ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಜಾಮೀನು ರದ್ದು ಮಾಡಿದ ಹಿನ್ನೆಲೆಯಲ್ಲಿ ನಟ ದರ್ಶನ್ ಪ್ರಸ್ತುತ ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲಿನಲ್ಲಿದ್ದಾರೆ. ಆದರೆ, ಅವರನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರಿಸಲು ಜೈಲಾಧಿಕಾರಿಗಳು ಎಸ್ಪಿಪಿ ಮೂಲಕ ಅರ್ಜಿ ಸಲ್ಲಿಸಿದ್ದು, ಇದರ ವಿಚಾರಣೆಯನ್ನು ಬೆಂಗಳೂರಿನ ಸೇಷನ್ಸ್ ಕೋರ್ಟ್ ಶನಿವಾರ ಸೆಪ್ಟೆಂಬರ್ 2ಕ್ಕೆ ಮುಂದೂಡಿದೆ.
ಜೈಲು ಭದ್ರತೆ ಮತ್ತು ಆಡಳಿತಾತ್ಮಕ ಕಾರಣಗಳನ್ನು ಉಲ್ಲೇಖಿಸಿ ಆರೋಪಿಗಳನ್ನು ಬೇರೆ ಬೇರೆ ಜೈಲುಗಳಿಗೆ ಸ್ಥಳಾಂತರಿಸುವಂತೆ ಅರ್ಜಿ ಸಲ್ಲಿಸಲಾಗಿದೆ. ಈ ಮೊದಲಿನಂತೆ ದರ್ಶನ್ ಅವರನ್ನು ಬಳ್ಳಾರಿ ಜೈಲಿಗೆ, ಜಗದೀಶ್ ಮತ್ತು ಲಕ್ಷ್ಮಣ್ ಅವರನ್ನು ಶಿವಮೊಗ್ಗ ಜೈಲಿಗೆ, ನಾಗರಾಜ್ ಅವರನ್ನು ಕಲಬುರಗಿ ಜೈಲಿಗೆ, ಪ್ರದೂಷ್ ಅವರನ್ನು ಬೆಳಗಾವಿ ಜೈಲಿಗೆ ವರ್ಗಾಯಿಸುವ ಪ್ರಸ್ತಾಪ ಮಾಡಲಾಗಿದೆ. ಆದರೆ ಪವಿತ್ರಾ ಗೌಡ ಮತ್ತು ಅನುಕುಮಾರ್ ಪರಪ್ಪನ ಅಗ್ರಹಾರ ಜೈಲಿನಲ್ಲೇ ಉಳಿಯುವಂತೆ ಮನವಿ ಸಲ್ಲಿಸಲಾಗಿದೆ.
ಇದೇ ವೇಳೆ ದರ್ಶನ್ ಪರ ವಕೀಲರು, ಪರಪ್ಪನ ಅಗ್ರಹಾರ ಜೈಲಿನಿಂದ ಸ್ಥಳಾಂತರಿಸಬಾರದು ಎಂದು ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ. ಅಲ್ಲದೇ, ದರ್ಶನ್ ಅವರಿಗೆ ದಿಂಬು, ಬೆಡ್ ಶೀಟ್ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಬೇಕೆಂಬ ಬೇಡಿಕೆ ಕೂಡ ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.
ಇದಕ್ಕೂ ಮೊದಲು ದರ್ಶನ್ ಪರಪ್ಪನ ಅಗ್ರಹಾರ ಜೈಲಿನಲ್ಲಿ ರೌಡಿಗಳ ಜೊತೆ ರಾಜಾತಿಥ್ಯ ಪಡೆದುಕೊಂಡಿದ್ದರೆಂಬ ವರದಿಗಳ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಜೈಲು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿತ್ತು. ಈ ಬಾರಿ ಅಂತಹ ತಪ್ಪು ಮರುಕಳಿಸದಂತೆ ಎಚ್ಚರಿಕೆ ನೀಡಲಾಗಿದೆ.