ತಾಜಾ ಸುದ್ದಿ ರಾಜಕೀಯ ಕ್ರೈಂ ನ್ಯೂಸ್ ರಾಜ್ಯ-ಜಿಲ್ಲೆ ದೇಶ-ವಿದೇಶ ಸೋಷಿಯಲ್ ಮೀಡಿಯಾ ಮನರಂಜನೆ ಕಾನೂನು ಜೀವನಶೈಲಿ ಕ್ರೀಡೆ ಗುರುಪರಂಪರೆ ವಿಡೀಯೋ English News

“ಬಡವರ ಜೇಬಿಗೆ 1 ಲಕ್ಷ ಕೋಟಿ ಹಾಕುತ್ತಿದ್ದೇವೆ” : ಡಿಸಿಎಂ ಡಿ.ಕೆ. ಶಿವಕುಮಾರ್

On: August 20, 2025 8:11 PM
Follow Us:

ಬೆಂಗಳೂರು: ಕಾಂಗ್ರೆಸ್ ಸರ್ಕಾರಗಳ ವಿವಿಧ ಜನಪರ ಯೋಜನೆಗಳಿಂದ ಬಡವರ ಜೇಬಿಗೆ 1 ಲಕ್ಷ ಕೋಟಿ ಹಣವನ್ನು ಹಾಕುತ್ತಿದ್ದೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಬುಧವಾರ ನಡೆದ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹಾಗೂ ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಅವರ ಜನ್ಮದಿನಾಚರಣೆ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಧೀಮಂತ ನಾಯಕರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು.

“ನಮ್ಮ ಸರ್ಕಾರ ಗ್ಯಾರಂಟಿ ಯೋಜನೆ ನೀಡಿ ಎರಡು ವರ್ಷವಾಗಿದೆ. ನೀವು ಇದರ ಬಗ್ಗೆ ಜನರಿಗೆ ನೆನಪಿಸುತ್ತಿರಬೇಕು. ನಾವು ಈ ಯೋಜನೆ ಜಾರಿ ಮಾಡಿ ನಿಮ್ಮ ಕೈಗೆ ಅಸ್ತ್ರ ನೀಡಿದ್ದೇವೆ. ನೀವು ಇದನ್ನು ಸರಿಯಾಗಿ ಬಳಸಿಕೊಳ್ಳಬೇಕು. ರೈತರ ಉಚಿತ ವಿದ್ಯುತ್ ಗೆ 20 ಸಾವಿರ ಕೋಟಿ, ವಿವಿಧ ಪಿಂಚಣಿ ಯೋಜನೆಗೆ 10 ಸಾವಿರ ಕೋಟಿ, ಪಂಚ ಗ್ಯಾರಂಟಿ ಯೋಜನೆಗೆ 52 ಸಾವಿರ ಕೋಟಿ, ಸಮಾಜ ಕಲ್ಯಾಣ ಯೋಜನೆಗಳಿಗೆ ಸೇರಿ 1 ಲಕ್ಷ ಕೋಟಿಯಷ್ಟು ಹಣವನ್ನು ನಮ್ಮ ಸರ್ಕಾರ ಬಡವರ ಜೇಬಿಗೆ ಹಾಕುತ್ತಿದೆ. ಈ 1 ಲಕ್ಷ ಕೋಟಿ ಹಣದಲ್ಲಿ ಬಿಜೆಪಿ ಅಥವಾ ದಳದವರ ಒಂದು ಕಾರ್ಯಕ್ರಮ ಇದೆಯೇ? ನಾನು ಶಾಸಕನಾಗಿದ್ದಾಗ ಜೆ.ಹೆಚ್ ಪಟೇಲರ ಕಾಲದಲ್ಲಿ ಪಂಚಾಯ್ತಿಗಳಿಗೆ 1 ಲಕ್ಷ ಅನುದಾನ ನೀಡಲಾಗುತ್ತಿತ್ತು. ಕೃಷ್ಣ ಅವರ ಕಾಲದಲ್ಲಿ ಅದನ್ನು 5 ಲಕ್ಷಕ್ಕೆ ಏರಿಕೆ ಮಾಡಿದೆವು. 27 ಇಲಾಖೆಯನ್ನು ಪಂಚಾಯ್ತಿಗೆ ಸೇರಿಸಿದೆವು. ಪಂಚಾಯ್ತಿಗೆ ಈ ರೀತಿ ಶಕ್ತಿ ತುಂಬಿದ್ದು ಕಾಂಗ್ರೆಸ್ ಪಕ್ಷ” ಎಂದು ತಿಳಿಸಿದರು.

