ಬೆಂಗಳೂರು: 79ನೇ ಸ್ವಾತಂತ್ರ್ಯ ಸಂಭ್ರಮ ಎಲ್ಲೆಡೆ ಮನೆ ಮಾಡಿದ್ದು, ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಭಾಶಯಗಳನ್ನು ತಿಳಿಸಿದ್ದಾರೆ.
ನಾಡಿನ ಸಮಸ್ತೆ ಜನತೆಗೆ 79ನೇ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳು ಇಂದು ಭಾರತವು ಬ್ರಿಟಿಷರ ವಸಾಹತುಶಾಹಿ ಆಡಳಿತದಿಂದ ಮುಕ್ತಗೊಂಡ ಶುಭದಿನ. ಮಹಾತ್ಮ ಗಾಂಧೀಜಿ, ಜವಾಹರಲಾಲ್ ನೆಹರು, ಸರ್ದಾರ್ ವಲ್ಲಭಭಾಯಿ ಪಟೇಲ್, ಸುಭಾಷ್ ಚಂದ್ರ ಬೋಸ್, ಮೌಲಾನಾ ಅಬುಲ್ ಕಲಾಂ ಅಜಾದ್ ಮುಂತಾದ ಕೆಚ್ಚೆದೆಯ ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರರ ನೇತೃತ್ವದಲ್ಲಿ ದೇಶಾದ್ಯಂತ ಲಕ್ಷಾಂತರ ಹೋರಾಟಗಾರರು ತಮ್ಮ ತ್ಯಾಗ, ಬಲಿದಾನದ ಮೂಲಕ 1947ರ ಆಗಸ್ಟ್ 15ರಂದು ನಮ್ಮ ದೇಶಕ್ಕೆ ಸ್ವಾತಂತ್ರ್ಯವನ್ನು ಗಳಿಸಿಕೊಟ್ಟರು. ದೇಶದ ನಾಳೆಗಳನ್ನು ರೂಪಿಸುವ ಸಲುವಾಗಿ ತಮ್ಮ ಇಂದಿನ ಬದುಕನ್ನೇ ತ್ಯಾಗ ಮಾಡಿದ ಆ ಎಲ್ಲ ಮಹನೀಯರನ್ನು ನಾವು ಇಂದು ಮನದುಂಬಿ ಸ್ಮರಿಸೋಣ ಎಂದು ಹೇಳಿದ್ದಾರೆ.
ಧ್ವಜಾರೋಹಣ ನೆರವೇರಿಸಿ ರಾಜ್ಯದ ಜನತೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ನಾವೆಲ್ಲರೂ ಗಮನಿಸಿರುವ ಹಾಗೆ ನಮ್ಮ ಹೊಸ ತಲೆಮಾರು ಮೊಬೈಲ್ ಫೋನು, ಇಂಟರ್ನೆಟ್ಟು ಮುಂತಾದವುಗಳ ಭರಾಟೆಯಲ್ಲಿ ವಿಪರೀತ ತಲ್ಲಣಗಳನ್ನು ಎದುರಿಸುತ್ತಿದೆ. ಖಿನ್ನತೆ, ಆತಂಕ, ವಿನಾಕಾರಣ ಸಿಟ್ಟು, ದ್ವೇಷ ಮುಂತಾದ ಭಾವನೆಗಳಲ್ಲಿ ಸಿಲುಕಿ ಸಂಕಷ್ಟ ಪಡುತ್ತಿದೆ. ಈ ಸಾಮಾಜಿಕ ಸಮಸ್ಯೆಯನ್ನು ಹೋಗಲಾಡಿಸಲು ನಾವೆಲ್ಲರೂ ಸೇರಿ ಹೊಸ ದಾರಿಗಳನ್ನು ಹುಡುಕಿಕೊಳ್ಳಬೇಕಾಗಿದೆ. ಇದಕ್ಕಾಗಿ ನಾವು ‘ಮೊಬೈಲ್ ಬಿಡಿ – ಪುಸ್ತಕ ಹಿಡಿ’ ಎಂಬ ಹೊಸ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ ಎಂದರು.

