ತಾಜಾ ಸುದ್ದಿ ರಾಜಕೀಯ ಕ್ರೈಂ ನ್ಯೂಸ್ ರಾಜ್ಯ-ಜಿಲ್ಲೆ ದೇಶ-ವಿದೇಶ ಸೋಷಿಯಲ್ ಮೀಡಿಯಾ ಮನರಂಜನೆ ಕಾನೂನು ಜೀವನಶೈಲಿ ಕ್ರೀಡೆ ಗುರುಪರಂಪರೆ ವಿಡೀಯೋ English News

ಮೂಲಸೌಕರ್ಯ ಯೋಜನೆಗಳಿಗೆ ವೇಗ: ನಿಗದಿತ ಅವಧಿಯಲ್ಲಿ ಕಾಮಗಾರಿಗಳ ಪೂರ್ಣತೆಗೆ ಸಿಎಂ ಸಿದ್ದರಾಮಯ್ಯ ಕಟ್ಟುನಿಟ್ಟಿನ ಸೂಚನೆ

On: December 29, 2025 9:45 PM
Follow Us:

ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ಪ್ರಮುಖ ಮೂಲಸೌಕರ್ಯ ಯೋಜನೆಗಳ ಪ್ರಗತಿ ಪರಿಶೀಲನೆಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಉನ್ನತ ಮಟ್ಟದ ಸಭೆ ನಡೆಸಿದರು. ಸಭೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳಿಂದ ಕಾಮಗಾರಿಗಳ ಸ್ಥಿತಿಗತಿ ಕುರಿತು ಮಾಹಿತಿ ಪಡೆದು, ಎಲ್ಲ ಯೋಜನೆಗಳನ್ನು ನಿಗದಿತ ಅವಧಿಯೊಳಗೆ ಕಡ್ಡಾಯವಾಗಿ ಪೂರ್ಣಗೊಳಿಸಬೇಕು ಎಂದು ಸ್ಪಷ್ಟ ಸೂಚನೆ ನೀಡಿದರು. ಯಾವುದೇ ಕಾರಣಕ್ಕೂ ವಿಳಂಬವಾಗಬಾರದು, ಜನಸಾಮಾನ್ಯರಿಗೆ ಯೋಜನೆಗಳ ಲಾಭ ತಲುಪುವಂತಾಗಬೇಕು ಎಂಬುದೇ ಸರ್ಕಾರದ ಆದ್ಯತೆ ಎಂದು ಸಿಎಂ ಹೇಳಿದರು.

ರೈಲ್ವೇ ಮೂಲಸೌಕರ್ಯ ಅಭಿವೃದ್ಧಿಗೆ ಸಂಬಂಧಿಸಿದಂತೆ ಮಾತನಾಡಿದ ಮುಖ್ಯಮಂತ್ರಿ, ರಾಜ್ಯದಲ್ಲಿನ ವಿವಿಧ ರೈಲ್ವೇ ಯೋಜನೆಗಳಿಗೆ ಸಂಬಂಧಿಸಿದ ಭೂಸ್ವಾಧೀನ ಪ್ರಕ್ರಿಯೆಯನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು. ಭೂಸ್ವಾಧೀನದಲ್ಲಿ ಉಂಟಾಗುವ ಅಡಚಣೆಗಳಿಂದ ಯೋಜನೆಗಳು ಹಿಂದುಳಿಯಬಾರದು. ರೈತರಿಗೆ ನ್ಯಾಯಸಮ್ಮತ ಪರಿಹಾರ ನೀಡುವ ಮೂಲಕ ಪ್ರಕ್ರಿಯೆಯನ್ನು ವೇಗಗೊಳಿಸಬೇಕು ಎಂದು ಅವರು ನಿರ್ದೇಶನ ನೀಡಿದರು.

ಸಭೆಯಲ್ಲಿ ರಾಜ್ಯದ ವಿಮಾನ ನಿಲ್ದಾಣಗಳ ಕಾಮಗಾರಿಗಳ ಪ್ರಗತಿಯನ್ನೂ ಪರಿಶೀಲಿಸಲಾಯಿತು. ಪ್ರಸ್ತುತ ರಾಜ್ಯದಲ್ಲಿ ಒಟ್ಟು ಆರು ವಿಮಾನ ನಿಲ್ದಾಣಗಳ ಕಾಮಗಾರಿಗಳು ಅನುಷ್ಠಾನದ ವಿವಿಧ ಹಂತಗಳಲ್ಲಿ ಸಾಗುತ್ತಿವೆ ಎಂದು ಅಧಿಕಾರಿಗಳು ತಿಳಿಸಿದರು. ಹಾಸನ ವಿಮಾನ ನಿಲ್ದಾಣಕ್ಕೆ ಸಂಬಂಧಿಸಿದಂತೆ ಭೂಸ್ವಾಧೀನ ಪರಿಹಾರವನ್ನು ರೈತರಿಗೆ ಆದಷ್ಟು ಬೇಗನೆ ವಿತರಿಸಬೇಕು ಎಂದು ಮುಖ್ಯಮಂತ್ರಿ ಕಟ್ಟುನಿಟ್ಟಿನ ಸೂಚನೆ ನೀಡಿದರು. ಅಲ್ಲದೆ, ಎಲ್ಲ ವಿಮಾನ ನಿಲ್ದಾಣಗಳ ಕಾಮಗಾರಿಗಳನ್ನು ಪೂರ್ಣಗೊಳಿಸುವಲ್ಲಿ ಎದುರಾಗಿರುವ ತಾಂತ್ರಿಕ ಹಾಗೂ ಆಡಳಿತಾತ್ಮಕ ಅಡಚಣೆಗಳನ್ನು ಕೂಡಲೇ ನಿವಾರಿಸಿ, ಯೋಜನೆಗಳು ನಿಗದಿತ ಸಮಯದಲ್ಲಿ ಪೂರ್ಣಗೊಳ್ಳುವಂತೆ ಕ್ರಮ ಕೈಗೊಳ್ಳಬೇಕೆಂದು ಹೇಳಿದರು.

