ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ ರಾಜ್ಯ ಬಜೆಟ್ ‘ಖಾಲಿ ಚೊಂಬಿನಂತಿದೆ’ ಎಂದು ಆರೋಪಿಸಿ ಭಾರತೀಯ ಜನತಾ ಪಕ್ಷದ ನಾಯಕರು ಇಂದು ವಿಧಾನಸೌಧದ ಬಳಿ ಪ್ರತಿಭಟನೆ ನಡೆಸಿದರು.
ಪ್ರತಿಭಟನೆಯಲ್ಲಿ ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ, ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಉಪ ನಾಯಕ ಅರವಿಂದ ಬೆಲ್ಲದ, ವಿಧಾನಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್. ರವಿಕುಮಾರ್ ಸೇರಿದಂತೆ ಮಾಜಿ ಸಚಿವರು, ಶಾಸಕರು ಹಾಗೂ ವಿಧಾನಪರಿಷತ್ ಸದಸ್ಯರು ಭಾಗವಹಿಸಿದ್ದರು.

“ಕನ್ನಡಿಗರಿಗೆ ಖಾಲಿ ಚೊಂಬು ಕೊಟ್ಟ ಕಾಂಗ್ರೆಸ್ ಸರ್ಕಾರ” ಎಂಬ ಫಲಕಗಳನ್ನು ಹಿಡಿದು ನಾಯಕರು ಹಾಗೂ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಹಲವರು ಕೈಯಲ್ಲಿ ಖಾಲಿ ಚೊಂಬುಗಳನ್ನು ಹಿಡಿದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಯ ವೇಳೆ “ಯುವಕರಿಗೆ ಮೋಸ ಮಾಡಿದ ಸರ್ಕಾರಕ್ಕೆ ಧಿಕ್ಕಾರ”, “ಮೂರು ವರ್ಷಗಳಲ್ಲಿ ಮೂರೂವರೆ ಲಕ್ಷ ಕೋಟಿ ಸಾಲ ಮಾಡಿದ ಸರ್ಕಾರಕ್ಕೆ ಧಿಕ್ಕಾರ”, “ಬಜೆಟ್ ಹೆಸರಿನಲ್ಲಿ ಖಾಲಿ ಚೊಂಬು ನೀಡಿದ ಸರ್ಕಾರಕ್ಕೆ ಧಿಕ್ಕಾರ” ಎಂಬ ಘೋಷಣೆಗಳನ್ನು ಕೂಗಿದರು.

ಇದೇ ವೇಳೆ “ರಾಜ್ಯದ ಜನರಿಗೆ ಖಾಲಿ ಚೊಂಬು ನೀಡಿದ ಸಿದ್ದರಾಮಯ್ಯ ಅವರಿಗೆ ಧಿಕ್ಕಾರ”, “ಕನ್ನಡಿಗರಿಗೆ ಖಾಲಿ ಚೊಂಬು ನೀಡಿದ ಸರ್ಕಾರಕ್ಕೆ ಧಿಕ್ಕಾರ”, “ರಾಜ್ಯದ ರೈತರಿಗೆ ಖಾಲಿ ಚೊಂಬು ಕೊಟ್ಟ ಸರ್ಕಾರಕ್ಕೆ ಧಿಕ್ಕಾರ” ಎಂದು ಘೋಷಣೆಗಳನ್ನು ಕೂಗಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.