ನುಡಿದಂತೆ ನಡೆದ ಸರ್ಕಾರ
ತಲಾದಾಯದಲ್ಲಿ ಕರ್ನಾಟಕ ದೇಶದಲ್ಲೇ ಮೊದಲಿದೆ. ನುಡಿದಂತೆ ನಡೆಯಬೇಕೆಂದ ಧೈರ್ಯ ವಾಕ್ಯದ ಮೂಲಕ ನಮ್ಮ ಸರ್ಕಾರ ತನ್ನದೇ ಆದ ಅಭಿವೃದ್ಧಿ ಮಾದರಿಗಳನ್ನು ನಿರ್ಮಿಸಿದೆ. ಇದಕ್ಕೆ ಕರ್ನಾಟಕ ಅಭಿವೃದ್ಧಿ ಮಾದರಿ ಎಂಬ ಹೆಸರಿನಲ್ಲಿ ಮನ್ನಣೆ ದೊರೆತಿರುವುದು ಹೆಮ್ಮೆಯ ಸಂಗತಿ ಎಂದು ಸಿದ್ದರಾಮ ಹೇಳಿದರು. ವಿಶ್ವಸಂಸ್ಥೆಯ ಮುಖ್ಯಸ್ಥರಾದ ಯಾಂಗ್ ರವರು ಕರ್ನಾಟಕಕ್ಕೆ ಬಂದು, ನಮ್ಮ ಗ್ಯಾರಂಟಿ ಯೋಜನೆಗಳನ್ನ ಮುಕ್ತ ಕಂಠದಿಂದ ಶ್ಲಾಘಿಸಿದ್ದಾರೆ. ಕೃಷಿ ವಲಯಕ್ಕೆ 2025-26ರ ಬಜೆಟ್ ನಲ್ಲಿ 51,339 ಕೋಟಿ ಒದಗಿಸಿದ್ದೇವೆ. 2022-23ಕ್ಕೆ ಹೋಲಿಸಿದರೆ ಶೇಕಡಾ 52.34 ರಷ್ಟು ಅನುದಾನವನ್ನು ಕೃಷಿಗೆ ಕೊಟ್ಟಿದ್ದೇವೆ. ನಮ್ಮ ಮೊದಲ ಆದ್ಯತೆ ಕೃಷಿ ಎಂದು ಅವರು ಹೇಳಿದರು.
ದೇಶದ ಪ್ರಮುಖ ಸಂಸ್ಥೆಗಳು ಮಾಡಿರುವ ಸಮೀಕ್ಷೆಗಳ ಪ್ರಕಾರ ಶೇ.10ರಷ್ಟಿರುವ ಶ್ರೀಮಂತರ ಬಳಿ ಶೇ.80ರಷ್ಟು ಸಂಪತ್ತು ಶೇಖರಣೆಯಾಗಿದೆ. ಆದರೆ ಶೇ. 10 ಜನ ಕೇವಲ ಶೇ.3ರಷ್ಟು ಮಾತ್ರ ಜಿಎಸ್ಟಿ ಪಾವತಿಸುತ್ತಿದ್ದರೆಂದು ಅಧ್ಯಯನಗಳು ಹೇಳುತ್ತಿವೆ. ಉಳಿದ ಶೇ.90ರಷ್ಟು ಜನ ಹೊಟ್ಟೆ-ಬಟ್ಟೆಗೆ ದುಡಿಯುವವರಾದ್ದರಿಂದ ಶೇ.97 ರಷ್ಟು ಜಿಎಸ್ಟಿ ಪಾವತಿಸುತ್ತಿದ್ದಾರೆ. ಇಂಥ ಪರಿಸ್ಥಿತಿಯಲ್ಲಿ ಯಾವ ಆರ್ಥಿಕತೆ ಮುಂದುವರೆಯಲು ಸಾಧ್ಯ? ಸಂವಿಧಾನದ ಆಶಯಗಳನ್ನು ಈಡೇರಿಸುವುದು ಹೇಗೆ? ಬೃಹದಾಕಾರವಾಗಿ ಬೆಳೆಯುತ್ತಿರುವ ಅಸಮಾನತೆಯನ್ನು ತಗ್ಗಿಸುವುದು ಹೇಗೆ? ಎಂಬ ಪ್ರಶ್ನೆಗಳು ನಮ್ಮನ್ನು ಬಾಧಿಸಲಾರಂಭಿಸಿದವು. ಈ ಬೃಹತ್ ಪ್ರಶ್ನೆಗಳಿಗೆ ಉತ್ತರ ಕಂಡುಕೊಳ್ಳುವ ಉದ್ದೇಶದಿಂದಲೇ ನಾವು ಗ್ಯಾರಂಟಿ ಯೋಜನೆಗಳು ಹಾಗೂ ಇನ್ನಿತರೆ ಜನ ಕಲ್ಯಾಣದ ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದೇವೆ ಎಂದು ಸಿಎಂ ಹೇಳಿದ್ದಾರೆ.

