ಹೊಸದಿಲ್ಲಿ: ಕರ್ನಾಟಕದ ಮಹದೇವಪುರದಲ್ಲಿ ಕಳೆದ ಲೋಕಸಭೆ ಚುನಾವಣೆಯಲ್ಲಿ ಮತಗಳ್ಳತನದ ಆರೋಪ ಮಾಡಿರುವ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ವಿರುದ್ಧ, ಭಾರತದ ಚುನಾವಣಾ ಆಯೋಗ ತೀವ್ರ ವಾಗ್ದಾಳಿ ನಡೆಸಿದೆ.
ರಾಹುಲ್ ಗಾಂಧಿ ಅವರ “ಬಿಜೆಪಿ ಮತ್ತು ಚುನಾವಣಾ ಆಯೋಗದ ಜಂಟಿ ಮತಗಳ್ಳತನ” ಆರೋಪಕ್ಕೆ ತಿರುಗೇಟು ನೀಡಿರುವ ಆಯೋಗ, ಈ ಆರೋಪಗಳನ್ನು “ಹಳೆಯ ಬಾಟಲಿಯಲ್ಲಿ ಹೊಸ ಮದ್ಯ” ಎಂದು ವ್ಯಂಗ್ಯವಾಡಿದೆ.
ಈ ಕುರಿತು ತನ್ನ ಅಧಿಕೃತ ಎಕ್ಸ್ ಅಕೌಂಟ್‌ನಲ್ಲಿ ಟ್ವೀಟ್ ಮಾಡಿರುವ ಚುನಾವಣಾ ಆಯೋಗ “ಸುಳ್ಳು ಆರೋಪಗಳನ್ನು ಮಾಡುತ್ತಿರುವ ರಾಹುಲ್ ಗಾಂಧಿ, ದೇಶದ ಜನರ ಕ್ಷಮೆಯಾಚಿಸಬೇಕು” ಎಂದು ಒತ್ತಾಯಿಸಿದೆ. ರಾಹುಲ್ ಗಾಂಧಿ ಅವರಿಗೆ ಚುನಾವಣಾ ಆಯೋಗದ ಪ್ರತಿಕ್ರಿಯೆ ಇದೀಗ ದೇಶದ ಗಮನ ಸೆಳೆದಿದೆ.
“ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಆರೋಪಗಳು ದೇಶದ ದಿಕ್ಕುತಪ್ಪಿಸುತ್ತಿದ್ದು, ಮತಗಳ್ಳತನ ಆರೋಪಗಳಲ್ಲಿ ಯಾವುದೇ ಹುರುಳಿಲ್ಲ” ಎಂದು ಚುನಾವಣಾ ಆಯೋಗ ಮತ್ತೊಮ್ಮೆ ಪುನರುಚ್ಚಿಸಿದೆ.











