ಬೆಂಗಳೂರು: ಮಲೆನಾಡು ಭಾಗದ ಹೆಮ್ಮೆಯ ಶಿಕ್ಷಣ ಸಂಸ್ಥೆಯಾದ ಕುವೆಂಪು ವಿಶ್ವವಿದ್ಯಾಲಯದ ಆಡಳಿತದಲ್ಲಿ ಉಂಟಾಗಿರುವ ಗೊಂದಲಗಳು ಹಾಗೂ ಭ್ರಷ್ಟಾಚಾರದ ಆರೋಪಗಳು ರಾಜ್ಯದ ಶೈಕ್ಷಣಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗುತ್ತಿರುವ ಹಿನ್ನೆಲೆಯಲ್ಲಿ, ವಿಧಾನ ಪರಿಷತ್‌ನಲ್ಲಿ ಈ ವಿಚಾರವನ್ನು ಪ್ರಸ್ತಾಪಿಸಿ ವಿಧಾನ ಪರಿಷತ್ ಸದಸ್ಯರು ಹಾಗೂ ರಾಜ್ಯ ಬಿಜೆಪಿ ಕಾರ್ಯದರ್ಶಿಗಳಾದ ಡಿ.ಎಸ್. ಅರುಣ್ ಸರ್ಕಾರದ ಮೌನದ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದರು.
ವಿಧಾನ ಪರಿಷತ್‌ನ ಶೂನ್ಯವೇಳೆಯಲ್ಲಿ ವಿಷಯವನ್ನು ಉಲ್ಲೇಖಿಸಿದ ಅವರು, ಕುವೆಂಪು ವಿಶ್ವವಿದ್ಯಾಲಯದ ಕುಲಸಚಿವರ ವಿರುದ್ಧ ಹಲವು ಹಗರಣಗಳು, ಭ್ರಷ್ಟಾಚಾರ ಮತ್ತು ಕರ್ತವ್ಯ ಲೋಪದಂತಹ ಗಂಭೀರ ಆರೋಪಗಳು ಕೇಳಿಬರುತ್ತಿರುವುದು ಅತ್ಯಂತ ಆತಂಕಕಾರಿ ಬೆಳವಣಿಗೆಯಾಗಿದೆ ಎಂದು ಹೇಳಿದರು. ಈ ಆರೋಪಗಳು ಶಿಕ್ಷಣ ಸಂಸ್ಥೆಯ ವಿಶ್ವಾಸಾರ್ಹತೆ ಮತ್ತು ಆಡಳಿತದ ಮೇಲೆ ಗಂಭೀರ ಪ್ರಶ್ನೆಗಳನ್ನು ಎಬ್ಬಿಸುತ್ತಿವೆ ಎಂದು ಅವರು ತಿಳಿಸಿದರು.
ವಿಶ್ವವಿದ್ಯಾಲಯದ ಕುಲಸಚಿವರು ಹಾಗೂ ಕುಲಪತಿಗಳ ನಡುವೆ ಹೊಂದಾಣಿಕೆಯ ಕೊರತೆ ಉಂಟಾಗಿರುವುದು ಆಡಳಿತ ವ್ಯವಸ್ಥೆಯ ಸುಸೂತ್ರ ಕಾರ್ಯಾಚರಣೆಗೆ ಅಡ್ಡಿಯಾಗುತ್ತಿರುವುದಲ್ಲದೆ, ಶೈಕ್ಷಣಿಕ ವಾತಾವರಣದ ಮೇಲೂ ಕೆಟ್ಟ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ಡಿ.ಎಸ್. ಅರುಣ್ ಎಚ್ಚರಿಸಿದರು. ಇಂತಹ ಗೊಂದಲಗಳು ಮುಂದುವರಿದರೆ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಸಿಬ್ಬಂದಿಯ ನಡುವೆ ಅನಿಶ್ಚಿತತೆ ಮತ್ತು ಅಸಮಾಧಾನ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಅವರು ಹೇಳಿದರು.

ಮಲೆನಾಡಿನ ಸಾವಿರಾರು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಪ್ರತಿಷ್ಠಿತ ಸಂಸ್ಥೆಯಾಗಿರುವ ಕುವೆಂಪು ವಿಶ್ವವಿದ್ಯಾಲಯದ ಗೌರವ ಮತ್ತು ಘನತೆಯನ್ನು ಕಾಪಾಡುವುದು ರಾಜ್ಯ ಸರ್ಕಾರದ ಪ್ರಮುಖ ಹೊಣೆಗಾರಿಕೆಯಾಗಿದೆ. ಆದ್ದರಿಂದ ಆಡಳಿತದಲ್ಲಿ ಉಂಟಾಗಿರುವ ಗೊಂದಲಗಳು ಮತ್ತು ಆರೋಪಗಳನ್ನು ತಕ್ಷಣವೇ ಪರಿಶೀಲಿಸಿ, ಸತ್ಯಾಸತ್ಯತೆ ತಿಳಿದು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದರು.
ಈ ಸಂದರ್ಭ ಉನ್ನತ ಶಿಕ್ಷಣ ಸಚಿವರು ಕೂಡ ಪ್ರತಿಕ್ರಿಯಿಸಿ, ವಿಷಯವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿರುವುದಾಗಿ ತಿಳಿಸಿದರು. ಆರೋಪಗಳ ಬಗ್ಗೆ ಸೂಕ್ತ ತನಿಖೆ ನಡೆಸಿ, ಅಗತ್ಯ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ ಎಂದು ಅವರು ಹೇಳಿದರು. ಜೊತೆಗೆ ಸಂಬಂಧಿಸಿದ ಅಧಿಕಾರಿಯನ್ನು ತಕ್ಷಣ ವರ್ಗಾವಣೆ ಮಾಡಲು ನಿರ್ದೇಶನ ನೀಡಿರುವುದಾಗಿ ಸಚಿವರು ಭರವಸೆ ನೀಡಿದರು.
ಶೈಕ್ಷಣಿಕ ಸಂಸ್ಥೆಗಳ ಮೇಲೆ ಸಾರ್ವಜನಿಕ ವಿಶ್ವಾಸ ಕಾಪಾಡುವುದು ಅತ್ಯಂತ ಅಗತ್ಯವಾಗಿದ್ದು, ಆಡಳಿತದಲ್ಲಿ ಪಾರದರ್ಶಕತೆ ಮತ್ತು ಶಿಸ್ತನ್ನು ಕಟ್ಟುನಿಟ್ಟಾಗಿ ಅನುಸರಿಸುವ ಮೂಲಕ ಕುವೆಂಪು ವಿಶ್ವವಿದ್ಯಾಲಯದ ಗೌರವವನ್ನು ಉಳಿಸಬೇಕೆಂದು ಡಿ.ಎಸ್. ಅರುಣ್ ಒತ್ತಾಯಿಸಿದರು.