ಗ್ಯಾರಂಟಿ ಯೋಜನೆಗಳು ರಾಜ್ಯದ ಅಭಿವೃದ್ಧಿಯ ದಿಕ್ಕನ್ನೆ ಬದಲಾಯಿಸುತ್ತಿವೆ. 2023ರ ಮೇ ತಿಂಗಳಲ್ಲಿ ಅಧಿಕಾರಕ್ಕೆ ಬಂದ ಕೂಡಲೇ ನಾವು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲು ಆರಂಭಿಸಿದೆವು. ಅನ್ನಭಾಗ್ಯ, ಶಕ್ತಿ, ಗೃಹಲಕ್ಷ್ಮಿ, ಗೃಹ ಜ್ಯೋತಿ, ಯುವನಿಧಿ ಯೋಜನೆಗಳಿಗೆ ಈ ವರೆಗೆ 96,000 ಕೋಟಿ ರೂ.ಗಳಿಗೂ ಹೆಚ್ಚಿನ ಮೊತ್ತವನ್ನು ವಿನಿಯೋಗಿಸಿದ್ದೇವೆ. ಶಕ್ತಿ ಯೋಜನೆಯಲ್ಲಿ 500 ಕೋಟಿ ಟ್ರಿಪ್ಪುಗಳ ಮೂಲಕ ಮಹಿಳೆಯರು ಉಚಿತವಾಗಿ ಸರ್ಕಾರಿ ಬಸ್ಸುಗಳಲ್ಲಿ ಪ್ರಯಾಣ ಮಾಡಿದ್ದನ್ನು ಇತ್ತೀಚೆಗೆ ಆಚರಣೆ ಮಾಡಿದ್ದೇವೆ. ಮಧ್ಯವರ್ತಿಗಳ ಹಾವಳಿಯಿಲ್ಲದೆ ನೇರವಾಗಿ ಜನರಿಗೆ ತಲುಪುವ ಈ ಯೋಜನೆಗಳು ರಾಜ್ಯದ ಜನರ ತಲಾದಾಯವನ್ನು ಹೆಚ್ಚಿಸುತ್ತಿರುವುದಲ್ಲದೆ ಕಾರ್ಮಿಕ ಶಕ್ತಿಯಲ್ಲಿಮಹಿಳೆಯರ ಭಾಗವಹಿಸುವಿಕೆಯನ್ನು ಶೇ.23 ರಷ್ಟು ಹೆಚ್ಚಿಸಿವೆ ಎಂದು ಹಲವು ಅಧ್ಯಯನಗಳು ಹೇಳುತ್ತಿವೆ. ನಾವು ಶಕ್ತಿ ಯೋಜನೆಯನ್ನು ಜಾರಿಗೊಳಿಸುವುದರ ಜೊತೆಗೆ ಸಾರಿಗೆ ಇಲಾಖೆಗೆ ವಿವಿಧ ಮಾದರಿಯ ವಾಹನಗಳು ಸೇರಿದಂತೆ ಒಟ್ಟು 5,049 ಹೊಸ ಬಸ್ಸುಗಳ ಖರೀದಿ ಮತ್ತು 8,473 ಸಿಬ್ಬಂದಿಗಳನ್ನು ನೇಮಕ ಮಾಡಿಕೊಂಡಿದ್ದೇವೆ ಎಂದರು.