ಜೆಡಿಎಸ್ ವಿಚಾರಕ್ಕೆ ಬಂದರೆ, ದೊಡ್ಡ ಗೌಡರು, ಅವರ ಮಕ್ಕಳು, ಮೊಮ್ಮಕ್ಕಳು ಯಾವ ತ್ಯಾಗ ಮಾಡಿದ್ದಾರೆ? ಇನ್ನು ಬಿಜೆಪಿ ವಿಚಾರಕ್ಕೆ ಬಂದರೆ ಸ್ವಾತಂತ್ರ್ಯ ಹೋರಾಟದಲ್ಲಿ ಅವರ ಕೊಡುಗೆ ಏನು? ಅಧಿಕಾರಕ್ಕೆ ಬಂದ ನಂತರ ಬಡವರಿಗೆ ಹೊಟ್ಟೆ ತುಂಬಿಸಿದ್ದಾರಾ? ಜಮೀನು ಕೊಟ್ಟಿದ್ದಾರಾ? ರೈತರಿಗೆ ಮೊದಲು ಉಚಿತ ವಿದ್ಯುತ್ ಕೊಟ್ಟಿದ್ದು ಬಂಗಾರಪ್ಪ, ನಾನು ಸಚಿವನಾದಾಗ 6 ತಾಸು ಇದ್ದ ವಿದ್ಯುತ್ ಅನ್ನು 7 ತಾಸಿಗೆ ಏರಿಸಿದೆ. ಮೊದಲು ಪ್ರತಿ ವರ್ಷ ಇದಕ್ಕಾಗಿ 800 ಕೋಟಿ ನೀಡುತ್ತಿದ್ದೆವು. ಈಗ 20 ಸಾವಿರ ಕೋಟಿ ನೀಡುತ್ತಿದ್ದೇವೆ ಎಂದು ತಿಳಿಸಿದರು.

21 ವಯೋಮಾನದವರಿಗಿದ್ದ ಮತದಾನದ ಹಕ್ಕನ್ನು 18 ವರ್ಷಕ್ಕೆ ಇಳಿಸಿದ್ದು ರಾಜೀವ್ ಗಾಂಧಿ ಅವರು. ಅಂತಹ ಧೀಮಂತ ನಾಯಕರನ್ನು ನಾವು ಸ್ಮರಿಸುತ್ತಿದ್ದೇವೆ ಎಂದರು.‌ ಈಗ ಬೇರೆ ಬೇರೆ ರಾಜ್ಯಗಳಲ್ಲಿ ಮುಖ್ಯಮಂತ್ರಿಯಾಗಿರುವ ಅನೇಕ ನಾಯಕರು ರಾಜೀವ್ ಗಾಂಧಿ ಅವರ ಕಾಲದಲ್ಲಿ ಬೆಳೆದು ಬಂದವರು. ಈ ದೇಶದ ಸಮಗ್ರತೆ, ಐಕ್ಯತೆ, ಶಾಂತಿಗಾಗಿ ನಮ್ಮ ಪಕ್ಷದ ನಾಯಕರು ಮಾಡಿರುವ ತ್ಯಾಗ ಬಲಿದಾನ ಬೇರೆ ಪಕ್ಷದ ನಾಯಕರು ಮಾಡಲು ಸಾಧ್ಯವಿಲ್ಲ. ರಾಹುಲ್ ಗಾಂಧಿ ಅವರು ವಿದ್ಯಾರ್ಥಿಗಳ ಚುನಾವಣೆ ನಡೆಸಲು ಪತ್ರ ಬರೆದಿದ್ದು, ಇದನ್ನು ಯಾವ ರೀತಿ ನಡೆಸಬೇಕು ಎಂದು ತೀರ್ಮಾನ ಮಾಡಲು ಸಮಿತಿ ರಚಿಸಲಿದ್ದೇನೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ತಿಳಿಸಿದರು.

K.M.Sathish Gowda

Join WhatsApp

Join Now

Facebook

Join Now

Leave a Comment