ನವದೆಹಲಿ, ಸೆಪ್ಟೆಂಬರ್ 9: ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವ ಕುರಿತು ಬಿಜೆಪಿ ನಿಯೋಗವೊಂದು ನವದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದೆ. ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ಅಪಪ್ರಚಾರದಿಂದ ಹಿಡಿದು, ಹಿಂದೂ ಕಾರ್ಯಕರ್ತರ ಮೇಲೆ ನಡೆಯುತ್ತಿರುವ ಕೊಲೆ, ದೌರ್ಜನ್ಯ ಪ್ರಕರಣಗಳ ತನಕದ ವಿಷಯಗಳನ್ನು ಗೃಹಮಂತ್ರಿಗಳಿಗೆ ವಿವರಿಸಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಹಿಂದೂ ಸಮಾಜದ ಮೇಲೆ ದೌರ್ಜನ್ಯಗಳು ಮಿತಿಮೀರಿವೆ ಎಂದು ಆರೋಪಿಸಿದ್ದಾರೆ.
“ಸುಹಾಸ್ ಶೆಟ್ಟಿ ಕೊಲೆ, ಕೊಪ್ಪಳದ ಗವಿಸಿದ್ದಪ್ಪ ನಾಯಕನ ಹತ್ಯೆ, ನಿರಂತರವಾಗಿ ನಡೆಯುತ್ತಿರುವ ಅತ್ಯಾಚಾರ, ಸುಲಿಗೆ ಹಾಗೂ ಕೊಲೆ ಪ್ರಕರಣಗಳು ಜನರ ನೆಮ್ಮದಿ ಕಸಿದುಕೊಂಡಿವೆ. ಮತಾಂಧ ಶಕ್ತಿಗಳ ಅಟ್ಟಹಾಸಕ್ಕೆ ಸರ್ಕಾರ ಕಣ್ಣು ಮುಚ್ಚಿದೆ” ಎಂದು ಹೇಳಿದ್ದಾರೆ.

ಇತ್ತೀಚಿನ ಮದ್ದೂರಿನ ಗಣೇಶೋತ್ಸವ ಮೆರವಣಿಗೆಯ ಮೇಲೆ ನಡೆದ ಕಲ್ಲುತೂರಾಟವನ್ನು ಉದಾಹರಿಸಿದ ವಿಜಯೇಂದ್ರ, ಮಹಿಳೆಯರು ಮತ್ತು ಮಕ್ಕಳ ಮೇಲೆಯೂ ದಾಳಿ ನಡೆದಿದ್ದರೂ, ಪೊಲೀಸರೇ ಪ್ರತಿಭಟಕರ ಮೇಲೆ ಲಾಠಿ ಪ್ರಹಾರ ನಡೆಸಿದ ಘಟನೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. “ಹಿಂದೂ ಧಾರ್ಮಿಕ ಹಬ್ಬ-ಉತ್ಸವಗಳನ್ನು ಸಡಗರದಿಂದ ಆಚರಿಸಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ” ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಹುಬ್ಬಳ್ಳಿ ಮತ್ತು ಬೆಂಗಳೂರಿನಲ್ಲಿ ಪೊಲೀಸ್ ಠಾಣೆಗಳ ಮೇಲೆ ದಾಳಿ ನಡೆಸಿದ ಆರೋಪಿಗಳ ವಿರುದ್ಧ ಹೂಡಲಾಗಿದ್ದ ಪ್ರಕರಣಗಳನ್ನು ಹಿಂತೆಗೆದುಕೊಳ್ಳುವ ಮೂಲಕ ಕಾಂಗ್ರೆಸ್ ಸರ್ಕಾರ ದುಷ್ಕೃತ್ಯಗಳಿಗೆ ಪರೋಕ್ಷವಾಗಿ ಬೆಂಬಲ ನೀಡುತ್ತಿದೆ ಎಂದು ಬಿಜೆಪಿ ನಾಯಕರು ಆರೋಪಿಸಿದ್ದಾರೆ.
ಕೇಂದ್ರ ಗೃಹ ಸಚಿವರಿಗೆ ಸಲ್ಲಿಸಲಾದ ಮನವಿಯಲ್ಲಿ, ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಮರುಸ್ಥಾಪನೆಗಾಗಿ ಕೇಂದ್ರ ಸರ್ಕಾರ ವಿಶೇಷ ನಿಗಾವಹಿಸಲು ಒತ್ತಾಯಿಸಿದ್ದಾರೆ.
ಈ ಸಂದರ್ಭದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ವಿಧಾನಸಭಾ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಚಾಲವಾದಿ ನಾರಾಯಣಸ್ವಾಮಿ, ಸಂಸದರು ಕೋಟಾ ಶ್ರೀನಿವಾಸ ಪೂಜಾರಿ, ಕ್ಯಾಪ್ಟನ್ ಬ್ರಿಜೇಶ್, ಶಾಸಕರು ಎಸ್.ಆರ್. ವಿಶ್ವನಾಥ್, ಹರೀಶ್ ಪೂಂಜ, ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಸೇರಿದಂತೆ ಹಲವರು ಉಪಸ್ಥಿತರಿದ್ದರು.