ಬೆಳ್ತಂಗಡಿ: ಧರ್ಮಸ್ಥಳದ ವಿರುದ್ಧ ಹೋರಾಟ ನಡೆಸುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿಯನ್ನು ಇಂದು ಪೊಲೀಸರು ಆತನ ನಿವಾಸದಿಂದ ವಶಕ್ಕೆ ಪಡೆದಿದ್ದಾರೆ. ಅವರ ವಿರುದ್ಧ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾದ ಹಿನ್ನೆಲೆ ಅವರ ನಿವಾಸಕ್ಕೆ ಆಗಮಿಸಿದ ಪೊಲೀಸರು ವಶಕ್ಕೆ ಪಡೆದು ಅವರದ್ದೇ ಕಾರಿನಲ್ಲಿ ಕರೆದೊಯ್ದಿದ್ದಾರೆ. ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ್ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಅವಹೇಳನ ಮಾಡಿರುವ ಕುರಿತು ದೂರು ಸಲ್ಲಿಸಲಾಗಿತ್ತು.
ಉಡುಪಿ ಗ್ರಾಮಾಂತರ ಬಿಜೆಪಿಯ ಮಂಡಲಾಧ್ಯಕ್ಷ ರಾಜೀವ ಕುಲಾಲ್ ಅವರು ದೂರು ನೀಡಿದ್ದರು. ಈ ನಿಟ್ಟಿನಲ್ಲಿ ಆತನನ್ನು ವಶಕ್ಕೆ ಪಡೆಯಲು ಉಡುಪಿ ಪೊಲೀಸರ ತಂಡ ಉಜಿರೆಯ ತಿಮರೋಡಿಯಲ್ಲಿರುವ ಮಹೇಶ್ ಶೆಟ್ಟಿ ನಿವಾಸಕ್ಕೆ ಆಗಮಿಸಿತ್ತು. ಈ ವೇಳೆ ಅವರನ್ನು ಬಂಧಿಸದಂತೆ ಬೆಂಬಲಿಗರು ಆಕ್ರೋಶ ವ್ಯಕ್ತಪಡಿಸಿದ್ದರು. ಈ ವೇಳೆ ಮಹೇಶ್ ಶೆಟ್ಟಿ ಪರ ಘೋಷಣೆ ಕೂಗಿ ಕೆಲ ಹೊತ್ತು ಬಿಗುವಿನ ವಾತಾವರಣ ಸೃಷ್ಟಿಯಾಗಿತ್ತು. ಬಂಧನದ ವೇಳೆ ಮಹೇಶ್ ಶೆಟ್ಟಿ, ನನ್ನ ಜೀವಕ್ಕೆ ಏನಾದರೂ ಅಪಾಯ ಆದರೆ ಅದಕ್ಕೆ ರಾಜ್ಯ ಸರ್ಕಾರ ಮತ್ತು ಬಿಜೆಪಿಯೇ ಕಾರಣವಾಗುತ್ತದೆ. ನೊಟೀಸ್ ನೀಡದೇ ನನ್ನನ್ನು ಬಂಧಿಸಲಾಗುತ್ತಿದೆ. ಹೀಗೆ ಕರೆದೊಯ್ದು ನನ್ನನ್ನು ಏನು ಬೇಕಾದರೂ ಮಾಡುವ ಸಾಧ್ಯತೆ ಇದೆ ಎಂದು ಕೂಗಾಡಿದ್ದಾರೆ.
ಏನಿದು ಪ್ರಕರಣ?
ಆಗಸ್ಟ್ 16ರಂದು ಫೇಸ್‌ಬುಕ್ ಪೇಜ್‌ನಲ್ಲಿ ಮಹೇಶ ಶೆಟ್ಟಿ ತಿಮರೋಡಿಯು ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ್ ಅವರ ಬಗ್ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ತೇಜೋವಧೆ ಮಾಡಿ ಹಿಂಧೂ ಧರ್ಮದ ನಾಯಕನನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ಆರೋಪಿಸಿ ಮಹೇಶ ಶೆಟ್ಟಿ ತಿಮರೋಡಿಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಉಡುಪಿ ಗ್ರಾಮಾಂತರ ಬಿಜಿಪಿಯ ಮಂಡಲಾಧ್ಯಕ್ಷ ರಾಜೀವ ಕುಲಾಲ್ ಅವರು ದೂರು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ತಿಮರೋಡಿ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ತಿಳಿದುಬಂದಿದೆ.