ಇದಕ್ಕೂ ಮೊದಲು ಸಭೆಯಲ್ಲಿ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಯೋಜನೆಯಡಿ ಮೆಕ್ಕೆಜೋಳ ಖರೀದಿ ವಿಷಯ ಚರ್ಚೆಗೆ ಬಂದಿತು. ಇದುವರೆಗೆ ರಾಜ್ಯದಲ್ಲಿ ಒಟ್ಟು 17,350 ಮೆಟ್ರಿಕ್ ಟನ್ ಮೆಕ್ಕೆಜೋಳ ಖರೀದಿಸಲಾಗಿದ್ದು, ಇನ್ನೂ 76,430 ಮೆಟ್ರಿಕ್ ಟನ್ ಮೆಕ್ಕೆಜೋಳ ಖರೀದಿಸಲು ಬಾಕಿಯಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು. ಒಟ್ಟು 93,782 ಮೆಟ್ರಿಕ್ ಟನ್ ಮೆಕ್ಕೆಜೋಳ ಖರೀದಿಗೆ ಇಂಡೆಂಟ್ ಪಡೆಯಲಾಗಿದೆ. ನಿಗದಿತ ಪ್ರಮಾಣದ ಮೆಕ್ಕೆಜೋಳವನ್ನು ಯಾವುದೇ ವಿಳಂಬವಿಲ್ಲದೆ ಖರೀದಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಅಧಿಕಾರಿಗಳಿಗೆ ಸೂಚಿಸಿದರು.

ಎಥೆನಾಲ್ ಉತ್ಪಾದನೆಗಾಗಿ ಮೆಕ್ಕೆಜೋಳ ಖರೀದಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರ ಮನವಿ ಸಲ್ಲಿಸಿದ್ದರೂ ಇದುವರೆಗೆ ಯಾವುದೇ ಸ್ಪಷ್ಟ ಪ್ರತಿಕ್ರಿಯೆ ಬಂದಿಲ್ಲ ಎಂಬ ವಿಷಯವೂ ಸಭೆಯಲ್ಲಿ ಪ್ರಸ್ತಾಪವಾಯಿತು. ಕೇಂದ್ರ ಸರ್ಕಾರ ರಾಜ್ಯದ ಮೆಕ್ಕೆಜೋಳ ಬೆಳೆಗಾರರ ಕುರಿತು ನಕಾರಾತ್ಮಕ ಧೋರಣೆ ತಾಳುತ್ತಿದೆ ಎಂದು ಸಿಎಂ ಅಸಮಾಧಾನ ವ್ಯಕ್ತಪಡಿಸಿದರು. ಈ ಹಿನ್ನೆಲೆಯಲ್ಲಿ ಕೇಂದ್ರದ ಪ್ರತಿಕ್ರಿಯೆಗಾಗಿ ಕಾಯದೆ, ಇಂಡೆಂಟ್ ನಿಗದಿಪಡಿಸಿರುವ ಪ್ರಮಾಣದಷ್ಟು ಮೆಕ್ಕೆಜೋಳವನ್ನು ಸ್ಥಳೀಯ ಸಂಸ್ಥೆಗಳ ಮೂಲಕ ಖರೀದಿಸುವಂತೆ ಕ್ರಮ ಕೈಗೊಳ್ಳಬೇಕು ಎಂದು ಅವರು ನಿರ್ದೇಶನ ನೀಡಿದರು.

ಒಟ್ಟಾರೆ ಸಭೆಯಲ್ಲಿ ಮೂಲಸೌಕರ್ಯ ಅಭಿವೃದ್ಧಿ, ರೈತಪರ ನೀತಿಗಳು ಹಾಗೂ ಯೋಜನೆಗಳ ಸಮಯಬದ್ಧ ಅನುಷ್ಠಾನಕ್ಕೆ ಸರ್ಕಾರ ಬದ್ಧವಾಗಿದೆ ಎಂಬುದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪುನರುಚ್ಚರಿಸಿದರು. ಜನಹಿತದ ಯೋಜನೆಗಳಲ್ಲಿ ನಿರ್ಲಕ್ಷ್ಯಕ್ಕೆ ಅವಕಾಶ ಇಲ್ಲ ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

K.M.Sathish Gowda

Join WhatsApp

Join Now

Facebook

Join Now

Leave a Comment