ವಿಜಯೇಂದ್ರ

ಬಸವಣ್ಣನವರ ಚರಿತ್ರೆ ತಿರುಚುವ ಯತ್ನಕ್ಕೆ ಮಠಾಧೀಶರ ಕೆಂಡಾಮಂಡಲ! ಬಸವಣ್ಣನವರ ವಿರುದ್ಧದ ಅಪಪ್ರಚಾರಕ್ಕೆ ಸಿಡಿದೆದ್ದ ಶರಣ ಸಮುದಾಯ; ಜನವರಿಯಲ್ಲಿ ರಾಜ್ಯಮಟ್ಟದ ‘ಬಸವ ಪಡೆ’ ಅಸ್ತಿತ್ವಕ್ಕೆ

ಪ್ರಜಾಪ್ರಭುತ್ವದ ಹೆಸರಿನಲ್ಲಿ ಕಾಂಗ್ರೆಸ್ ಜನರಲ್ಲಿ ಗೊಂದಲ ಸೃಷ್ಟಿಸುತ್ತಿದೆ;150ಕ್ಕೂ ಹೆಚ್ಚು ಸ್ಥಾನ ಗೆದ್ದು ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ರಚನೆ: ಬಿ.ವೈ. ವಿಜಯೇಂದ್ರ

ಸುಪ್ರೀಂಕೋರ್ಟ್ ಆದೇಶಕ್ಕೂ ಅಡ್ಡಿ! ತಿರುಪ್ಪರಂಕುಂದ್ರಂ ದೀಪ ವಿವಾದದಲ್ಲಿ ವಿಜಯ್ ಸರ್ಕಾರಕ್ಕೆ ಮುಖಭಂಗ; ದೀಪಸ್ತಂಭದಲ್ಲಿ ಜ್ಯೋತಿ ಬೆಳಗದ ಪ್ರಕರಣ: ನ್ಯಾಯಾಲಯಕ್ಕೆ ಬೇಷರತ್ ಕ್ಷಮೆಯಾಚಿಸಿದ ಮಧುರೈ ಜಿಲ್ಲಾಧಿಕಾರಿ

Leave a Comment